ಅಮಿತ್ ಶಾ ಆಗಮನದ ಹಿನ್ನೆಲೆ ಜೋರಾದ ಶಾಸಕರ ಲಾಬಿ..!

ಬೆಂಗಳೂರು

   ಸಚಿವ ಸಂಪುಟ ವಿಸ್ತರಣೆಗೆ ಕಸರತ್ತು ನಡೆದಿರುವಾಗಲೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾರವರು ನಾಳೆ ಬೆಳಿಗ್ಗೆ ರಾಜ್ಯಕ್ಕೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಸಚಿವಾಕಾಂಕ್ಷಿ ಶಾಸಕರುಗಳ ಲಾಬಿ ಬಿರುಸಾಗಿದೆ.

   ಸಚಿವ ಸಂಪುಟ ವಿಸ್ತರಣೆ ಸಂಬಂಧ ಮುಖ್ಯಮಂತ್ರಿ ಯಡಿಯೂರಪ್ಪ ಅವರು, ನಾಳೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ರವರ ಜತೆ ಚರ್ಚಿಸುವ ಸಾಧ್ಯತೆಗಳಿರುವುದರಿಂದ ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿರುವ ಶಾಸಕರುಗಳು ಸಚಿವ ಪಟ್ಟಕ್ಕಾಗಿ ಹರಸಾಹಸ ನಡೆಸಿದ್ದು, ಪಕ್ಷದಲ್ಲಿ ತಮಗಿರುವ ನಾಯಕರ ಪ್ರಭಾವ ಬಳಸಿ ಸಚಿವ ಪಟ್ಟ ಗಿಟ್ಟಿಸಲು ಲಾಬಿ ಚುರುಕುಗೊಳಿಸಿದ್ದಾರೆ.

    ಇಂದು ಬೆಳಿಗ್ಗೆ ಶಾಸಕರುಗಳಾದ ಉಮೇಶ್ ಕತ್ತಿ ಮತ್ತು ಗೋಪಾಲಯ್ಯ ಇವರುಗಳು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಅವರ ಡಾಲರ್ಸ್ ಕಾಲೋನಿಯಲ್ಲಿ ಭೇಟಿ ಮಾಡಿ, ಸಚಿವ ಸ್ಥಾನ ನೀಡುವಂತೆ ಮನವಿ ಮಾಡಿದರು.ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ರಾಜ್ಯಕ್ಕೆ ಭೇಟಿ ಸಂದರ್ಭದಲ್ಲಿ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಸುವ ಸಂಬಂಧ ಮುಖ್ಯಮಂತ್ರಿ ಯಡಿಯೂರಪ್ಪ ಇಂದು ತಮ್ಮ ಬೆಳಗ್ಗಿನ ಎಲ್ಲಾ ಕಾರ್ಯಕ್ರಮಗಳನ್ನು ರದ್ದು ಮಾಡಿ ಆಪ್ತರೊಂದಿಗೆ ಸಮಾಲೋಚನೆ ನಡೆಸಿದರು.

    ನಾಳಿನ ಅಮಿತ್ ಶಾರವರ ರಾಜ್ಯ ಭೇಟಿ ಸಂದರ್ಭದಲ್ಲಿ ಯಡಿಯೂರಪ್ಪರವರು ಇಡೀ ದಿನ ಅಮಿತ್ ಶಾರವರ ಜತೆಯೇ ಇರುವುದರಿಂದ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆಗಳು ಹೆಚ್ಚಿವೆ. ಹಾಗಾಗಿ, ಸಂಪುಟ ವಿಸ್ತರಣೆಗೆ ನಾಳೆಯೇ ಮುಹೂರ್ತ ನಿಗದಿಯಾದರೂ ಅಚ್ಚರಿ ಪಡಬೇಕಿಲ್ಲ. ಒಂದು ವೇಳೆ ನಾಳೆ ಸಂಪುಟ ವಿಸ್ತರಣೆ ಸಂಬಂಧ ಮುಖ್ಯಮಂತ್ರಿ ಯಡಿಯೂರಪ್ಪ ಬಿಜೆಪಿ ರಾಜ್ಯಾಧ್ಯಕ್ಷರ ಜತೆ ಚರ್ಚೆ ನಡೆಸಲು ಸಮಾಯಾವಕಾಶ ಸಿಗದೇ ಹೋದರೆ ಸಂಪುಟ ವಿಸ್ತರಣೆ ಮತ್ತಷ್ಟು ವಿಳಂಬವಾಗಲಿದೆ.

     ಮುಖ್ಯಮಂತ್ರಿ ಯಡಿಯೂರಪ್ಪ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಯಾರನ್ನು ಸಂಪುಟಕ್ಕೆ ತೆಗೆದುಕೊಳ್ಳಬೇಕು, ಯಾರಿಗೆ ಯಾವ ಖಾತೆ ನೀಡಬೇಕು ಎಂಬ ಬಗ್ಗೆ ತಮ್ಮದೇ ಆದ ಪಟ್ಟಿಯನ್ನು ತಯಾರಿಸಿದ್ದು, ಅದನ್ನು ರಾಷ್ಟ್ರೀಯ ಅಧ್ಯಕ್ಷರಿಗೆ ನೀಡಿ ಆ ಪಟ್ಟಿಗೆ ಒಪ್ಪಿಗೆ ಪಡೆಯುವ ಸಾಧ್ಯತೆಗಳಿವೆ.

     ಉಪ ಚುನಾವಣೆಯಲ್ಲಿ ಗೆದ್ದಿರುವ ಎಲ್ಲರಿಗೂ ಸಚಿವ ಸ್ಥಾನ ನೀಡಲು ಮುಖ್ಯಮಂತ್ರಿ ಯಡಿಯೂರಪ್ಪ ಈಗಾಗಲೇ ತೀರ್ಮಾನಿಸಿದ್ದು,ಇವರ ಜತೆಗೆ ಸೋತವರಿಗೂ ಸಚಿವ ಸ್ಥಾನ ನೀಡುವ ಸಂಬಂಧ ಅಮಿತ್ ಶಾರವರ ಜತೆ ಚರ್ಚಿಸಿ ತೀರ್ಮಾನ ಕೈಗೊಳ್ಳುವರು ಎಂದು ಹೇಳಲಾಗಿದೆ.

    ಉಪಚುನಾವಣೆಯಲ್ಲಿ ಗೆದ್ದಿರುವ ಶಾಸಕರಿಗೆ ಸಚಿವ ಸ್ಥಾನ ನೀಡಿದ ನಂತರ ಉಳಿಯುವ 2-3 ಸ್ಥಾನಗಳಿಗೆ ಪಕ್ಷದ ಹಿರಿಯ ಶಾಸಕರನ್ನು ನೇಮಕ ಮಾಡುವ ಸಂಬಂಧವೂ ಯಡಿಯೂರಪ್ಪನವರು ಅಮಿತ್ ಶಾರವರ ಜತೆ ಚರ್ಚಿಸಿ ಅವರು ಸೂಚಿಸುವವರನ್ನು ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳಲು ತೀರ್ಮಾನಿಸಿದ್ದಾರೆ ಎನ್ನಲಾಗಿದೆ.

    ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ನಾಳೆ ಬೆಳಿಗ್ಗೆ ವಿಶೇಷ ವಿಮಾನದಲ್ಲಿ ಯಲಹಂಕ ವಾಯುನೆಲೆಗೆ ಆಗಮಿಸಲಿದ್ದು, ಮಧ್ಯಾಹ್ನ 12 ಗಂಟೆಗೆ ನಗರದ ಅರಮನೆ ಮೈದಾನದಲ್ಲಿ ವೇದಾಂತ ಭಾರತಿ ಸಂಸ್ಥೆ ಆಯೋಗಿಸಿರುವ `ವಿವೇಕ ದೀಪಿಣಿ’ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡು ನಂತರ ಸಂಜೆ 4 ಗಂಟೆಗೆ ಹುಬ್ಬಳ್ಳಿಯಲ್ಲಿ ರಾಜ್ಯ ಬಿಜೆಪಿ ಆಯೋಜಿಸಿರುವ ಪೌರತ್ವ ತಿದ್ದುಪಡಿ ಕಾಯ್ದೆಯ ಜಾಗೃತಿ ಸಮಾಜವೇಶದಲ್ಲಿ ಪಾಲ್ಗೊಂಡು ಹುಬ್ಬಳ್ಳಿಯಲ್ಲೇ ವಾಸ್ತವ್ಯ ಹೂಡಿ ಭಾನುವಾರ ಬೆಳಿಗ್ಗೆ ಹುಬ್ಬಳ್ಳಿಯಿಂದಲೇ ದೆಹಲಿಗೆ ವಾಪಸ್ ಆಗಲಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link