ಫಲಾನುಭವಿಗಳ ಆಯ್ಕೆ ಪ್ರಕ್ರಿಯೆ ಅಕ್ಟೋಬರ್ ತಿಂಗಳಾಂತ್ಯಕ್ಕೆ ಪೂರ್ಣಗೊಳಿಸಿ : ಡಿಸಿ

ಬಳ್ಳಾರಿ

     ಅಂಬೇಡ್ಕರ್ ಅಭಿವೃದ್ಧಿ ನಿಗಮ, ಸಫಾಯಿ ಕರ್ಮಚಾರಿ, ಪರಿಶಿಷ್ಟ ವರ್ಗಗಳ ಕಲ್ಯಾಣ, ವಾಲ್ಮೀಕಿ ಅಭಿವೃದ್ಧಿ ನಿಗಮ ಸೇರಿದಂತೆ ವಿವಿಧ ನಿಗಮಗಳಡಿ ಎಸ್‍ಸಿಪಿ ಮತ್ತು ಟಿಎಸ್‍ಪಿ ಯೋಜನೆ ಅಡಿಯ ಫಲಾನುಭವಿಗಳ ಆಧಾರಿತ ಕಾರ್ಯಕ್ರಮದಡಿ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆಯನ್ನು ಅಕ್ಟೋಬರ್ ತಿಂಗಳಾಂತ್ಯಕ್ಕೆ ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಅವರು ಅಧಿಕಾರಿಗಳಿಗೆ ಸೂಚಿಸಿದರು.

      ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಎಸ್‍ಸಿಪಿ/ಟಿಎಸ್‍ಪಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಕರ್ನಾಟಕ ಅನುಸೂಚಿತ ಜಾತಿಗಳ ಉಪಯೋಜನೆ ಮತ್ತು ಅನುಸೂಚಿತ ಬುಡಕಟ್ಟುಗಳ ಉಪಯೋಜನೆ ಅಧಿನಿಯಮದಡಿ ರಚಿಸಲಾದ ಮೇಲ್ವಿಚಾರಣಾ ಸಮಿತಿಯ ಅಧ್ಯಕ್ಷರು ನಾನಾಗಿದ್ದು, ನಿಗಮಗಳ ಅಧಿಕಾರಿಗಳು ಫಲಾನುಭವಿ ಆಧಾರಿತ ಕಾರ್ಯಕ್ರಮಗಳ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆಯನ್ನು ಅಕ್ಟೋಬರ್ ತಿಂಗಳಾಂತ್ಯಕ್ಕೆ ಪೂರ್ಣಗೊಳಿಸಬೇಕು. ಲೋಕೋಪಯೋಗಿ, ಪಂಚಾಯತ್‍ರಾಜ್ ಎಂಜನಿಯರಿಂಗ್, ನಗರಾಭಿವೃದ್ಧಿ, ಕೆಆರ್‍ಐಡಿಎಲ್ ಸೇರಿದಂತೆ ವಿವಿಧ ಇಲಾಖೆಗಳು ಕಾಮಗಾರಿಗಳನ್ನು ಡಿಸೆಂಬರ್ ಅಂತ್ಯದೊಳಗೆ ಪೂರ್ಣಗೊಳಿಸಬೇಕು. ಯಾವುದೇ ಕಾರಣಕ್ಕೂ ವಿಳಂಬ ಮಾಡಕೂಡದು ಎಂದು ಅವರು ಹೇಳಿದರು.

     ಎಸ್‍ಸಿಪಿ/ಟಿಎಸ್‍ಪಿ ಸಮರ್ಪಕವಾಗಿ ಉಪಯೋಗಿಸುತ್ತಿಲ್ಲ;ಉಪಯೋಗಿಸದ ಅಧಿಕಾರಿಗಳ ಮೇಲೆ ಕ್ರಮಕೈಗೊಳ್ಳಿ ಎಂಬ ಆದೇಶಗಳು ಪದೇಪದೇ ಬರುತ್ತಿದ್ದು, ಆ ರೀತಿ ಕ್ರಮಕೈಗೊಳ್ಳುವುದಕ್ಕೆ ಯಾವುದೇ ಕಾರಣಕ್ಕೂ ಅಸ್ಪದ ಕೊಡಬೇಡಿ ಎಂದು ಹೇಳಿದ ಡಿಸಿ ನಕುಲ್ ಅವರು ಪರಿಶಿಷ್ಟ ವರ್ಗಗಳ ಕಲ್ಯಾಣಕ್ಕೆ ಮುಂದಾಗಬೇಕು ಎಂದರು.

     ಎಸ್ಸಿಪಿ/ಟಿಎಸ್ಪಿ ಯೋಜನೆಗಳಿಗೆ ಸಂಬಂಧಿಸಿದಂತೆ ವಿವಿಧ ಇಲಾಖೆಗಳು ಸಾಧಿಸಿದ ಪ್ರಗತಿಯ ವಿವರವನ್ನು ಸರಿಯಾಗಿ ನಮೂದಿಸುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ ಡಿಸಿ ನಕುಲ್ ಅವರು ಮುಂದಿನ ಸಭೆಯ ಸಂದರ್ಭದಲ್ಲಿ ಸಮರ್ಪಕವಾದ ಮಾಹಿತಿ ನೀಡುವಂತೆ ತಾಕೀತು ಮಾಡಿದರು.

    ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್,ಪಿಆರ್‍ಇಡಿ, ಲೋಕೋಪಯೋಗಿ, ಪದವಿಪೂರ್ವ ಶಿಕ್ಷಣ ಇಲಾಖೆ, ಸಹಕಾರ, ವಿಮ್ಸ್,ಕೆಆರೈಡಿಎಲ್,ಕೃಷಿ, ಕೈಗಾರಿಕೆ, ತೋಟಗಾರಿಕೆ, ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ನೀರಾವರಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿಯನ್ನು ಪರಿಶೀಲಿಸಿದ ಜಿಲ್ಲಾಧಿಕಾರಿ ಅಗತ್ಯ ಸಲಹೆ ಸೂಚನೆಗಳನ್ನು ಈ ಸಂದರ್ಭದಲ್ಲಿ ನೀಡಿದರು.

    ಈ ಸಂದರ್ಭದಲ್ಲಿ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ನಿತೀಶ್, ಅಪರ ಜಿಲ್ಲಾಧಿಕಾರಿ ಸತೀಶಕುಮಾರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link