ಬೆಂಗಳೂರು:
ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಶಾಲಾ ಮಕ್ಕಳಲ್ಲಿರುವ ಅಪೌಷ್ಟಿಕತೆ ನಿವಾರಣೆಗಾಗಿ ರಾಜ್ಯದ ಏಳು ಜಿಲ್ಲೆಗಳ ಸರ್ಕಾರಿ ಮತ್ತು ಅನುದಾನಿತ ಪ್ರಾಥಮಿಕ ಮತ್ತು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಧ್ಯಾಹ್ನ ಬಿಸಿಯೂಟದೊಂದಿಗೆ ಬೇಯಿಸಿದ ಮೊಟ್ಟೆ, ಮೊಟ್ಟೆ ಸೇವಿಸದ ಮಕ್ಕಳಿಗೆ ಬಾಳೆ ಹಣ್ಣು ವಿತರಣೆ ಕಾರ್ಯಕ್ರಮದ ಅನುಷ್ಠಾನಕ್ಕಾಗಿ ಸರ್ಕಾರ ಮಾರ್ಗಸೂಚಿ ಹೊರಡಿಸಿದೆ.
ಬೀದರ್, ರಾಯಚೂರು, ಕಲಬುರಗಿ, ಯಾದಗಿರಿ, ಕೊಪ್ಪಳ, ಬಳ್ಳಾರಿ ಹಾಗೂ ವಿಜಯಪುರ ಜಿಲ್ಲೆ ಸೇರಿದಂತೆ ಒಟ್ಟು 7 ಜಿಲ್ಲೆಗಳಲ್ಲಿ ಆರರಿಂದ 15ನೆ ವಯಸ್ಸಿನ ಶಾಲಾ ಮಕ್ಕಳಲ್ಲಿ ಅಪೌಷ್ಟಿಕತೆ, ರಕ್ತಹೀನತೆ ಹಾಗೂ ಪೋಷಕಾಂಶಗಳ ನ್ಯೂನತೆ ಇರುವುದು ಅಧ್ಯಯನದಿಂದ ಕಂಡುಬಂದಿದೆ, ಇದರ ನಿವಾರಣೆಗಾಗಿ ಒಟ್ಟು 14 ಲಕ್ಷದ 44 ಸಾವಿರದ 322 ಶಾಲಾ ಮಕ್ಕಳಿಗೆ ಮಧ್ಯಾಹ್ನ ಬಿಸಿಯೂಟದೊಂದಿಗೆ ಒಬ್ಬ ವಿದ್ಯಾರ್ಥಿಗೆ ಪ್ರತಿ ಮಾಹೆಗೆ 12 ಮೊಟ್ಟೆ, ಮೊಟ್ಟೆ ಸೇವಿಸದ ವಿದ್ಯಾರ್ಥಿಗಳಿಗೆ ಬಾಳೆಹಣ್ಣು ವಿತರಿಸಲು ಕ್ರಮ ಕೈಗೊಳ್ಳಲು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಶಿಕ್ಷಣಾಧಿಕಾರಿಗಳಿಗೆ ಸೂಚಿಸಲಾಗಿದೆ. ಶಾಲಾ ಹಂತದಲ್ಲಿ ಮೊಟ್ಟೆ ಮತ್ತು ಬಾಳೆಹಣ್ಣಿನ ಖರೀದಿ ಮತ್ತು ವಿತರಣೆ ಪ್ರಕ್ರಿಯೆಗೆ ಮಾರ್ಗದರ್ಶನ ನೀಡಲು ಖರೀದಿ ಸಮಿತಿ ರಚಿಸಿಕೊಳ್ಳುವಂತೆ ಸೂಚನೆ ನೀಡಲಾಗಿದೆ. ಆಯಾ ಜಿಲ್ಲೆಗಳಲ್ಲಿ ಸೂಕ್ತ ಮೇಲ್ವಿಚಾರಣೆಯೊಂದಿಗೆ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ಆದೇಶ ಹೊರಡಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
