ಚಿತ್ರದುರ್ಗ:
ಕೊರೋನಾ ವೈರಸ್ ಸೋಂಕು ಒಬ್ಬರಿಂದ ಒಬ್ಬರಿಗೆ ಹರಡುವ ಸಾಧ್ಯತೆ ಹೆಚ್ಚು ಇರುವುದರಿಂದ, ಮುಂಜಾಗ್ರತಾ ಕ್ರಮವಾಗಿ ಸಿ.ಆರ್.ಪಿ.ಸಿ 1973 ರ ಕಲಂ 144 ರನ್ವಯ ಮಾ. 17 ರಿಂದ ಮಾ. 22 ರವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಆರ್. ವಿನೋತ್ ಪ್ರಿಯಾ ಆದೇಶಿಸಿದ್ದಾರೆ.
ಸಾರ್ವಜನಿಕರು ಹೆಚ್ಚಾಗಿ ಸೇರುವಂತಹ ಸಂತೆ, ಜಾತ್ರೆ, ಸಮಾವೇಶ, ಸಮ್ಮೇಳನ, ಮದುವೆ, ಕ್ರೀಡಾಕೂಟ ಹಾಗೂ ಧಾರ್ಮಿಕ ಸಮಾರಂಭ, ಇಂತಹ ಸಂದರ್ಭಗಳಲ್ಲಿ ಕೊರೋನಾ ವೈರಸ್ ಒಬ್ಬರಿಂದ ಒಬ್ಬರಿಗೆ ಸೋಂಕು ಹರಡುವ ಸಂಭವ ಹೆಚ್ಚು ಇರುತ್ತದೆ. ಹೀಗಾಗಿ ಸಾರ್ವಜನಿಕರ ಹಿತಾದೃಷ್ಟಿಯಿಂದ ಮಾ. 17 ರಿಂದ 22 ರವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಇದರನ್ವಯ 05 ಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಜನರು ಒಂದೆಡೆ ಸೇರುವಂತಿಲ್ಲ. ಸಂತೆ, ಜಾತ್ರೆ, ಸಮಾವೇಶ, ಮೆರವಣಿಗೆ, ಸಮ್ಮೇಳನ, ಕ್ರೀಡಾಕೂಟ ಹಾಗೂ ಯಾವುದೇ ಧಾರ್ಮಿಕ ಸಮಾರಂಭ ನಡೆಸುವುದನ್ನು ನಿಷೇಧಿಸಲಾಗಿದೆ.
ಈ ಆದೇಶವು ಅಂತ್ಯಕ್ರಿಯೆ ಮೆರವಣಿಗೆ ಮತ್ತು ಪರೀಕ್ಷೆಯಲ್ಲಿ ಪಾಲ್ಗೊಳ್ಳುವ ವಿದ್ಯಾರ್ಥಿಗಳಿಗೆ ಅನ್ವಯಿಸುವುದಿಲ್ಲ. ನಿಷೇಧಾಜ್ಞೆ ಉಲ್ಲಂಘಿಸುವವರ ವಿರುದ್ಧ ಭಾರತೀಯ ದಂಡ ಸಂಹಿತೆಯ ಕಲಂ 188 ರ ಪ್ರಕಾರ ಕ್ರಮ ಜರುಗಿಸಲಾಗುವುದು ಎಂದು ಆದೇಶದಲ್ಲಿ ತಿಳಿಸಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ