ತುಮಕೂರು :  ಗ್ರಾ.ಪಂ. ಚುನಾವಣೆ: ನಿಷೇಧಾಜ್ಞೆ ಜಾರಿ

 ತುಮಕೂರು : 

      ಜಿಲ್ಲೆಯಲ್ಲಿ ಎರಡು ಹಂತಗಳಲ್ಲಿ ನಡೆಯಲಿರುವ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಆಯಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಿಗಧಿತ ದಿನಾಂಕದಂದು ನಿಷೇದಾಜ್ಞೆ ಹೊರಡಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ: ಕೆ. ರಾಕೇಶ್ ಕುಮಾರ್ ಆದೇಶಿಸಿದ್ದಾರೆ.

      ಮೊದಲನೇ ಹಂತದ ಚುನಾವಣೆಯು ಡಿಸೆಂಬರ್ 22ರಂದು ಹಾಗೂ ಎರಡನೇ ಹಂತದ ಚುನಾವಣೆಯು ಡಿಸೆಂಬರ್ 27ರಂದು ನಡೆಯಲಿದೆ. ಮೊದಲ ಹಂತದ ಚುನಾವಣೆ ನಡೆಯಲಿರುವ ತುಮಕೂರು, ಗುಬ್ಬಿ, ಕುಣಿಗಲ್, ಪಾವಗಡ, ಕೊರಟಗೆರೆ ತಾಲ್ಲೂಕಿನ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಡಿಸೆಂಬರ್ 20ರ ಸಂಜೆ 6 ಗಂಟೆಯಿಂದ ಡಿ.22ರ ಮಧ್ಯರಾತ್ರಿ 12 ಗಂಟೆಯವರೆಗೆ ಹಾಗೂ ಎರಡನೇ ಹಂತದ ಚುನಾವಣೆ ನಡೆಯಲಿರುವ ತಿಪಟೂರು, ತುರುವೇಕೆರೆ, ಚಿಕ್ಕನಾಯಕನಹಳ್ಳಿ, ಶಿರಾ, ಮಧುಗಿರಿ ತಾಲ್ಲೂಕಿನ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಡಿಸೆಂಬರ್ 25ರ ಸಂಜೆ 6 ಗಂಟೆಯಿಂದ ಡಿ.27ರ ಮಧ್ಯರಾತ್ರಿ 12 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ.

      ನಿಷೇದಾವಧಿಯಲ್ಲಿ 5 ಜನರ ಮೇಲ್ಪಟ್ಟು ಗುಂಪುಗಾರಿಕೆ ಮಾಡುವುದಾಗಲಿ, ಇತರೆ ಕಾನೂನು ಬಾಹಿರ ಚಟುವಟಿಕೆಗಳನ್ನು ನಡೆಸುವಂತಿಲ್ಲ. ಮೆರವಣಿಗೆ, ಅಕ್ರಮ ಗುಂಪು ಸೇರುವಿಕೆ, ಪಟಾಕಿ ಸಿಡಿಸುವಂತಿಲ್ಲ. ಯಾವುದೇ ರೀತಿಯ ಮತೀಯ ಭಾವನೆಗಳನ್ನು ಕೆರಳಿಸುವಂತಹ ಪ್ರಚೋದನಕಾರಿ ಹೇಳಿಕೆಗಳನ್ನು ನೀಡುವುದು/ ಘೋಷಣೆ ಕೂಗುವುದು/ ಭಿತ್ತಿ ಪತ್ರಗಳನ್ನು ಪ್ರಕಟಿಸುವುದು ಮಾಡತಕ್ಕದ್ದಲ್ಲ. ಶಾಂತಿ ಮತ್ತು ಸಾಮಾಜಿಕ ಸಾಮರಸ್ಯಕ್ಕೆ ಭಂಗವನ್ನುಂಟುಮಾಡುವ ಸುಳ್ಳು ವದಂತಿಗಳನ್ನು ಹಬ್ಬಿಸುವಂತಿಲ್ಲ.

     ಸಾರ್ವಜನಿಕ ಪ್ರಾಣ ಹಾಗೂ ಆಸ್ತಿಪಾಸ್ತಿಗಳಿಗೆ ಹಾನಿಯುಂಟಾಗುವ ರೀತಿಯಲ್ಲಿ ವರ್ತಿಸತಕ್ಕದ್ದಲ್ಲ. ಶವಸಂಸ್ಕಾರ, ಮಧುವೆ ಮತ್ತು ಧಾರ್ಮಿಕ ಕಾರ್ಯ ಹೊರತುಪಡಿಸಿ ಯಾವುದೇ ಸಭೆ-ಸಮಾರಂಭ, ಮೆರವಣಿಗೆ ಮಾಡುವಂತಿಲ್ಲ. ನಿಷೇಧಾಜ್ಞೆಯನ್ನು ಉಲ್ಲಂಘಿಸಿದ ವ್ಯಕ್ತಿಗಳನ್ನು ಕೂಡಲೇ ಬಂಧಿಸಲು ಅಗತ್ಯ ಕಾನೂನು ಕ್ರಮ ಜರುಗಿಸಲು ಪೊಲೀಸ್ ಇಲಾಖೆಗೆ ಸೂಚಿಸಲಾಗಿದೆ.

     ಈ ನಿಷೇಧಾದೇಶವು ಮತದಾನ ನಡೆಯಲಿರುವ ದಿನಾಂಕಗಳಲ್ಲಿ ಬೆಳಿಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮತದಾನ ಕೇಂದ್ರ ಸ್ಥಳಕ್ಕೆ ಅನ್ವಯಿಸುವುದಿಲ್ಲ ಎಂದು ಅವರು ತಿಳಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap