ಬೆಂಗಳೂರು :
SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಅವರು ಇಚ್ಛಿಸಿರುವ ಕೇಂದ್ರಗಳಲ್ಲಿಯೇ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.
SSLC ಪೂರ್ವ ಸಿದ್ದತೆ ಕುರಿತು ವಿಕಾಸಸೌಧದಲ್ಲಿ ಗುರುವಾರ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಸಿಇಒ, ಎಸ್’ಪಿ, ಜಿಲ್ಲಾ ಮತ್ತು ತಾಲೂಕು ಖಜಾನೆ ಅಧಿಕಾರಿಗಳು, ಡಿಡಿಪಿಐ, ಬಿಇಒರೊಂದಿಗೆ ವಿಡಿಯೋ ಸಂವಾದದಲ್ಲಿ ಮಾತನಾಡಿದ ಅವರು, ಸುಮಾರು 12 ಸಾವಿರದ 647 ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳನ್ನು ಬದಲಾಯಿಸಿಕೊಂಡಿದ್ದಾರೆ. ವಿದ್ಯಾರ್ಥಿಗಳು ಅವರು ಇಚ್ಛಿಸಿರುವ ಕೇಂದ್ರಗಳಲ್ಲಿಯೇ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಲಾಗುತ್ತಿದೆ ಎಂದರು.
SSLC ಪರೀಕ್ಷೆ ಕುರಿತಂತೆ ಜಿಲ್ಲಾ ಮಟ್ಟದಲ್ಲಿ ಸಹಾಯವಾಣಿ ಆರಂಭಿಸಬೇಕು. ಪರೀಕ್ಷೆಗೂ ಮುನ್ನ ಕೊನೇ ಗಳಿಗೆಯಲ್ಲಿ ಕಂಟೈನ್ಮೆಂಟ್ ವಲಯಗಳಾಗಿ ಘೋಷಿತವಾದರೆ ತಕ್ಷಣದ ಅನುಕೂಲಕ್ಕಾಗಿ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ ಬದಲಿ ಐದು ಕೇಂದ್ರಗಳನ್ನು ಗುರುತಿಸಿ ಸಿದ್ಧವಾಗಿಟ್ಟುಕೊಳ್ಳುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಸೂಚಿಸಿದ್ದಾರೆ.
