ಚಿಕ್ಕಬಳ್ಳಾಪುರ
ಎಸ್.ಎಸ್.ಎಲ್.ಸಿ ಪರೀಕ್ಷೆಯ ಫಲಿತಾಂಶ ಆಗಸ್ಟ್ ಮೊದಲ ವಾರದಲ್ಲಿ ಹಾಗೂ ಜುಲೈ ಅಂತ್ಯದ ವೇಳೆಗೆ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ.
ಎಸ್.ಎಸ್.ಎಲ್.ಸಿ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೌಲ್ಯ ಮಾಪನ ಪ್ರಕ್ರಿಯೆ ಸುಗಮವಾಗಿ ನಡೆಯುತ್ತಿದ್ದು, ಫಲಿತಾಂಶಕ್ಕೆ ಅಗತ್ಯ ಸಿದ್ಧತೆ ಕೈಗೊಳ್ಳಲಾಗಿದೆ ಎಂದರು.ಎಸ್.ಎಸ್.ಎಲ್.ಸಿ ಪರೀಕ್ಷೆ ಸುಸೂತ್ರವಾಗಿ ನಡೆಯುತ್ತಿದ್ದು, ಕಳೆದ ವರ್ಷಕ್ಕೆ ಹೋಲಿಸಿದರೆ ವಿದ್ಯಾರ್ಥಿಗಳ ಹಾಜರಾತಿಯಲ್ಲಿ ಅಷ್ಟೇನು ವ್ಯತ್ಯಾಸವಾಗಿಲ್ಲ. ಪರೀಕ್ಷಾ ಕೇಂದ್ರಗಳು ಸುರಕ್ಷಿತ ಕೇಂದ್ರಗಳಾಗಿದ್ದು, ವಿದ್ಯಾರ್ಥಿಗಳು ಉತ್ಸಾಹದಿಂದ ಪರೀಕ್ಷೆ ಬರೆಯುತ್ತಿದ್ದಾರೆ ಎಂದರು.
ಕೇಂದ್ರದ ಮಾರ್ಗಸೂಚಿಯಂತೆ ರಾಜ್ಯದಲ್ಲಿ ಆನ್ ಲೈನ್ ಶಿಕ್ಷಣ ಪದ್ಧತಿ ಅನುಷ್ಠಾನಕ್ಕೆ ತರಲಾಗುವುದು. ತಜ್ಞರ ಅಭಿಪ್ರಾಯ ಪಡೆದ ನಂತರ ಯಾವ ರೀತಿಯಲ್ಲಿ ಆನ್ ಲೈನ್ ಶಿಕ್ಷಣ ಕಾರ್ಯಕ್ರಮ ರೂಪಿಸಬೇಕು ಎಂಬುದನ್ನು ನಿರ್ಧರಿಸುತ್ತೇವೆ ಎಂದು ಹೇಳಿದರು. ಎಲ್ ಕೆಜಿ ಹಾಗೂ ಯುಕೆಜಿಗೆ ಆನ್ ಲೈನ್ ಶಿಕ್ಷಣ ಜಾರಿಮಾಡುವುದಿಲ್ಲ. ಆದರೆ 1-6 ಹಾಗೂ 7-10 ನೇ ತರಗತಿಯವರೆಗೆ ಯಾವ ರೀತಿ ಆನ್ ಲೈನ್ ಶಿಕ್ಷಣ ನೀಡಬೇಕಲು ಎಂಬುದನ್ನು ನಿರ್ಧರಿಸಲಾಗುವುದು ಎಂದರು.
ಜುಲೈ 5 ರ ನಂತರ ಪ್ರಸಕ್ತ ಶೈಕ್ಷಣಿಕ ವರ್ಷದ ಶಾಲೆಗಳನ್ನು ಆರಂಭಿಸುವ ಚಿಂತನೆ ಸರ್ಕಾರಕ್ಕೆ ಇದೆ. ಆದರೆ, ಈ ಪರಿಸ್ಥಿತಿಯಲ್ಲಿ ತಮ್ಮಮಕ್ಕಳನ್ನು ಶಾಲೆಗೆ ಕಳುಹಿಸಲು ಪೋಷಕರು ಸಿದ್ದರಿಲ್ಲ. ಆದರೂ ಎರಡನೇ ಬಾರಿ ಪೋಷಕರ ಜೊತೆಗೆ ಚರ್ಚಿಸಿ ಅವರ ಅಭಿಪ್ರಾಯಗಳನ್ನು ಪಡೆದು ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸುರೇಶ್ ಕುಮಾರ್ ಹೇಳಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
