ಜನರಿಗೆ ಸ್ಪಂದಿಸದ ಅಧಿಕಾರಿಗಳು ಜಾಗ ಖಾಲಿ ಮಾಡಿ

ತುಮಕೂರು
    ಸಾರ್ವಜನಿಕರ ಸಮಸ್ಯೆಗಳನ್ನು ಬಗೆಹರಿಸಲು ನಿರ್ಲಕ್ಷವಹಿಸುವ, ಜನರೊಂದಿಗೆ ಸ್ಪಂದಿಸz, ಸರ್ಕಾರದ  ಅನುದಾನವನ್ನು ಸಮರ್ಪಕವಾಗಿ ಬಳಸಿಕೊಂಡು ಯೋಜನೆಗಳನ್ನು ಕಾರ್ಯರೂಪಕ್ಕೆ ತರದ ಅಧಿಕಾರಿಗಳು ಜಾಗ ಖಾಲಿ ಮಾಡಬೇಕೆಂದು ಕಾನೂನು ಸಂಸದೀಯ ವ್ಯವಹಾರಗಳು ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ ಮಾಧುಸ್ವಾಮಿ ಅವರು ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು.  
    ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ಜಿಲ್ಲಾ ಮಟ್ಟದ ವಿವಿಧ ಇಲಾಖಾ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಸರ್ಕಾರದ ಸೌಲಭ್ಯಗಳನ್ನು ಜನರಿಗೆ ತಲುಪಿಸುವಲ್ಲಿ ಅಧಿಕಾರಿಗಳು ವಿಫಲರಾಗುತ್ತಿದ್ದಾರೆ. ಸೌಲಭ್ಯ ಒದಗಿಸಲು ಸಾಧ್ಯವಾಗದಿದ್ದರೆ ಅಂತಹ ಅಧಿಕಾರಿಗಳು ಜಾಗ ಖಾಲಿ ಮಾಡಬೇಕೆಂದು ನಿರ್ದಾಕ್ಷಿಣ್ಯವಾಗಿ ಸೂಚಿಸಿದರು.  ಸಮಸ್ಯೆ ಹೇಳಿಕೊಂಡು ತಮ್ಮ ಬಳಿ ಬಂದವರಿಗೆ ಗೌರವಿಸಿ, ವಿನಾಕಾರಣ ಅಲೆದಾಡಿಸಿ ಅವರ ಸಮಸ್ಯೆಗಳಿಗೆ ಸ್ಪಂದಿಸದಿದ್ದರೆ ನಾನು ಸುಮ್ಮನೆ ಇರುವುದಿಲ್ಲ ಎಂದು ಹೇಳಿದರಲ್ಲದೆ, ತಹಶೀಲ್ದಾರ್ ಬಳಿ ಪಹಣಿ, ಖಾತೆ ಮಾಡಿಸಲು ಬಂದವರನ್ನು ತಂದೆ ತಾಯಿಯಂತೆ ಕಾಣಬೇಕು. ಸಾರ್ವಜನಿಕರ ಜೊತೆ ಮಾನವೀಯತೆಯಿಂದ ನಡೆದುಕೊಳ್ಳಬೇಕು ಎಂದು ಎಚ್ಚರಿಕೆ ನೀಡಿದರು.
     ಜಿಲ್ಲಾ ಪಂಚಾಯತ್‍ನಲ್ಲಿ ನಡೆಯುವ ಮಾಸಿಕ ಕೆ.ಡಿ.ಪಿ ಸಭೆಯಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳೇ ಸಂಪೂರ್ಣ ಮಾಹಿತಿ ನೀಡಬೇಕು ಎಂದು ತಾಕೀತು ಮಾಡಿದರು.  ಇಲಾಖಾವಾರು ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ಖುದ್ದು ಅಧಿಕಾರಿಗಳೇ ಪರಿಶೀಲಿಸಿ ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಬೇಕು. ಸಭೆ ಕರೆದಾಗ ಖುದ್ದು ಅಧಿಕಾರಿಗಳೇ ಹಾಜರಾಗಬೇಕು ಎಂದು ಸೂಚನೆ ನೀಡಿದರಲ್ಲದೆ ಅಧಿಕಾರಿಗಳು  ಜನರ ಸಮಸ್ಯೆಗಳನ್ನು ಅರಿತು ಅವರ ಅವಶ್ಯಕತೆಗಳಿಗೆ ತಕ್ಕಂತೆ ಸೇವೆ ನೀಡಬೇಕು ಎಂದು ತಿಳಿಸಿದರು.  
    ಜಿಲ್ಲೆಯಲ್ಲಿ ಮಳೆ ಬಾರದೆ ಇರುವುದರಿಂದ ಸಮಗ್ರ ಕೃಷಿ ಪದ್ಧತಿ ಯೋಜನೆಯನ್ನು ಅನುಷ್ಠಾನಗೊಳಿಸಿದ್ದು, ಮಳೆ ಇಲ್ಲದೇ ಬೆಳೆಯುವ ಬೆಳೆಗಳ ಬಗ್ಗೆ  ಜಿಲ್ಲೆಯ ರೈತರಿಗೆ ಮಾಹಿತಿ ನೀಡಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ|| ಶಾಲಿನಿ ರಜನೀಶ್ ಅವರು ಸಚಿವರಿಗೆ ಮಾಹಿತಿ ನೀಡಿದರು. 
   ಜಿಲ್ಲೆಯಲ್ಲಿ ನರೇಗಾ ಯೋಜನೆಯಡಿ ರೈತರಿಗೆ ಉದ್ಯೋಗಚೀಟಿ ಇಲ್ಲದೇ ರೈತರು ತಮ್ಮ ಜಮೀನಿನಲ್ಲಿ ಬದು ನಿರ್ಮಾಣ, ಕೃಷಿ ಹೊಂಡ ನಿರ್ಮಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಇದುವರೆಗೂ ಎಷ್ಟು ಉದ್ಯೋಗ ಚೀಟಿಗಳನ್ನು ನೀಡಲಾಗಿದೆ ಎಂದು ಜಿಲ್ಲಾ ಪಂಚಾಯತ್ ಸಿಇಒ ಅವರನ್ನು ಸಚಿವರು ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಸಿಇಒ ಶುಭಾ ಕಲ್ಯಾಣ್ ಅವರು ಈವರೆಗೆ 2 ಲಕ್ಷ ಉದ್ಯೋಗ ಚೀಟಿಗಳನ್ನು ವಿತರಿಸಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.
ಸ್ಮಾರ್ಟ್‍ಸಿಟಿ ಕಾಮಗಾರಿಗಳ ವೇಗ ಹೆಚ್ಚಿಸಿ
  ತುಮಕೂರು ಸ್ಮಾರ್ಟ್‍ಸಿಟಿ ಯೋಜನೆಯಡಿ ಕೈಗೊಂಡಿರುವ ಕಾಮಗಾರಿಗಳ ವೇಗವನ್ನು ಹೆಚ್ಚಿಸಿ ಶೀಘ್ರ ಪೂರ್ಣಗೊಳಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ ಮಾಧುಸ್ವಾಮಿ ಅಧಿಕಾರಿಗಳಿಗೆ ಸೂಚಿಸಿದರು.
   ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಸ್ಮಾರ್ಟ್‍ಸಿಟಿ ಯೋಜನೆಯಡಿ ಕೈಗೊಂಡಿರುವ ಕಾಮಗಾರಿಗಳ ಸಮಗ್ರ ಮಾಹಿತಿ ಪಡೆದರು. ಸ್ಮಾರ್ಟ್ ರಸ್ತೆ ಯೋಜನೆಯಡಿ ನಗರದಲ್ಲಿ ಎಲ್ಲೆಂದರಲ್ಲಿ ಗುಂಡಿಗಳನ್ನು ತೆಗೆಯುತ್ತಿದ್ದೀರಾ! ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಕಾಮಗಾರಿ ಕೈಗೊಳ್ಳುವ ಮೊದಲು ಕ್ರಿಯಾ ಯೋಜನೆ ರೂಪಿಸಿಕೊಳ್ಳಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.
 
   ಗುಬ್ಬಿ-ಬೆಂಗಳೂರು ಹೆದ್ದಾರಿಯ ರಸ್ತೆ ಕಾಮಗಾರಿ ಮಂದಗತಿಯಾಗಿ ನಡೆಯುತ್ತಿರುವ ಬಗ್ಗೆ ಸಚಿವರು ಪ್ರಶ್ನಿಸಿದಾಗ ಉತ್ತರಿಸಿದ ಸ್ಮಾರ್ಟ್‍ಸಿಟಿ ಲಿಮಿಟೆಡ್‍ನ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ|| ಶಾಲಿನಿ ರಜನೀಶ್ ಕಾಮಗಾರಿಗೆ ಸಂಬಂಧಿಸಿದಂತೆ ಟೆಂಡರ್ ಕರೆದು 4 ತಿಂಗಳು ಕಳೆದರೂ ಗುತ್ತಿಗೆದಾರರು ವಿನಾಕಾರಣ ನೆಪ ಹೇಳುತ್ತಾರೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಂಡು ನಿಗಧಿತ ಅವಧಿಯೊಳಗೆ ಕಾಮಗಾರಿ ಪೂರ್ಣಗೊಳಿಸದ ಗುತ್ತಿಗೆದಾರರಿಗೆ ದಂಡ ವಿಧಿಸಲಾಗಿದೆ ಎಂದು ಸಚಿವರ ಗಮನಕ್ಕೆ ತಂದರು.
   ಸ್ಮಾರ್ಟ್ ಸಿಟಿ ಯೋಜನೆಯಡಿ ಹಲವಾರು ವಿನೂತನ ಹಾಗೂ ಪ್ರಗತಿಪರ ಕಾರ್ಯಕ್ರಮಗಳನ್ನು ರೂಪಿಸಿ ಕೈಗೆತ್ತಿಕೊಳ್ಳಲಾಗಿದೆ. ಈಗಾಗಲೇ ಕೈಗೊಂಡಿರುವ ಸ್ಮಾರ್ಟ್ ತರಗತಿ, ಸ್ಮಾರ್ಟ್ ಲೈಬ್ರರಿ ಕಾಮಗಾರಿಗಳನ್ನು ಮಾರ್ಚ್ ಮಾಹೆಯೊಳಗೆ ಪೂರ್ಣಗೊಳಿಸಲಾಗುವುದು ಎಂದರಲ್ಲದೆ, ದೇಶದಲ್ಲಿ ಮೊದಲ ಬಾರಿಗೆ ಉಚಿತವಾಗಿ ಮೊಬೈಲ್‍ನಲ್ಲಿಯೇ ಇ-ಪುಸ್ತಕಗಳ ಮಾಹಿತಿಯನ್ನು ಪಡೆಯುವ ಸೌಲಭ್ಯವನ್ನು ನೀಡಲಾಗುತ್ತಿದೆ ಎಂದು ಡಾ|| ಶಾಲಿನಿ ರಜನೀಶ್ ಅವರು ಸಚಿವರಿಗೆ ಮಾಹಿತಿ ನೀಡಿದರು. 
   ಸ್ಮಾರ್ಟ್ ಸಿಟಿ ಯೋಜನೆಯಡಿ 56 ಕೋಟಿ ರೂ. ವೆಚ್ಚದಲ್ಲಿ ಜಿಲ್ಲಾಸ್ಪತ್ರೆಯಲ್ಲಿ ಟ್ರಾಮಾ ಕೇರ್ ಸೆಂಟರ್ ಕಾರ್ಯ ಪ್ರಗತಿ ಬಗ್ಗೆ ಸಚಿವರು ಡಿಹೆಚ್‍ಒ ಡಾ|| ಚಂದ್ರಿಕಾ ಅವರಿಂದ ಮಾಹಿತಿ ಪಡೆದರು. ಮಾಹಿತಿ ನೀಡಿದ ಡಿಹೆಚ್‍ಓ ಜಿಲ್ಲಾಸ್ಪತ್ರೆಗೆ ಬರುವ ಹೊರ ರೋಗಿಗಳ ಸಂಪೂರ್ಣ ಮಾಹಿತಿಯನ್ನು ಪಡೆದು ಚಿಕಿತ್ಸೆ ನೀಡಲಾಗುತ್ತಿದೆ ಹಾಗೂ ಆಶಾ ಕಾರ್ಯಕರ್ತೆಯರ ಮೂಲಕ ಮನೆ ಮನೆ ಭೇಟಿ ನೀಡಿ ಜನರ ಮಾಹಿತಿಯನ್ನು ಸಹ ಪಡೆಯಲಾಗುತ್ತಿದೆ ಎಂದು ಅವರು ಸಚಿವರಿಗೆ ಮಾಹಿತಿ ನೀಡಿದರು. 
   ಬುಗುಡನಹಳ್ಳಿ ಕೆರೆಯಿಂದ 14 ಎಂಎಲ್‍ಡಿ ಪ್ರಮಾಣದ ನೀರು ಏಕೆ ಖರ್ಚಾಗುತ್ತಿದೆ ಎಂದು ಸಚಿವರು ಪ್ರಶ್ನಿಸಿದಾಗ ಶಾಲಿನಿ ರಜನೀಶ್ ಮಾತನಾಡಿ ಇನ್ನೆರಡು ದಿನಗಳೊಳಗಾಗಿ ಬುಗುಡನಹಳ್ಳಿ ಕೆರೆಯಿಂದ 14 ಎಂಎಲ್‍ಡಿ ಪ್ರಮಾಣದ ನೀರು ಖರ್ಚಾಗುತ್ತಿರುವ ಬಗ್ಗೆ ಸಂಪೂರ್ಣ ಮಾಹಿತಿ ನೀಡಲು ಇಂಜಿನಿಯರ್‍ಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು. 
    ಸಭೆಯಲ್ಲಿ ಸ್ಮಾರ್ಟ್‍ಸಿಟಿ ಯೋಜನೆಯಡಿ ಕೈಗೊಂಡಿರುವ ಸ್ಮಾರ್ಟ್ ರಸ್ತೆ, ಅಮಾನಿಕೆರೆ ಅಭಿವೃದ್ಧಿ, ಹಸಿರೀಕರಣ ಯೋಜನೆ, ಕ್ರೀಡಾ ಸಂಕೀರ್ಣ ಅಭಿವೃದ್ಧಿ, ಮಾರಿಯಮ್ಮ ನಗರದ ಮೂಲಭೂತ ವಸತಿ ಸೌಲಭ್ಯ, ಯುಟಿಲಿಟಿ ಮಾಲ್, ಸ್ಮಾರ್ಟ್ ಲಾಂಜ್ ಸೇರಿದಂತೆ ಹಲವು ಯೋಜನೆಗಳ ಬಗ್ಗೆ ಟಿಪಿಟಿ ಮೂಲಕ ಸಚಿವರಿಗೆ ಮಾಹಿತಿ ನೀಡಲಾಯಿತು.
    ಈ ಸಂದರ್ಭದಲ್ಲಿ ಸ್ಮಾರ್ಟ್‍ಸಿಟಿ ಲಿಮಿಟೆಡ್ ವ್ಯವಸ್ಥಾಪಕ ನಿರ್ದೇಶಕ ಟಿ.ಭೂಬಾಲನ್ ಮಾತನಾಡಿ, ಸ್ಮಾರ್ಟ್‍ಸಿಟಿ ಯೋಜನೆಯಡಿ ಕೈಗೊಂಡಿರುವ ಯೋಜನೆಗಳ ಬಗ್ಗೆ ಸಚಿವರಿಗೆ ಸಮಗ್ರ ಮಾಹಿತಿ ನೀಡಿದರು. ಸಭೆಯಲ್ಲಿ ಸಂಸದ ಜಿ.ಎಸ್.ಬಸವರಾಜು, ಶಾಸಕ ಜೆ.ಬಿ ಜ್ಯೋತಿಗಣೇಶ್, ಅಪರ ಜಿಲ್ಲಾಧಿಕಾರಿ ಕೆ.ಚನ್ನಬಸಪ್ಪ, ಪಾಲಿಕೆ ಮೇಯರ್ ಲಲಿತ ರವೀಶ್, ಉಪಮೇಯರ್ ರೂಪಶ್ರೀ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ|| ವೀರಭದ್ರಯ್ಯ ಸೇರಿದಂತೆ ಮತ್ತಿತರ ಅಧಿಕಾರಿಗಳು ಹಾಜರಿದ್ದರು. 
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link