ಬೆಂಗಳೂರು
ಹುಳಿಮಾವು ಕೆರೆ ಅನಾಹುತದಿಂದ ಮನೆ ಕಳೆದುಕೊಂಡ 319 ಬಡ ಕುಟುಂಬಗಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಲಾ 50 ಸಾವಿರ ರೂ. ಪರಿಹಾರ ಘೋಷಿಸಿದ್ದಾರೆ.ಹುಳಿಮಾವು ಕೆರೆ ಅನಾಹುತದಿಂದ ನೆಲೆ ಕಳೆದುಕೊಂಡ ಸಂತ್ರಸ್ತರನ್ನು ಭೇಟಿ ಮಾಡಿ ಮಾತನಾಡಿದ ಅವರು, ಪರಿಹಾರದ ಧನವನ್ನು ಸಂತ್ರಸ್ತರ ಬ್ಯಾಂಕ್ ಖಾತೆಗಳಿಗೆ ಜಮೆ ಮಾಡಲಾಗುವುದು ಎಂದರು.
ಅನಾಹುತದಿಂದಾಗಿ ಒಟ್ಟು 630 ಮನೆಗಳು ಹಾನಿಗೊಳಗಾಗಿವೆ. ಕೆಲ ಬಡವರ ಮನೆಗಳು ಸಂಪೂರ್ಣ ನಾಶವಾಗಿವೆ. ಸಂತ್ರಸ್ತರಿಗೆ ನಿರಾಶ್ರಿತರ ಕೇಂದ್ರದಲ್ಲಿ ಊಟ ವಸತಿ ಸೌಲಭ್ಯಗಳು ಸೇರಿದಂತೆ ಎಲ್ಲ ರೀತಿಯ ನೆರವನ್ನು ಒದಗಿಸಲಾಗುತ್ತಿದೆ ಎಂದರು.ಹಾನಿಗೊಳಗಾಗಿರುವ ಪ್ರದೇಶದಲ್ಲಿ ರಸ್ತೆಗಳ ನಿರ್ಮಾಣ, ಕುಡಿಯುವ ನೀರು ಹಾಗು ಒಳಚರಂಡಿ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಲು ಸಂಬಂಧಪಟ್ಟ ಶಾಸಕರು, ಪಾಲಿಕೆ ಸದಸ್ಯರು ಹಾಗು ಹಿರಿಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದು, ಮುಂದೆ ಈ ರೀತಿಯ ಅವಘಡಗಳು ಸಂಭವಿಸದಂತೆ ಎಚ್ಚರ ವಹಿಸುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಹಾಗೂ ಘಟನೆಯ ಬಗ್ಗೆ ಸೂಕ್ತ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದೇನೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಬಿಬಿಎಂಪಿ ಮಹಾಪೌರರಾದ ಎಂ.ಗೌತಮ್ ಕುಮಾರ್, ನಗರ ಪಾಲಿಕೆ ಸದಸ್ಯೆ ಭಾಗ್ಯಲಕ್ಷ್ಮಿ ಮುರಳಿ, ಬಿಬಿಎಂಪಿ ಆಯುಕ್ತ ಬಿ.ಹೆಚ್. ಅನಿಲ್ ಕುಮಾರ್ ಉಪಸ್ಥಿತರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
