ದಾವಣಗೆರೆ:
ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣ ಪ್ರಾರಂಭಿಸಬೇಕೆಂಬುದು ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಡಿ.10ರಿಂದ ಬೆಂಗಳೂರಿನಲ್ಲಿ ಅನಿರ್ಧಿಷ್ಟಾವಧಿ ಮುಷ್ಕರ ನಡೆಸಲಾಗುವುದು ಎಂದು ಸಿಐಟಿಯು ಸಂಯೋಜಿತ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ಜಿಲ್ಲಾ ಸಂಚಾಲಕ ಕೆ.ಹೆಚ್.ಆನಂದರಾಜ್ ತಿಳಿಸಿದರು.
ಈ ಕುರಿತು ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಡಿ.10ರಂದು ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ತುಮಕೂರು ತಲುಪಿ, ಅಲ್ಲಿಂದ ಕಾಲ್ನಡಿಗೆ ಜಾಥಾದ ಮೂಲಕ ಬೆಂಗಳೂರಿಗೆ ತೆರಳಿ ಅನಿರ್ಧಿಷ್ಟಾವಧಿ ಮುಷ್ಕರ ನಡೆಸಲಿದ್ದಾರೆ ಎಂದು ಹೇಳಿದರು.
ಪ್ರಸ್ತುತ ತ್ವರಿತಗತಿಯಲ್ಲಿ ಜಗತ್ತು ಬದಲಾಗುತ್ತಿದ್ದರೂ, ಅಂಗನವಾಡಿ ಕೇಂದ್ರಗಳು ಮಾತ್ರ ಅದೇ ಹಳೆಯ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಿವೆ. ಆದ್ದರಿಂದ ಅಂಗನವಾಡಿ ಕೇಂದ್ರಗಳನ್ನು ಪಾಲನಾ ಮತ್ತು ಕಲಿಕೆಯ ಕೇಂದ್ರಗಳನ್ನಾಗಿಸುವ ಮೂಲಕ ಮೇಲ್ದರ್ಜೆಗೇರಿಸಬೇಕು. ಎಲ್‍ಕೆಜಿ, ಯುಕೆಜಿಯಂತಹ ಪೂರ್ವ ಪ್ರಾಥಮಿಕ ಶಿಕ್ಷಣ ಪ್ರಾರಂಭಿಸಬೇಕು. ಅಂಗನವಾಡಿ ನೌಕರರಿಗೆ ಈಗಿರುವ ನಿವೃತ್ತಿ ಸೌಲಭ್ಯ ಬದಲಾಯಿಸಿ, ಎಲ್‍ಐಸಿ ಆಧಾರಿತ ಪೆನ್ಷನ್ ನೀಡಬೇಕು. ಸೇವಾ ಜೇಷ್ಠತೆಯ ಆಧಾರದ ಕನಿಷ್ಟ ವೇತನ ಜಾರಿಗೊಳಿಸಬೇಕು. ಮೇಲ್ವಿಚಾರಕರಾಗಿ ಮುಂಬಡ್ತಿ ಹೊಂದುವ ಹುದ್ದೆಗಳನ್ನು ಪೂರ್ಣವಾಗಿ ಅಂಗನವಾಡಿ ನೌಕರರಿಗೆ ಮೀಸಲಿಡಬೇಕೆಂದು ಆಗ್ರಹಿಸಿದರು.
ಖಾಲಿ ಇರುವ ಸಹಾಯಕಿ ಮತ್ತು ಕಾರ್ಯಕರ್ತೆಯರ ಹುದ್ದೆಗಳನ್ನು ತುಂಬಬೇಕು. ಅಂಗನವಾಡಿ ಕಾರ್ಯಕರ್ತೆಯರಿಗೆ ಸೇವಾ ನಿಯಮಾವಳಿ ಹೆಚ್ಚಿಸಬೇಕು. ಕೇಂದ್ರ ಸರ್ಕಾರ ಕಡಿತ ಮಾಡಿರುವ ಅನುದಾನ ಮರಳಿ ಕೊಡಬೇಕು. ಅಂಗನವಾಡಿ ಕೇಂದ್ರದ ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆಯ ಸೂಚನೆಯನ್ನು ರಾಜ್ಯ ಸರ್ಕಾರ ಒಪ್ಪಬಾರದು.
5 ವರ್ಷಗಳನ್ನು ಪೂರೈಸಿದ ಮೇಲ್ವಿಚಾರಕಿಯರನ್ನು ಕಡ್ಡಾಯ ವರ್ಗಾವಣೆ ಮಾಡಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಅನಿರ್ಧಿಷ್ಟಾವಧಿ ಮುಷ್ಕರ ಕೈಗೊಳ್ಳಲಾಗುವುದು. ನಮ್ಮ ಬೇಡಿಕೆಗಳು ಈಡೇರುವ ವರೆಗೂ ಹೋರಾಟವನ್ನು ವಾಪಾಸ್ ಪಡೆಯುವ ಪ್ರಶ್ನೆಯೇ ಇಲ್ಲ ಎಂದು ಎಚ್ಚರಿಸಿದರು.ಸುದ್ದಿಗೋಷ್ಠಿಯಲ್ಲಿ ಸಂಘದ ಜಿಲ್ಲಾ ಸಂಚಾಲನಾ ಸಮಿತಿ ಸದಸ್ಯೆ ಡಿ.ಲತಾಬಾಯಿ, ವಿ.ರತ್ನಮ್ಮ, ಬಾಡಾ ಕ್ರಾಸ್ ಶ್ರೀನಿವಾಸ್, ಉದಯ್, ಅಮಿನಾಬಿ, ದಾಕ್ಷಾಯಣಮ್ಮ ಹಾಜರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
