ಬೆಂಗಳೂರು
ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಸರ್ಕಾರದ ವಿರುದ್ಧ ಕಾಂಗ್ರೆಸ್ ವಿಧಾನಸಭೆಯಲ್ಲಿ ಅವಿಶ್ವಾಸ ನಿರ್ಣಯ ಮಂಡಿಸಿದೆ.ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಶಾಸಕಾಂಗ ಸಭೆಯ ನಂತರ ಅವರು ಸದನದಲ್ಲಿ ಅವಿಶ್ವಾಸ ಗೊತ್ತುವಳಿ ಮಂಡಿಸಿದರು.
ರೈಲ್ವೆ ಸಚಿವ ಸುರೇಶ್ ಅಂಗಡಿ ಅವರ ನಿಧನಕ್ಕೆ ಸಂತಾಪ ಸೂಚಿಸಿದ ನಂತರ ಸದನ ಸೇರಿದಾಗ ಸಿದ್ದರಾಮಯ್ಯ, ನಿಯಮ 167 ರ ಅಡಿ ತಾವು ನೋಟೀಸ್ ನೀಡಿದ್ದು, ಯಡಿಯೂರಪ್ಪ ಅವರ ನೇತೃತ್ವದ ನಾಯಕತ್ವದ ಮೇಲೆ ನಮಗೆ ವಿಶ್ವಾಸವಿಲ್ಲ. ಅವಿಶ್ವಾಸ ನಿರ್ಣಯ ಮಂಡನೆಗೆ ಅವಕಾಶ ಕೊಡಿ ಎಂದು ಹೇಳಿದರು.
ಇದಕ್ಕೆ ಸ್ಪಂದಿಸಿದ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ತಮಗೆ ನೋಟೀಸ್ ಗೆ ತಲುಪಿದ್ದು, ಇದಕ್ಕೆ 23 ಮಂದಿ ಶಾಸಕರು ಸಹಿಮಾಡಿದ್ದಾರೆ. ಅವಿಶ್ವಾಸ ನಿರ್ಣಯ ಮಂಡನೆಗೆ ಒಪ್ಪಿಗೆ ಇದ್ದು ನಾಳೆ ಗುರುವಾರ ನಿಮಗೆ ಚರ್ಚೆಗೆ ಅವಕಾಶ ಕೊಡುವುದಾಗಿ ಹೇಳಿದರು.
ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಕಂದಾಯ ಸಚಿವ ಆರ್.ಅಶೋಕ್, ಬಿಜೆಪಿ ಸರ್ಕಾರಕ್ಕೆ ಬಹುಮತವಿದ್ದು, ಕಾಂಗ್ರೆಸ್ ನವರು ರಾಜಕೀಯ ಗಿಮಿಕ್ ನಲ್ಲಿ ತೊಡಗಿಕೊಂಡಿದ್ದಾರೆ. ಚರ್ಚೆಗೆ ಅವಕಾಶ ನೀಡಬೇಡಿ ಎಂದು ಸ್ಪೀಕರ್ ಅವರನ್ನು ಆಗ್ರಹಿಸಿದರು. ಇದಕ್ಕೆ ಕಾಂಗ್ರೆಸ್ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದರು. ಆಗ ಆಡಳಿತ ಮತ್ತು ಪ್ರತಿಪಕ್ಷ ಸದಸ್ಯರ ನಡುವೆ ತೀವ್ರ ಮಾತಿನ ಚಕಮಕಿ ನಡೆಯಿತು. ಯಾರು ಏನು ಹೇಳುತ್ತಿದ್ದಾರೆ ಎನ್ನುವುದು ತಿಳಿಯದಾಯಿತು.
ಕಾಂಗ್ರೆಸ್ ಸದಸ್ಯ ಎಚ್.ಕೆ. ಪಾಟೀಲ್ ಮಾತನಾಡಿ, ಅವಿಶ್ವಾಸ ನಿರ್ಣಯ ಮಂಡಿಸಿದ ನಂತರ ಪ್ರಮುಖ ವಿಷಯಗಳ ಬಗ್ಗೆ ಚರ್ಚೆಗೆ ಅವಕಾಶ ನೀಡುವಂತಿಲ್ಲ. ಹೀಗಾಗಿ ಮೊದಲು ಅವಿಶ್ವಾಸ ಗೊತ್ತುವಳಿ ಮೇಲಿನ ಚರ್ಚೆಗೆ ಅವಕಾಶ ಕೊಡಿ ಎಂದು ಹೇಳಿದರು.
ಇದಕ್ಕೆ ಪ್ರತಿಕ್ರಿಯೆ ನೀಡಿದ ಸ್ಪೀಕರ್ ಕಾಗೇರಿ, ಅವಿಶ್ವಾಸ ನಿರ್ಣಯದ ಮೇಲಿನ ಚರ್ಚೆಯನ್ನು ಕೈಗೆತ್ತಿಕೊಳ್ಳಬೇಕೆಂಬ ಯಾವುದೇ ನಿಯಮವಿಲ್ಲ. ಹೀಗಾಗಿ ನಾಳೆ ಚರ್ಚೆಗೆ ಅವಕಾಶ ನೀಡುವುದಾಗಿ ಹೇಳಿ ಗೊಂದಲಕ್ಕೆ ತೆರೆ ಎಳೆದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ