ತುಮಕೂರು :
ಕಾಂಗ್ರೆಸ್ನಲ್ಲಿ ಮುಂದಿನ ಸಿಎಂ ಆಕಾಂಕ್ಷಿಗಳ ಪಟ್ಟಿ ಹೆಚ್ಚುತ್ತಿರುವಾಗಲೇ ಜಿಲ್ಲೆಯ ಕಾಂಗ್ರೆಸ್ ನಾಯಕರು ಬಿರುಸಿನ ರಾಜಕೀಯ ಚಟುವಟಿಕೆಗಳಲ್ಲಿ ಭಾಗಿಯಾಗುತ್ತಿರುವುದು ಕಂಡುಬಂದಿದೆ.
ಕಾಂಗ್ರೆಸ್ ಮಾಜಿ ಶಾಸಕ ಹಾಗೂ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೆ.ಎನ್.ರಾಜಣ್ಣ ಅವರು ಮಂಗಳವಾರ ರಾಜಧಾನಿಯಲ್ಲಿ ಅನೇಕ ಕಾಂಗ್ರೆಸ್ ಮುಖಂಡರನ್ನು ಭೇಟಿಯಾಗಿ ಚರ್ಚೆ ನಡೆಸಿರುವುದು ಕುತೂಹಲ ಮೂಡಿಸಿದೆ.
ಮುಂದಿನ ಸಿಎಂ ಪಟ್ಟಕ್ಕಾಗಿ ಪ್ರಮುಖ ರೇಸ್ನಲ್ಲಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಮಾಜಿ ಸಂಸದ ಸಿ.ನಾರಾಯಣಸ್ವಾಮಿ, ಗೌರಿಬಿದನೂರು ಶಾಸಕ ಎನ್.ಎಚ್.ಶಿವಶಂಕರರೆಡ್ಡಿ ಮತ್ತಿತರೊಡಗೂಡಿ ಭೇಟಿಯಾಗಿರುವ ಕೆಎನ್ಆರ್, ಜಿಲ್ಲೆಯ ಹಿರಿಯ ಮುಖಂಡ ಮಾಜಿ ಸಚಿವ ಟಿ.ಬಿ.ಜಯಚಂದ್ರ ಅವರ ಮನೆಗೂ ಭೇಟಿಕೊಟ್ಟು ಮಾತುಕತೆ ನಡೆಸಿದ್ದಾರೆ.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಟಿ.ಬಿ.ಜಯಚಂದ್ರ ಅವರ ಹೆಸರು ಮುಂಚೂಣಿಯಲ್ಲಿದ್ದು, ಜಿಪಂ ತಾಪಂ ಚುನಾವಣೆ ಬಳಿಕ ಎದುರಾಗಲಿರುವ ಸ್ಥಳೀಯ ಸಂಸ್ಥೆಗಳ ವಿಧಾನಪರಿಷತ್ ಚುನಾವಣೆ ಹಾಗೂ ಕಾಂಗ್ರೆಸ್ನಲ್ಲಿ ನಡೆಯುತ್ತಿರುವ ಸಿಎಂ ಹಗ್ಗ ಜಗ್ಗಾಟ ಸಂಬಂಧವೂ ಚರ್ಚೆ ನಡೆಸಿದರೆಂದು ತಿಳಿದುಬಂದಿದೆ.