ಅಡೆತಡೆ ಇಲ್ಲದೆ ಪರೀಕ್ಷೆ ಸುಗಮವಾಗಿ ನಡೆಸಿ

ಚಿತ್ರದುರ್ಗ:

     ಸೆಪ್ಟೆಂಬರ್ 07 ರಿಂದ 19ರ ವರೆಗೆ ನಡೆಯಲಿರುವ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯನ್ನು ಜಿಲ್ಲೆಯಲ್ಲಿ ಯಾವುದೇ ಅಡತಡೆ ಇಲ್ಲದಂತೆ ಸುಗಮವಾಗಿ ನಡೆಸಬೇಕು ಎಂದು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ದ್ವಿತೀಯ ಪಿಯುಸಿ ಪೂರಕ ಪರೀಕ್ಷಾ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

    ಕೋವಿಡ್-19 ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ವಿದ್ಯಾರ್ಥಿಗಳ ಆರೋಗ್ಯದ ದೃಷ್ಠಿಯಿಂದ ಪರೀಕ್ಷಾ ಕೇಂದ್ರಗಳಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಕೊಳ್ಳಬೇಕು. ಸೋಂಕು ದೃಢಪಟ್ಟ ಪ್ರಕರಣಗಳು ಕಂಡುಬಂದರೆ ಅಂತಹ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಲ್ಲಿ ಪ್ರತ್ಯೇಕ ಕೊಠಡಿಗಳನ್ನು ವ್ಯವಸ್ಥೆ ಮಾಡಿ, ಇದಕ್ಕೆ ಅಗತ್ಯವಾದ ಸಿಬ್ಬಂದಿಯನ್ನು ನಿಯೋಜಿಸಲು ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.

    ಅಪರ ಜಿಲ್ಲಾಧಿಕಾರಿ ಸಿ.ಸಂಗಪ್ಪ ಮಾತನಾಡಿ, ಕೋವಿಡ್-19 ಹಿನ್ನಲೆಯಲ್ಲಿ ಪರೀಕ್ಷಾ ಕೇಂದ್ರಗಳಲ್ಲಿ ಕಡ್ಡಾಯವಾಗಿ ಸ್ಯಾನಿಟೈಸ್ ಮಾಡಬೇಕು. ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳಿಗೆ ಮಾಸ್ಕ್, ಸ್ಯಾನಿಟೈಸರ್, ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಸೂಚಿಸಬೇಕು. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ನೀರಿನ ಬಾಟಲಿಗಳನ್ನು ತೆಗೆದುಕೊಂಡು ಬರುವಂತೆ ಸೂಚನೆ ನೀಡಬೇಕು ಎಂದು ಹೇಳಿದರು.

    ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಚ್. ಸುಗೇಂದ್ರ ಮಾತನಾಡಿ, ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ 6529 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದು, ಇದಕ್ಕಾಗಿ ಚಿತ್ರದುರ್ಗ ತಾಲ್ಲೂಕಿನಲ್ಲಿ 03, ಚಳ್ಳಕೆರೆ 02, ಹಿರಿಯೂರು 01, ಮೊಳಕಾಲ್ಮುರು 01, ಹೊಸದುರ್ಗ 01, ಹೊಳಲ್ಕೆರೆ 01 ಪರೀಕ್ಷಾ ಕೇಂದ್ರ ಸೇರಿದಂತೆ ಒಟ್ಟು 09 ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಾಗಿದೆ ಎಂದು ಮಾಹಿತಿ ನೀಡಿದರು.

    ಜಿಲ್ಲೆಯಲ್ಲಿ ಯಾವುದೇ ಪರೀಕ್ಷೆ ಕೇಂದ್ರಗಳನ್ನು ಸೂಕ್ಷ್ಮ, ಅತಿ ಸೂಕ್ಷ್ಮ ಕೇಂದ್ರಗಳನ್ನು ಗುರುತಿಸಿಲ್ಲ, ಪರೀಕ್ಷೆ ನಡೆಯುವ ಕೇಂದ್ರಗಳ ಸುತ್ತ 200 ಮೀಟರ್ ನಿಷೇಧಾಜ್ಞೆ ಹಾಗೂ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಬೇಕು. ಪರೀಕ್ಷೆ ಕೇಂದ್ರಗಳಲ್ಲಿ ಹೆಚ್ಚಿನ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸುವಂತೆ ಮನವಿ ಮಾಡಿದರು.

   ವಿದ್ಯಾರ್ಥಿಗಳು, ಪೋಷಕರು ಪರೀಕ್ಷಾ ಕೇಂದ್ರದ ಹೊರಗಡೆ ಗುಂಪು ಸೇರದಂತೆ ಸೂಚನೆ ನೀಡಲಾಗುವುದು. ಪರೀಕ್ಷಾ ಕೇಂದ್ರದ ಹೊರಗಡೆ ಗುಂಪು ಸೇರದಂತೆ ನೋಡಿಕೊಳ್ಳಲು ಸಿಬ್ಬಂದಿಗಳನ್ನು ನಿಯೋಜಿಸಿ ಅಗತ್ಯ ಕ್ರಮಕೈಗೊಳ್ಳಲಾಗುವುದು. ಪರೀಕ್ಷಾ ಕೇಂದ್ರದ ಹೊರಗಡೆ ಸಾಮಾಜಿಕ ಅಂತರದಲ್ಲಿ ಸಾಲಾಗಿ ನಿಲ್ಲಲು ಬಾಕ್ಸ್‍ಗಳನ್ನು ಗುರುತಿಸುವುದು. ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಆಗಮಿಸುವಾಗ ಮತ್ತು ನಿರ್ಗಮಿಸುವಾಗ ಸಾಮಾಜಿಕ ಅಂತರ ಕಾಪಾಡಲು ಗೇಟ್‍ಗಳ ಬಳಿ ಅಗತ್ಯ ಸಿಬ್ಬಂದಿಯನ್ನು ನಿಯೋಜಿಸಲಾಗುವುದು.

    ಪರೀಕ್ಷೆ ಮುಗಿದ ನಂತರ ವಿದ್ಯಾರ್ಥಿಗಳು ಗುಂಪುಗಳಲ್ಲಿ ಹೋಗದಂತೆ ಕ್ರಮವಹಿಸುವುದು ಸೇರಿದಂತೆ ಪರೀಕ್ಷೆ ಮುಗಿದ ನಂತರ ಒಂದು ಕೊಠಡಿಯ ವಿದ್ಯಾರ್ಥಿಗಳು ಹೋದ ನಂತರ ಮತ್ತೋಂದು ಕೊಠಡಿ ವಿದ್ಯಾರ್ಥಿಗಳು ಸಾಲಾಗಿ ಸಾಮಾಜಿಕ ಅಂತರದಲ್ಲಿ ಹೊರಹೋಗುವಂತೆ ಅಗತ್ಯ ಕ್ರಮಕೈಗೊಳ್ಳಲಾಗುವುದು ಎಂದು ಸಭೆಗೆ ತಿಳಿಸಿದರು.

    ಸಭೆಯಲ್ಲಿ ಉಪವಿಭಾಗಾಧಿಕಾರಿ ಪ್ರಸನ್ನ, ಜಿಲ್ಲಾ ಖಜಾನಾಧಿಕಾರಿ ಎಸ್.ಪ್ರಭಾವತಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಫಾಲಾಕ್ಷ ಸೇರಿದಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳು, ತಹಶೀಲ್ದಾರ್‍ಗಳು, ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು ಉಪಸ್ಥಿತರಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link