ಬೆಂಗಳೂರು :
ಕೊರೊನಾ ಸೋಂಕು ಮತ್ತೆ ಹೆಚ್ಚುವ ಸಾಧ್ಯತೆ ಇರುವುದರಿಂದ 2021ರ ಹೊಸ ವರ್ಷಾಚರಣೆ ಸಡಗರ-ಸಂಭ್ರಮಕ್ಕೆ ಬ್ರೇಕ್ ಹಾಕಲು ಬಿಬಿಎಂಪಿ ಚಿಂತನೆ ನಡೆಸಿದೆ.
ಪ್ರತಿ ವರ್ಷ ಹೊಸ ವರ್ಷಾಚರಣೆ ಸಂದರ್ಭದಲ್ಲಿ ಸಾವಿರಾರು ಮಂದಿ ಎಂ.ಜಿ.ರಸ್ತೆಯಲ್ಲಿ ಜಮಾಯಿಸಿ ಮೋಜು ಮಸ್ತಿ ನಡೆಸುವ ಮೂಲಕ ಹೊಸ ವರ್ಷಕ್ಕೆ ಸ್ವಾಗತ ಕೋರುವುದು ವಿಶೇಷವಾಗಿತ್ತು. ಆದರೆ ಈ ಸಂಭ್ರಮಕ್ಕೆ ಇದೀಗ ಬ್ರೇಕ್ ಹಾಕಲು ನಿರ್ಧರಿಸಲಾಗುತ್ತಿದೆ ಎಂದು ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ತಿಳಿಸಿದ್ದಾರೆ.
ಹೊಸ ವರ್ಷಾಚರಣೆಯಲ್ಲಿ ಎಂ.ಜಿ. ರಸ್ತೆ ಹಾಗೂ ಬ್ರಿಗೇಡ್ ರಸ್ತೆಯಲ್ಲಿ ಕಿಕ್ಕಿರಿದು ಜನ ಸೇರುತ್ತಾರೆ. ಸಾಮಾಜಿಕ ಅಂತರ ಪಾಲನೆ ಮಾಡುವುದು ಕಷ್ಟಸಾಧ್ಯವಾಗುತ್ತದೆ. ಕೋವಿಡ್ ನಿಯಮ ಪಾಲನೆ ಕೂಡ ಸಾಧ್ಯವಿಲ್ಲ. ಹೀಗಾಗಿ ಕೊರೊನಾ ಸೋಂಕು ಹೆಚ್ಚುವ ಸಾಧ್ಯತೆ ದಟ್ಟವಾಗಿದೆ. ಈ ನಿಟ್ಟಿನಲ್ಲಿ ಹೊಸ ವರ್ಷದ ಸಂಭ್ರಮಾಚರಣೆಗೆ ಹಾಗೂ ಮೋಜು-ಮಸ್ತಿಗೆ ಕಡಿವಾಣ ಹಾಕಲು ಬಿಬಿಎಂಪಿ ಚಿಂತನೆ ನಡೆಸಿದೆ, ಈ ಬಗ್ಗೆ ಈಗಾಗಲೇ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಅವರಿಗೆ ವರದಿ ನೀಡಿದ್ದು, ಸರ್ಕಾರಕ್ಕೂ ಮನವಿ ಮಾಡುವ ಬಗ್ಗೆ ನಿರ್ಧರಿಸಲಾಗಿದೆ ಎಂದರು.
ನಗರದಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಬರುತ್ತಿದ್ದರೂ ಎರಡನೆ ಹಂತದ ಭೀತಿ ಇರುವ ಹಿನ್ನೆಲೆಯಲ್ಲಿ ಸಂಭ್ರಮಾಚರಣೆಗೆ ಅವಕಾಶ ನೀಡಬಾರದು ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳು ಎಚ್ಚರಿಕೆ ನೀಡಿರುವ ಹಿನ್ನೆಲೆಯಲ್ಲಿ ಬಿಬಿಎಂಪಿ ಈ ಕ್ರಮಕ್ಕೆ ಮುಂದಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
