ಮಂಗಳೂರು:
ಪೊಲೀಸ್ ಠಾಣೆಯ ಎದುರಿನಲ್ಲೇ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ತಡರಾತ್ರಿ ಪುತ್ತೂರು ತಾಲೂಕಿನಲ್ಲಿ ನಡೆದಿದೆ.
ಹಿಂದೂ ಜಾಗರಣ ವೇದಿಕೆ ತಾಲೂಕು ಕಾರ್ಯದರ್ಶಿ ಕಾರ್ತಿಕ್ ಮೇರ್ಲ (30) ಕೊಲೆಯಾದ ವ್ಯಕ್ತಿ. ನಿನ್ನೆ ರಾತ್ರಿ 11:30 ರ ಸುಮಾರಿಗೆ ಸಂಪ್ಯ ಪೊಲೀಸ್ ಠಾಣೆ ಮುಂಭಾಗದಲ್ಲಿ ತಡರಾತ್ರಿ ನಡೆಯುತ್ತಿದ್ದ ಗಣೇಶೋತ್ಸವ ಕಾರ್ಯಕ್ರಮದ ಸಂದರ್ಭದಲ್ಲಿ ಸಾರ್ವಜನಿಕರ ಎದುರಿನಲ್ಲಿಯೇ ಕಾರ್ತಿಕ್ ನನ್ನು ದುಷ್ಕರ್ಮಿಗಳು ಕೊಚ್ಚಿ ಕೊಲೆ ಮಾಡಿದ್ದು, ನೆರೆದಿದ್ದ ಸಾರ್ವಜನಿಕರನ್ನು ಬೆಚ್ಚಿಬೀಳಿಸಿದೆ.
ಖಾಸಗಿ ಫೈನಾನ್ಸ್ ಸಂಸ್ಥೆಯಿಂದ ಕಾರ್ತಿಕ್ ಹಣ ಪಡೆದಿದ್ದ ಎನ್ನಲಾಗಿದ್ದು, ಇದೇ ವಿಚಾರದಲ್ಲಿ ಮಾತಿಗೆ ಮಾತು ಬೆಳೆದು ಜಗಳ ತಾರಕಕ್ಕೇರಿ ಯುವಕರ ಗುಂಪು ಕಾರ್ತಿಕ್‍ಗೆ ಚೂರಿಯಿಂದ ಇರಿದು ಕೊಲೆ ಮಾಡಿದೆ ಎನ್ನಲಾಗಿದೆ. ಇದರಿಂದ ಅಧಿಕ ರಕ್ತ ಸ್ರಾವವಾಗಿ ಕಾರ್ತಿಕ್ ಕುಸಿದು ಬಿದ್ದಿದ್ದಾರೆ. ತೀವ್ರ ಗಾಯಗೊಂಡ ಕಾರ್ತಿಕ್ ರನ್ನು ಪುತ್ತೂರಿನ ಆದರ್ಶ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಆ ವೇಳೆಗಾಗಲೇ ಮೃತರಾಗಿದ್ದರು.
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಗ್ರಾಮಾಂತರ ಠಾಣೆ ಸಂಪ್ಯದಲ್ಲಿ ಪ್ರಕರಣ ದಾಖಲಾಗಿದ್ದು, ಚರಣ್ ರಾಜ್, ಕಿರಣ್ ಪ್ರತೀಶ್ ಎಂಬ ಆರೋಪಿಗಳನ್ನು ಪೊಲೀಸರು ಬಂಧಿಸಿ ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








