ದಾವಣಗೆರೆ
ರಾಜ್ಯದಲ್ಲಿ ನಡೆಯುವ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಭವಿಷ್ಯ ನುಡಿದಿದ್ದಾರೆ.
ಇಲ್ಲಿನ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಗುರುವಾರ ಹಮ್ಮಿಕೊಳ್ಳಲಾಗಿದ್ದ ಕೆ.ಪಿ.ಸಿ.ಸಿ. ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಪದಗ್ರಹಣ ಸಮಾರಂಭದ ನೇರ ಪ್ರಸಾರ ವೀಕ್ಷಣೆ ಹಾಗೂ ಸ್ಥಳೀಯ ಕಾರ್ಯಕರ್ತರ ಪ್ರತಿಜ್ಞಾ ವಿಧಿ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಂಡ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, `ವೇಟ್ ಅಂಡ್ ವಾಚ್’ ಮುಂದೆ ಕಾಂಗ್ರೆಸ್ ಸರ್ಕಾರವೇ ಅಧಿಕಾರಕ್ಕೆ ಬರುತ್ತೆ. ಪಕ್ಷವನ್ನು ಒಗ್ಗಟ್ಟಿನಿಂದ ಮುನ್ನಡೆಸಲು ಡಿ.ಕೆ. ಶಿವಕುಮಾರ್ ಅವರೇ ಸೂಕ್ತ ವ್ಯಕ್ತಿಯಾಗಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಹುಮ್ಮಸ್ಸು ತುಂಬಿ ಮತ್ತೆ ಪಕ್ಷ ಅಧಿಕಾರಕ್ಕೆ ತರಲು ಶ್ರಮಿಸಲಿದ್ದಾರೆ. ಅಲ್ಲದೆ, ಕಾರ್ಯಕರ್ತರು, ಮುಖಂಡರು ಎಲ್ಲರೂ ಸೇರಿ ಸಂಘಟಿತರಾಗಿ ಡಿಕೆಶಿ ಅವರ ಕೈ ಬಲಪಡಿಸುವ ಅವಶ್ಯಕತೆ ಇದೆ ಎಂದರು.
ಡಿ.ಕೆ.ಶಿವಕುಮಾರ್ ಅವರ ಜೊತೆ ಕಾರ್ಯಾಧ್ಯಕ್ಷರಾಗಿ ಸತೀಶ್ ಜಾರಕಿಹೊಳಿ, ಸಲೀಂ ಅಹ್ಮದ್, ಈಶ್ವರ ಖಂಡ್ರೆ ಅವರೂ ಅಧಿಕಾರ ಸ್ವೀಕರಿಸುತ್ತಿರುವುದು ಪಕ್ಷಕ್ಕೆ ಮತ್ತಷ್ಟು ಬಲ ತಂದುಕೊಟ್ಟಂತಾಗಿದೆ. ಕಾಂಗ್ರೆಸ್ ಪಾಳೇಯದಲ್ಲಿ ಹುಮ್ಮಸ್ಸು ಹೆಚ್ಚಿದೆ. ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯ್ತಿ, ಪುರಸಭೆ, ನಗರಸಭೆ, ಮಹಾನಗರ ಪಾಲಿಕೆಯ ವಾರ್ಡುಗಳ ಮಟ್ಟದಲ್ಲಿ ಪ್ರತಿಯೊಬ್ಬರೂ ನೇರ ಪ್ರಸಾರ ವೀಕ್ಷಿಸುತ್ತಾ, ಪ್ರತಿಜ್ಞಾ ವಿಧಿ ಸ್ವೀಕರಿಸುತ್ತಿದ್ದಾರೆ. ಎಲ್ಲೆಡೆ ಪಕ್ಷಕ್ಕೆ ಸಾಕಷ್ಟು ಬೆಂಬಲ ವ್ಯಕ್ತವಾಗುತ್ತಿದೆ ಎಂದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಬಿ.ಮಂಜಪ್ಪ ಮಾತನಾಡಿ, ಡಿ.ಕೆ. ಶಿವಕುಮಾರ್ ಅವರಂತ ಧೀಮಂತ ನಾಯಕ ಅಧ್ಯಕ್ಷ ರಾಗುತ್ತಿರುವುದು ಎಲ್ಲರಲ್ಲೂ ಉತ್ಸಾಹ ಹೆಚ್ಚಿಸಿದೆ. ಸಿದ್ಧರಾಮಯ್ಯನವರೂ ಡಿಕೆಶಿ ಅವರ ನಾಯಕತ್ವ ಬೆಂಬಲಿಸಿದ್ದಾರೆ. ಮುಂದಿನ ದಿನಗಳಲ್ಲಿ ಈ ಎಲ್ಲಾ ನಾಯಕತ್ವದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಕೆಪಿಸಿಸಿ ವೀಕ್ಷಕರಾದ ಅಮೃತೇಶ್, ಪಾಲಿಕೆ ವಿಪಕ್ಷ ನಾಯಕ ಎ.ನಾಗರಾಜ್, ಸೈಯದ್ ಸೈಫುಲ್ಲಾ, ಡಿ.ಬಸವರಾಜ್, ಖಾಸಿಂ ಸಾಬ್, ಅನಿತಾಬಾಯಿ ಮಾಲತೇಶ್ ಜಾಧವ್, ಹಾಲೇಶ್ ಸೇರಿದಂತೆ ವಿವಿಧ ಸಂಘಟನೆಗಳ ಅಧ್ಯಕ್ಷರು, ಪದಾಧಿಕಾರಿಗಳು ಪಾಲ್ಗೊಂಡಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
