ಬೆಂಗಳೂರು:
ಬಿಬಿಎಂಪಿ ಮೇಯರ್ ಮತ್ತು ಉಪಮೇಯರ್ ಆಯ್ಕೆಗೆ ಅ.1 ರಂದೇ ಚುನಾವಣೆ ನಡೆಯಲಿದೆ ಎಂದು ಚುನಾವಣಾಧಿಕಾರಿ ಹರ್ಷ ಗುಪ್ತ ಸ್ಪಷ್ಟಪಡಿಸಿದ್ದಾರೆ.
ಬಿಬಿಎಂಪಿ ಮೇಯರ್ ಮತ್ತು ಉಪಮೇಯರ್ ಚುನಾವಣೆಯನ್ನು ಮುಂದೂಡಲಾಗುತ್ತದೆ ಎಂಬ ವದಂತಿಗಳಿಗೆ ತೆರೆ ಎಳೆದಿರುವ ಪ್ರಾದೇಶಿಕ ಆಯುಕ್ತರು, ಈಗಾಗಲೇ ನಿಗದಿಪಡಿಸಿದಂತೆ ಅಕ್ಟೋಬರ್ ಒಂದರಂದು ಮೇಯರ್-ಉಪಮೇಯರ್ ಹಾಗೂ ನಾಲ್ಕು ಸ್ಥಾಯಿಸಮಿತಿಗಳ ಚುನಾವಣೆ ನಡೆಯುತ್ತದೆ ಎಂದು ತಿಳಿಸಿದ್ದಾರೆ.
ನಾಳೆ ನಡೆಯಬೇಕಾಗಿದ್ದ ಬಿಬಿಎಂಪಿ ಚುನಾವಣೆಯನ್ನು ಮುಂದೂಡುವಂತೆ ಆದೇಶ ನೀಡಿರುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶಿವಮೊಗ್ಗದಲ್ಲಿಂದು ಹೇಳಿಕೆ ನೀಡಿದ್ದರು. ಅದನ್ನು ಆಧರಿಸಿ ನಗರಾಭಿವೃದ್ಧಿ ಇಲಾಖೆ ಅಧೀನ ಕಾರ್ಯದರ್ಶಿ ಚುನಾವಣೆ ಮುಂದೂಡಿಕೆಗೆ ಪ್ರಾದೇಶಿಕ ಆಯುಕ್ತರಿಗೆ ಪತ್ರ ಬರೆದಿದ್ದರು. ಇನ್ನೇನು ಚುನಾವಣೆ ಮುಂದೂಡಿಕೆಯಾಗುತ್ತದೆ ಎಂಬ ನಿರೀಕ್ಷೆಗಳಿದ್ದವು. ಆದರೆ, ದಿಢೀರ್ ಬೆಳವಣಿಗೆಯಲ್ಲಿ ನಿಗದಿಯಂತೆ ನಾಳೆಯೇ ಮೇಯರ್ ಹಾಗೂ ಉಪಮೇಯರ್ ಆಯ್ಕೆಗೆ ಮತ್ತು ನಾಲ್ಕು ಸ್ಥಾಯಿ ಸಮಿತಿ ಆಯ್ಕೆಗೆ ಚುನಾವಣೆಯ ಮುಹೂರ್ತ ನಿಗದಿಯಾಗಿದೆ.
ಸದ್ಯ ನಿಗದಿಯಾಗಿರುವ ಚುನಾವಣೆಯನ್ನು ಯಾವುದೇ ಕಾರಣಕ್ಕೂ ಮುಂದೂಡಿಕೆ ಮಾಡಲು ಸಾಧ್ಯವಿಲ್ಲ ಎಂದಿರುವ ಪ್ರಾದೇಶಿಕ ಆಯುಕ್ತ ಹರ್ಷ ಗುಪ್ತಾ, ಈ ಬಗ್ಗೆ ನಗರಾಭಿವೃದ್ಧಿ ಇಲಾಖೆಗೆ ಪತ್ರ ಬರೆಯುವುದಾಗಿ ಹೇಳಿದ್ದಾರೆ.