ತುಮಕೂರು : 680ಲಕ್ಷ ರೂ. ವೆಚ್ಚದ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ

 ತುಮಕೂರು : 

      ನಗರದ ಬಿ.ಹೆಚ್. ರಸ್ತೆಯಲ್ಲಿರುವ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಸ್ಮಾರ್ಟ್‍ಸಿಟಿ ಯೋಜನೆಯಡಿ 680 ಲಕ್ಷ ರೂ. ವೆಚ್ಚದಲ್ಲಿ ಕೈಗೊಂಡಿರುವ ಕ್ರೀಡಾರಂಗ ಅಭಿವೃದ್ಧಿ, ಕಾಂಪೌಂಡ್ ಗೋಡೆ, ಪ್ರವೇಶ ದ್ವಾರ ನಿರ್ಮಾಣ ಸೇರಿದಂತೆ ವಿವಿಧ ಕಾಮಗಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ. ಮಾಧುಸ್ವಾಮಿ ಶಂಕುಸ್ಥಾಪನೆ ನೆರವೇರಿಸಿದರು.

      ನಂತರ ಮಾತನಾಡಿದ ಅವರು, ಸರ್ಕಾರಿ ಜೂನಿಯರ್ ಕಾಲೇಜು ಮೈದಾನವನ್ನು ಬೇರೆ ಉದ್ದೇಶಗಳಿಗೆ ಕೊಡದೆ ಶಾಲಾ ಚಟುವಟಿಕೆಗಳಿಗೆ ಮಾತ್ರ ಬಳಸಿಕೊಳ್ಳುವ ಒತ್ತಾಸೆ ಸಾರ್ವಜನಿಕ ವಲಯದಿಂದ ಕೇಳಿ ಬಂದಿದ್ದು, ಕಾಂಪೌಂಡ್ ಸುತ್ತ ಸಾರ್ವಜನಿಕರು ಕುಳಿತುಕೊಳ್ಳಲು ಸಿಮೆಂಟ್ ಕುರ್ಚಿಗಳ ವ್ಯವಸ್ಥೆ ಕಲ್ಪಿಸಲಾಗುವುದು. ಇದಕ್ಕಾಗಿ 800 ಅಡಿ ವಿಸ್ತೀರ್ಣದ ಜಾಗ ಮಾಡಿಕೊಡಲಾಗುವುದು ಎಂದು ತಿಳಿಸಿದರು.

      ಯಾವುದೇ ಕಾರಣಕ್ಕೂ ಈ ಮೈದಾನವು ಬೇರೆ ಉದ್ದೇಶಗಳಿಗೆ ಬಳಕೆಯಾಗಬಾರದು. ಅದಕ್ಕೆ ಆಸ್ಪದ ನೀಡದ ರೀತಿಯಲ್ಲಿ ಮೈದಾನದ ಮುಂಭಾಗದಲ್ಲಿ ವಿಧಾನಸೌಧದ ಆವರಣ ಗೋಡೆ ಮಾದರಿಯಲ್ಲಿ ಗ್ರಿಲ್‍ನಿಂದ ಆವರಣ ಗೋಡೆ ನಿರ್ಮಿಸಿ ಯಾರೂ ಸುಲಭವಾಗಿ ಒಳಗೆ ಬಂದು ಹೋಗದಂತೆ ವ್ಯವಸ್ಥೆ ಮಾಡಲಾಗುವುದು. ಅಲ್ಲದೆ ಎಲ್ಲರೂ ಗೇಟ್ ಮುಖಾಂತರವೇ ಒಳಗೆ ಬರುವಂತೆ ಸುಸಜ್ಜಿತ ಪ್ರವೇಶ ದ್ವಾರ ಸಹ ನಿರ್ಮಾಣವಾಗಲಿದೆ ಎಂದರು.

      ಈ ಮೈದಾನವು ಶಾಲಾ ಚಟುವಟಿಕೆ ಜೊತೆಗೆ ಖಾಸಗಿ, ರಾಜಕೀಯ ಕಾರ್ಯಕ್ರಮಗಳಿಗೆ ಬಳಕೆ ಮಾಡುವ ಸಂಬಂಧ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸಮಿತಿ ರಚಿಸಲಾಗುವುದು ಎಂದರು.

      ಸಂಸದ ಜಿ.ಎಸ್. ಬಸವರಾಜು, ಇಡೀ ರಾಜ್ಯಕ್ಕೆ ಹೆಸರುವಾಸಿಯಾಗಿದ್ದ ಈ ಹೈಸ್ಕೂಲ್ ತನ್ನದೇ ಆದ ಇತಿಹಾಸ ಹೊಂದಿದೆ. 25 ಎಕರೆ ಜಾಗದಲ್ಲಿ ಅತ್ಯಾಧುನಿಕ ರೀತಿಯಲ್ಲಿ ಕ್ರೀಡಾ ಚಟುವಟಿಕೆಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಅಭಿವೃದ್ಧಿ ಮಾಡಲಾಗುತ್ತಿದೆ ಎಂದರು.

      ಶಾಸಕ ಜ್ಯೋತಿಗಣೇಶ್ ಪ್ರಾಸ್ತಾವಿಕ ನುಡಿಗಳನ್ನಾಡಿ, ಜೂನಿಯರ್ ಕಾಲೇಜು ಮೈದಾನದಲ್ಲಿ ಸುಮಾರು 6.80 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಕಾರ್ಯಗಳ ಶಂಕುಸ್ಥಾಪನೆಯನ್ನು ನೆರವೇರಿಸಲಾಗಿದೆ. ಈ ಮೈದಾನವನ್ನು 6 ದಶಕಗಳಿಂದ ಕ್ರೀಡಾ ಚಟುವಟಿಕೆಗೆ ಅನುವು ಮಾಡಿಕೊಡಲಾಗಿದ್ದು, ಇದರಿಂದ ಕ್ರೀಡಾಪಟುಗಳಿಗೆ ತುಂಬಾ ಅನುಕೂಲವಾಗಿದೆ. ಈ ಮೈದಾನದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ 50 ಕೋಟಿ ರೂ. ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಹಮ್ಮಿಕೊಳ್ಳಲಾಗಿತ್ತು. ಹೊಸ ಕಟ್ಟಡಗಳು, ಸ್ಮಾರ್ಟ್ ಕ್ಲಾಸ್ ರೂಂ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಬೇಕಿತ್ತು. ಆದರೆ ಈ ಜಾಗಕ್ಕೆ ಮಹಾತ್ಮ ಗಾಂಧೀಜಿಯವರು ಬಂದು ಹೋಗಿರುವ ಇತಿಹಾಸವಿದೆ. ಹಾಗಾಗಿ ಸಾರ್ವಜನಿಕರು ಈ ಕಾಮಗಾರಿಗಳಿಗೆ ವಿರೋಧ ವ್ಯಕ್ತಪಡಿಸಿದ್ದರಿಂದ ಅದನ್ನು ಕೈ ಬಿಡಬೇಕಾಯಿತು ಎಂದರು.   

      ಸದ್ಯಕ್ಕೆ ಮೈದಾನದಲ್ಲಿ ಬಾಲ್ ಬ್ಯಾಡ್ಮಿಂಟನ್, ಖೋಖೋ, ಕಬಡ್ಡಿ ಸೇರಿದಂತೆ ಇತರ ಕ್ರೀಡಾ ಚಟುವಟಿಕೆಗಳಿಗೆ ಅನುವಾಗುವಂತಹ ಕಾಮಗಾರಿಗೆ ಚಾಲನೆ ನೀಡಲಾಗಿದೆ ಎಂದು ಅವರು ಹೇಳಿದರು.

      ಮುಂಬರುವ ದಿನಗಳಲ್ಲಿ ಕಾಲೇಜು ಮತ್ತು ಮೈದಾನ ಪ್ರತ್ಯೇಕವಾಗಬೇಕು. ಮೈದಾನ ಬಳಕೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗುವುದು ಎಂದು ತಿಳಿಸಿದರು.

      ಈ ಸಂದರ್ಭದಲ್ಲಿ ಶಾಸಕ ಬಿ.ಸಿ. ನಾಗೇಶ್, ಮೇಯರ್ ಫರೀದಾಬೇಗಂ, ಉಪಮೇಯರ್ ಶಶಿಕಲಾ ಗಂಗಹನುಮಯ್ಯ, ಸದಸ್ಯೆ ಗಿರಿಜಾ ಧನಿಯಾಕುಮಾರ್, ಜಿಲ್ಲಾಧಿಕಾರಿ ಡಾ. ಕೆ. ರಾಕೇಶ್‍ಕುಮಾರ್, ಸ್ಮಾರ್ಟ್‍ಸಿಟಿ ವ್ಯವಸ್ಥಾಪಕ ನಿರ್ದೇಶಕ ಬಿ.ಟಿ. ರಂಗಸ್ವಾಮಿ, ಪಾಲಿಕೆ ಆಯುಕ್ತ ರೇಣುಕಾ ಮತ್ತಿತರರು ಉಪಸ್ಥಿತರಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link