ತುಮಕೂರು :
ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ನಡೆದ ಗ್ರಾಮ ಪಂಚಾಯಿತಿ ಚುನಾವಣೆಗೆ ಸಂಬಂಧಿಸಿದಂತೆ ಡಿಸೆಂಬರ್ 30ರಂದು ಆಯಾ ತಾಲೂಕುಗಳಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದ್ದು, ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮತ ಎಣಿಕಾ ಕೇಂದ್ರದ ಸುತ್ತಮುತ್ತಲಿನ 500 ಮೀ. ವ್ಯಾಪ್ತಿಯಲ್ಲಿ ಡಿಸೆಂಬರ್ 30ರ ಬೆಳಿಗ್ಗೆ 6 ರಿಂದ ಡಿಸೆಂಬರ್ 31ರ ಬೆಳಿಗ್ಗೆ 8 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ: ಕೆ. ರಾಕೇಶ್ ಕುಮಾರ್ ಆದೇಶ ಹೊರಡಿಸಿದ್ದಾರೆ.
ಚುನಾವಣೆಯಲ್ಲಿ ಜಯಗಳಿಸಿದ ಅಭ್ಯರ್ಥಿಗಳು ವಿಜಯೋತ್ಸವ ಆಚರಿಸಲು ಮೆರವಣಿಗೆ ಮುಖೇನ ಘೋಷಣೆಗಳನ್ನು ಕೂಗುವ ಹಾಗೂ ಪರಾಭವಗೊಂಡ ಅಭ್ಯರ್ಥಿಗಳ ಬೆಂಬಲಿಗರು ಮತ್ತು ಜಯಗಳಿಸಿದ ಅಭ್ಯರ್ಥಿಗಳ ಬೆಂಬಲಿಗರ ಮಧ್ಯೆ ಗಲಾಟೆ ಆಗುವ ಸಾಧ್ಯತೆಗಳು ಇರುವುದರಿಂದ ಈ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ನಿಷೇಧಾಜ್ಞೆ ಅವಧಿಯಲ್ಲಿ ಐದು ಜನರ ಮೇಲ್ಪಟ್ಟು ಗುಂಪುಗಾರಿಕೆ ಮಾಡುವುದಾಗಲಿ ಇತರೆ ಕಾನೂನು ಬಾಹಿರ ಚಟುವಟಿಕೆಗಳನ್ನು ನಡೆಸುವಂತಿಲ್ಲ. ಮೆರವಣಿಗೆ, ಅಕ್ರಮ ಗುಂಪು ಸೇರುವಿಕೆ, ಪಟಾಕಿ ಸಿಡಿಸುವಂತಿಲ್ಲ. ಯಾವುದೇ ರೀತಿಯ ಮತೀಯ ಭಾವನೆಗಳನ್ನು ಕೆರಳಿಸುವಂತಹ ಪ್ರಚೋದನಕಾರಿ ಹೇಳಿಕೆಗಳನ್ನು ನೀಡುವುದು, ಘೋಷಣೆ ಕೂಗುವುದು ಹಾಗೂ ಭಿತ್ತಿ ಪತ್ರಗಳನ್ನು ಪ್ರಕಟಿಸುವುದು ಮಾಡತಕ್ಕದ್ದಲ್ಲ. ಶಾಂತಿ ಮತ್ತು ಸಾಮಾಜಿಕ ಸಾಮರಸ್ಯಕ್ಕೆ ಭಂಗವುಂಟು ಮಾಡುವ ಸುಳ್ಳು ವದಂತಿಗಳನ್ನು ಹಬ್ಬಿಸಬಾರದು, ಸಾರ್ವಜನಿಕ ಪ್ರಾಣ ಮತ್ತು ಸಾರ್ವಜನಿಕ ಆಸ್ತಿ-ಪಾಸ್ತಿಗಳಿಗೆ ಹಾನಿ ಉಂಟಾಗುವ ರೀತಿಯಲ್ಲಿ ವರ್ತಿಸತಕ್ಕದ್ದಲ್ಲ. ನಿಷೇಧಾಜ್ಞೆ ಅವಧಿಯಲ್ಲಿ ಶವಸಂಸ್ಕಾರ, ಮದುವೆ ಮತ್ತು ಧಾರ್ಮಿಕ ಕಾರ್ಯ ಹೊರತುಪಡಿಸಿ ಯಾವುದೇ ಸಭೆ ಸಮಾರಂಭ ಮತ್ತು ಮೆರವಣಿಗೆ ಮಾಡುವಂತಿಲ್ಲ. ನಿಷೇಧಾಜ್ಞೆಯನ್ನು ಉಲ್ಲಂಘಿಸಿದ ವ್ಯಕ್ತಿಗಳನ್ನು ಕೂಡಲೇ ಬಂಧಿಸಿ ಅವರ ವಿರುದ್ಧ ಕಾನೂನು ರೀತ್ಯಾ ಕ್ರಮ ಜರುಗಿಸಲು ಪೊಲೀಸ್ ಇಲಾಖೆಗೆ ಆದೇಶಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ