ತುಮಕೂರು :
ಕೇಂದ್ರದ ಕೋವಿಡ್-19 ಮೇಲ್ವಿಚಾರಣಾ ಸಮಿತಿಯ ತಂಡವು ಜಿಲ್ಲಾಸ್ಪತ್ರೆಯ ಕೋವಿಡ್ ಲಸಿಕಾ ಕೇಂದ್ರಕ್ಕಿಂದು ಭೇಟಿ ನೀಡಿ ಕೋವಿಡ್ ಲಸಿಕೆ ಪಡೆದ ಹಿರಿಯ ನಾಗರಿಕ ಫಲಾನುಭವಿಗಳಿಂದ ಮಾಹಿತಿ ಪಡೆಯಿತು.
ಜಿಲ್ಲೆಯಲ್ಲಿ ಕೋವಿಡ್-19 ಸಾಂಕ್ರಾಮಿಕ ರೋಗದ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೈಗೊಂಡಿರುವ ಕ್ರಮಗಳು ಹಾಗೂ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮವನ್ನು ಪರಿಶೀಲಿಸಲು ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿದ್ದ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವಾಲಯದ ಹಣಕಾಸು ಸಲಹೆದಾರ ನೀಲಾಂಬುಜ್ ಶರಣ್, ನವ ದೆಹಲಿ, ಸಫ್ದರ್ಜಂಗ್ ಆಸ್ಪತ್ರೆ ಮೂತ್ರ ರೋಗ ತಜ್ಞ ಡಾ|| ರೋಹಿತ್, ಬೆಂಗಳೂರು ನಿಮ್ಹಾನ್ಸ್ ಎಪಿಡೆಮಿಯಾಲಜಿ ವಿಭಾಗದ ಮುಖ್ಯಸ್ಥ, ಡಾ|| ಗಿರೀಶ್ ಅವರನ್ನೊಳಗೊಂಡ ತಂಡವು ಲಸಿಕೆ ಪಡೆದ ಮೇಲೆ ಲಸಿಕೆಯಿಂದಾಗಬಹುದಾದ ಪರಿಣಾಮಗಳ ಬಗ್ಗೆ ಫಲಾನುಭವಿಗಳಿಂದಲೇ ಮಾಹಿತಿ ಪಡೆದು ಎರಡೂ ಹಂತದ ಲಸಿಕೆಯನ್ನು ತಪ್ಪದೇ ಪಡೆಯಬೇಕು. ಆರೋಗ್ಯದಲ್ಲಿ ಏರುಪೇರಾದಲ್ಲಿ ತಕ್ಷಣವೇ ಸಮೀಪದ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಬೇಕೆಂದು ಮನವಿ ಮಾಡಿತು.
ಜಿಲ್ಲೆಯಲ್ಲಿ ಕೋವಿಡ್ ಸೋಂಕು ತಡೆಗಟ್ಟುವಲ್ಲಿ ಹಾಗೂ ಲಸಿಕೆ ನೀಡುವಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ತಂಡವು ಮುಂದಿನ ದಿನಗಳಲ್ಲಿ ಸೋಂಕು ಉಲ್ಬಣಿಸಿದಲ್ಲಿ ಕೈಗೊಳ್ಳಬೇಕಾದ ಸಿದ್ಧತೆ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಿತು. ನಂತರ ಜಿಲ್ಲಾಸ್ಪತ್ರೆಯಲ್ಲಿರುವ ಕೋವಿಡ್ ಪರೀಕ್ಷಾ ಪ್ರಯೋಗಾಲಯಕ್ಕೆ ಭೇಟಿ ನೀಡಿ ಪರಿಶೀಲಿಸಿತು.
ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಕಳೆದ ವರ್ಷದಿಂದ ಈವರೆಗೂ ಜಿಲ್ಲೆಯಲ್ಲಿ ಕೈಗೊಂಡ ಕ್ರಮಗಳ ಬಗ್ಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ನಾಗೇಂದ್ರಪ್ಪ ಅವರು ತಂಡಕ್ಕೆ ಮಾಹಿತಿ ನೀಡಿದರು.
ನಂತರ ತಂಡವು ನಗರದ ಸಿದ್ಧಾರ್ಥ ವೈದ್ಯಕೀಯ ಮಹಾವಿದ್ಯಾಲಯದ ಆರ್ಟಿಪಿಸಿಆರ್ ಪ್ರಯೋಗಾಲಯಕ್ಕೆ ಭೇಟಿ ನೀಡಿ ಪರಿಶೀಲಿಸಿ ನಗರದ ಕುರಿಪಾಳ್ಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಕೋವಿಡ್-19 ನಿಯಂಣತ್ರಕ್ಕೆ ಕೈಗೊಂಡಿರುವ ಕ್ರಮ ಮತ್ತು ಅಲ್ಲಿರುವ ಸೌಲಭ್ಯಗಳ ಕುರಿತು ಮಾಹಿತಿ ಪಡೆಯಿತು. ಕುರಿಪಾಳ್ಯ ಪ್ರಾಥಮಿಕ ಆರೋಗ್ಯ ಕೇಂದ್ರದ ಬಳಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಗ್ರಾಮೀಣ ಕ್ರಿಯಾತ್ಮಕ ರಂಗತಂಡದ ಸಹಯೋಗದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಆರೋಗ್ಯ ಅಭಿಯಾನ-2021ರ ಸ್ವಚ್ಛತೆ ಮತ್ತು ಕೊರೋನಾ ಬಗ್ಗೆ ಮುಂಜಾಗ್ರತೆ ಕುರಿತು ಬೀದಿ ನಾಟಕ ಪ್ರದರ್ಶನವನ್ನು ವೀಕ್ಷಿಸಿತು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ್, ಜಿಲ್ಲಾ ಪಂಚಾಯತ್ ಸಿಇಓ ಗಂಗಾಧರಸ್ವಾಮಿ, ಜಿಲ್ಲಾ ಶಸ್ತ್ರ ಚಿಕಿತ್ಸಕ ವೀರಭದ್ರಯ್ಯ, ಆರ್.ಸಿ.ಹೆಚ್ ಅಧಿಕಾರಿ ಡಾ|| ಕೇಶವರಾಜ್, ಜಿಲ್ಲಾ ಮಟ್ಟದ ಆರೋಗ್ಯ ಇಲಾಖೆಯ ಅಧಿಕಾರಿಗಳು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ