ಬೆಂಗಳೂರು
ಪುಣೆ-ಬೆಂಗಳೂರು ಎಕ್ಸ್‌ಪ್ರೆಸ್ ಹೆದ್ದಾರಿ, ಕರ್ನಾಟಕ ಮತ್ತು ಮಹಾರಾಷ್ಟ್ರಗಳಿಗೆ ಅವಶ್ಯವಿದ್ದು, ಭೂಸ್ವಾಧೀನ ಕಾರ್ಯಕ್ಕೆ ಸದ್ಯದಲ್ಲೇ ಚಾಲನೆ ನೀಡಿ ಆದಷ್ಟು ಶೀಘ್ರ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಕೇಂದ್ರದ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ತಿಳಿಸಿದ್ದಾರೆ.
ನಗರದ ಪಂಚತಾರಾ ಹೋಟೆಲ್‌ನಲ್ಲಿ ಮಂಗಳವಾರ ನಡೆದ ರಾಜ್ಯದ ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಪುಣೆ ಮತ್ತು ಬೆಂಗಳೂರು ಷಟ್ಪಥ ರಸ್ತೆ ಸೇರಿದಂತೆ ಹಲವು ಯೋಜನೆಗಳ ಕಾಮಗಾರಿಗಳನ್ನು ಶೀಘ್ರದಲ್ಲಿಯೇ ಕೈಗೆತ್ತಿಕೊಳ್ಳುವ ಭರವಸೆಯನ್ನು ನೀಡಿದರು.
ಕರ್ನಾಟಕ ಪ್ರಗತಿಯಲ್ಲಿರುವ ರಾಜ್ಯವಾಗಿದ್ದು, ಕರ್ನಾಟಕದಲ್ಲಿ 13 ಸಾವಿರಕ್ಕೂ ಹೆಚ್ಚು ಕಿ.ಮೀ ಉದ್ದದ ರಸ್ತೆ ಅಭಿವೃದ್ಧಿಯಾಗಿದೆ ಇದೇ ಸಂದರ್ಭದಲ್ಲಿ ಗಡ್ಕರಿ ಅವರು ಈಗಾಗಲೇ ಚಾಲ್ತಿಯಲ್ಲಿರುವ ಕಾಮಗಾರಿಗಳನ್ನು ಆದಷ್ಟು ಬೇಗ ಪೂರ್ಣಗೊಳಿಸುವತೆ ಗುತ್ತಿಗೆದಾರರಿಗೆ ಸೂಚಿಸಿದರು.
ರಾಜ್ಯದಲ್ಲಿ ಪ್ರಗತಿಯಲ್ಲಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಆದಷ್ಟು ಬೇಗ ಪೂರ್ಣಗೊಳಿಸುವಂತೆ ಕೇಂದ್ರದ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಕಟ್ಟುನಿಟ್ಟಿನ ಸೂಚನೆ ನೀಡಿದರು.ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ನಿವೃತ್ತ ಅಧಿಕಾರಿಗಳನ್ನು ಗುತ್ತಿಗೆಯಾಧಾರದ ಮೇಲೆ ನೇಮಕ ಮಾಡಿಕೊಂಡು ಭೂಸ್ವಾಧೀನ ಪ್ರಕ್ರಿಯೆಯನ್ನು ಆದಷ್ಟು ಬೇಗ ಪೂರ್ಣಗೊಳಿಸುವಂತೆ ಸೂಚನೆ ನೀಡಿದರು.
ಸಭೆಯಲ್ಲಿ ಹೊಸ ಮಾರ್ಗಗಳಿಗೆ ಸಂಬಂಧಿಸಿದಂತೆ ಭೂಮಿ ಲಭ್ಯತೆ ಹಾಗೂ ಸ್ವಾಧೀನ ಪ್ರಕ್ರಿಯೆ ಬಗ್ಗೆಯೂ ಚರ್ಚೆ ನಡೆಸಲಾಯಿತು. ಸಭೆಯಲ್ಲಿ ಕೆಲ ಅಧಿಕಾರಿಗಳು ಹಿಂದಿನ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಕಾಮಗಾರಿ ವೇಗ ಪಡೆಯಲಿಲ್ಲ ಎಂದು ಹೇಳಿದ್ದಕ್ಕೆ ಗರಂ ಆದ ನಿತಿನ್ ಗಡ್ಕರಿ, ಈಗ ಯಡಿಯೂರಪ್ಪನವರ ಸರ್ಕಾರ ಇದೆ. ಯಾವುದೇ ಸಬೂಬು ನೀಡದೆ ಶೀಘ್ರವಾಗಿ ,1500 ಕಿ.ಮೀ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸಿ ವಾಹನಗಳ ಓಡಾಟಕ್ಕೆ ಅನುವು ಮಾಡಿಕೊಡಿ ಎಂದು ಹಿಂದಿಯಲ್ಲಿ ಹೇಳಿದರು.ಈ ಸಭೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ,ಲೋಕೋಪಯೋಗಿ ಸಚಿವ ಹಾಗೂ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್, ಕೇಂದ್ರ ಹಾಗೂ ರಾಜ್ಯಸರ್ಕಾರದ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ