ಮೈಸೂರು :
ಮೈಸೂರಿನ ಚಾಮುಂಡಿಬೆಟ್ಟಕ್ಕೆ ಹೊಸ ವರ್ಷದ ಮೊದಲ ದಿನ(ಜ.1ರಂದು) ಸಾರ್ವಜನಿಕರ ಪ್ರವೇಶ ನಿರ್ಬಂಧಿಸಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಆದೇಶ ಹೊರಡಿಸಿದ್ದಾರೆ.
ರೂಪಾಂತರ ಕೋವಿಡ್ ಸೋಂಕು ಪತ್ತೆಯಾದ ಹಿನ್ನಲೆಯಲ್ಲಿ ಹೆಚ್ಚು ಜನರು ಸೇರದಂತೆ ಸರ್ಕಾರ ಸೂಚನೆ ನೀಡಿದೆ. ಆದ್ದರಿಂದ, ಜಾತ್ರೆ, ಉತ್ಸವಗಳನ್ನು ರದ್ದುಗೊಳಿಸಲಾಗುತ್ತಿದೆ. ಹೊಸ ವರ್ಷದ ಸಂದರ್ಭದಲ್ಲಿ ಹೆಚ್ಚು ಜನರು ಭೇಟಿ ನೀಡುವುದರಿಂದ ಭಕ್ತರ ಪ್ರವೇಶ ನಿಷೇಧಿಸಲಾಗಿದೆ.
ಜ.1ರಂದು ಶುಕ್ರವಾರ ಹೊಸ ವರ್ಷಾರಂಭದ ಹಿನ್ನೆಲೆಯಲ್ಲಿ ಚಾಮುಂಡಿಬೆಟ್ಟದ ದೇವಸ್ಥಾನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ದೇವಿ ದರ್ಶನಕ್ಕೆ ಆಗಮಿಸುವ ಕಾರಣ ಕೋವಿಡ್-19 ಸಾಂಕ್ರಾಮಿಕ ರೋಗ ಹರಡುವುದನ್ನು ತಡೆಗಟ್ಟುವ ಉದ್ದೇಶದಿಂದ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿದೆ. ಚಾಮುಂಡಿಬೆಟ್ಟಕ್ಕೆ ಮೆಟ್ಟಿಲುಗಳ ಮೂಲಕವೂ ಪ್ರವೇಶ ಮಾಡುವಂತಿಲ್ಲ ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ಸ್ಪಷ್ಟಪಡಿಸಿದ್ದಾರೆ.
ದೇವಾಲಯದಲ್ಲಿ ನಡೆಯಲಿರುವ ಧಾರ್ಮಿಕ ಕಾರ್ಯಕ್ರಮವನ್ನು ಸರ್ಕಾರದ ಮಾರ್ಗಸೂಚಿಯಂತೆ ದೇವಾಲಯದ ಅರ್ಚಕರು ಮತ್ತು ಸಿಬ್ಬಂದಿಯವರ ಉಪಸ್ಥಿತಿಯಲ್ಲಿ ಸುರಕ್ಷಿತವಾಗಿ ಹಾಗೂ ಸರಳವಾಗಿ ನಡೆಸಲು ಅವಕಾಶ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2020/06/Chamundi-betta.jpg)