ಬೆಂಗಳೂರು :
ಅಕ್ಟೋಬರ್ 1 ರಿಂದ ಕೋವಿಡ್ ಪಾಸಿಟಿವಿಟಿ ದರ ಶೇ. 1ಕ್ಕಿಂತ ಕಡಿಮೆ ಇರುವ ಜಿಲ್ಲೆಗಳ ಚಿತ್ರಮಂದಿರಗಳಲ್ಲಿ ಶೇ. 100 ಸೀಟು ಭರ್ತಿಗೆ ಅವಕಾಶ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ರಾಜ್ಯದಲ್ಲಿ ಕೋವಿಡ್ ಸ್ಥಿತಿಗತಿ ಕುರಿತಂತೆ ತಜ್ಞರು ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಪ್ರಸ್ತುತ ಸರಾಸರಿ ಪಾಸಿಟಿವಿಟಿ ದರ 0.66 % ಇದೆ. ಅಕ್ಟೋಬರ್ 1 ರಿಂದ ಕೋವಿಡ್ ಪಾಸಿಟಿವಿಟಿ ದರ ಶೇ. 1ಕ್ಕಿಂತ ಕಡಿಮೆ ಇರುವ ಜಿಲ್ಲೆಗಳಲ್ಲಿ ಶೇ. 100 ಸೀಟು ಭರ್ತಿಗೆ ಅವಕಾಶ ನೀಡಲಾಗುವುದು. ಶೇ. 1ಕ್ಕಿಂತ ಹೆಚ್ಚಾದರೆ ಶೇ. 50 ರಷ್ಟು ಭರ್ತಿಗೆ ಹಾಗೂ ಶೇ. 2 ಕ್ಕಿಂತ ಹೆಚ್ಚಾದರೆ ಚಿತ್ರಮಂದಿರ ಬಂದ್ ಮಾಡಲಾಗುವುದು, ಇದೇ ಮಾನದಂಡ ಅನುಸರಿಸಿ ಅಕ್ಟೋಬರ್ 3 ರಿಂದ ಪಬ್ ಗಳನ್ನು ತೆರೆಯಲಾಗುವುದು ಎಂದು ತಿಳಿಸಿದರು.
ಚಿತ್ರ ಮಂದಿರಗಳಲ್ಲಿ ಕನಿಷ್ಠ ಒಂದು ಡೋಸ್ ಲಸಿಕೆ ಹಾಕಿಸಿಕೊಂಡವರಿಗೆ ಮಾತ್ರ ಪ್ರವೇಶ. ಗರ್ಭಿಣಿ ಮಹಿಳೆಯರು ಮತ್ತು ಮಕ್ಕಳಿಗೆ ಅವಕಾಶ ನೀಡದಿರಲು ತೀರ್ಮಾನಿಸಲಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ