ಶಿವಮೊಗ್ಗ:
ಸೋಮವಾರ ಬೆಳಗ್ಗೆ ಘಟನೆ ಕುರಿತು ಮಾತನಾಡಿದ ಅವರು, “ಕರ್ನಾಟಕ ಸರ್ಕಾರವು ಪರಿಸ್ಥಿತಿಯನ್ನು ಹತೋಟಿಗೆ ತರುವುದಕ್ಕಾಗಿ ಶತಾಯಗತಾಯ ಪ್ರಯತ್ನಿಸುತ್ತಿದೆ. ಆದರೆ ಕೆಲವು ಗುಂಪುಗಳು ಜನರಿಗೆ ಪ್ರಚೋದನೆ ನೀಡುವ ಕೆಲಸವನ್ನು ಮಾಡುತ್ತಿವೆ,” ಎಂದು ಆರೋಪಿಸಿದ್ದಾರೆ.
ಶಿವಮೊಗ್ಗ ನಗರದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಹರ್ಷ ಎಂಬ ಯುವಕನ ಹತ್ಯೆ ಮಾಡಲಾಗಿದ್ದು, ಇದರಿಂದ ನಗರದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ನಗರದಲ್ಲಿ ಸೆಕ್ಷನ್ 144 ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಏನಿದು ಶಿವಮೊಗ್ಗದಲ್ಲಿ ನಡೆದ ಹರ್ಷ ಹತ್ಯೆ?:
ಶಿವಮೊಗ್ಗ ನಗರದ ಎನ್.ಟಿ. ರಸ್ತೆಯ ಕಾಮತ್ ಪೆಟ್ರೋಲ್ ಬಂಕ್ ಸಮೀಪದ ಭಾರತೀ ಕಾಲೋನಿಯಲ್ಲಿ ಭಾನುವಾರ ರಾತ್ರಿ ಯುವಕರ ಗುಂಪೊಂದು ಭಜರಂಗ ದಳ ಕಾರ್ಯಕರ್ತ ಹರ್ಷನ ಮೇಲೆ ಏಕಾಏಕಿ ದಾಳಿ ನಡೆಸಿದೆ.
ಮಾರಕಾಸ್ತ್ರಗಳಿಂದ ನಡೆಸಿದ ಹಲ್ಲೆಯಿಂದಾಗಿ ಹೊಟ್ಟೆ, ತಲೆ ಭಾಗಕ್ಕೆ ಗಂಭೀರ ಗಾಯಗಳಾಗಿದ್ದು, ರಕ್ತದ ಮಡುವಿನಲ್ಲಿ ಬಿದ್ದ ಹರ್ಷನನ್ನು ತಕ್ಷಣ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಯಿತು. ಆದರೆ ಚಿಕಿತ್ಸೆ ಫಲಿಸದೇ 22 ವರ್ಷದ ಹರ್ಷ ಮೃತಪಟ್ಟಿದ್ದಾನೆ.
ಶಿವಮೊಗ್ಗದಲ್ಲಿ ಬಿಗುವಿನ ವಾತಾವರಣ ನಿರ್ಮಾಣ:
ಕಳೆದ ಐದು ವರ್ಷಗಳಿಂದ ಭಜರಂಗ ದಳದಲ್ಲಿ ಗುರುತಿಸಿಕೊಂಡಿದ್ದ ಹರ್ಷ ಹತ್ಯೆಗೆ ಸಂಘಟನೆ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಿವಮೊಗ್ಗದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು,
ರಾತ್ರೋರಾತ್ರಿ ಪೂರ್ವ ವಲಯದ ಐಜಿಪಿ ತ್ಯಾಗರಾಜನ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಗರದಾದ್ಯಂತ ಅಂಗಡಿ, ಹೋಟೆಲ್ ಬಂದ್ ಮಾಡಿಸಲಾಗಿದ್ದು, ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಫೆಬ್ರವರಿ 23 ರಾತ್ರಿ 9 ಗಂಟೆವರೆಗೂ ನಗರದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಈ ಅವಧಿಯಲ್ಲಿ ಜನರು ಗುಂಪುಗೂಡಲು ಅವಕಾಶವಿಲ್ಲ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆದೇಶ ಹೊರಡಿಸಿದ್ದಾರೆ.