ಹಿಜಾಬ್​ ಬ್ಯಾನ್​: ಸಿಜೆ ಅವರು ಓದಿದ 129 ಪುಟಗಳ ತೀರ್ಪಿನ ಪ್ರಮುಖ ಅಂಶ ಇಲ್ಲಿದೆ

ಬೆಂಗಳೂರು: 

ಹಿಜಾಬ್ ಧರಿಸುವುದು ಇಸ್ಲಾಂನ ಅತ್ಯಗತ್ಯ ಧಾರ್ಮಿಕ ಆಚರಣೆಯ ಭಾಗವಲ್ಲ ಎಂದು ಮಹತ್ವದ ತೀರ್ಪು ನೀಡಿರುವ ಹೈಕೋರ್ಟ್, ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿರ್ಬಂಧ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಎಲ್ಲ ಅರ್ಜಿಗಳನ್ನೂ ವಜಾಗೊಳಿಸಿದೆ.

ಹೈಕೋರ್ಟ್‌ನ ಈ ತೀರ್ಪಿನಿಂದ ರಾಜ್ಯದಲ್ಲಿ ಕಳೆದ ಒಂದೂವರೆ ತಿಂಗಳಿಂದ ಎದ್ದಿದ್ದ ವಿವಾದವೊಂದಕ್ಕೆ ತಾರ್ಕಿಕ ಅಂತ್ಯ ಸಿಕ್ಕಂತಾಗಿದೆ. ಹಿಜಾಬ್ ನಿರ್ಬಂಧ ಪ್ರಶ್ನಿಸಿ ಉಡುಪಿಯ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನ ಕೆಲ ಮುಸ್ಲಿಂ ವಿದ್ಯಾರ್ಥಿನಿಯರು ಹಾಗೂ ಮತ್ತಿತರರು ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ಪೂರ್ಣಗೊಳಿಸಿ ಕಾಯ್ದಿರಿಸಿದ್ದ ತೀರ್ಪನ್ನು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ, ನ್ಯಾಯಮೂರ್ತಿಗಳಾದ ಕೃಷ್ಣ ಎಸ್. ದೀಕ್ಷಿತ್ ಹಾಗೂ ಖಾಜಿ ಜೈಬುನ್ನಿಸಾ ಮೊಹಿದ್ದೀನ್ ಅವರಿದ್ದ ಪೀಠ ಮಂಗಳವಾರ ಪ್ರಕಟಿಸಿತು. 129 ಪುಟಗಳ ತೀರ್ಪಿನ ಪ್ರಮುಖ ಅಂಶಗಳನ್ನು ಮುಖ್ಯ ನ್ಯಾಯಮೂರ್ತಿಗಳು ಓದಿದರು.

ಇಡೀ ಪ್ರಕರಣದ ಸೂಕ್ಷ್ಮತೆಯನ್ನು ಗಮನದಲ್ಲಿಟ್ಟುಕೊಂಡು ಕೆಲ ಪ್ರಶ್ನೆಗಳನ್ನು ರೂಪಿಸಿ ಅವುಗಳಿಗೆ ಉತ್ತರಿಸಿದ್ದೇವೆ.

1. ಇಸ್ಲಾಂನಲ್ಲಿ ಹಿಜಾಬ್ ಧರಿಸುವುದು ಅಗತ್ಯ ಧಾರ್ಮಿಕ ಆಚರಣೆಯೇ, ಅದಕ್ಕೆ ಸಂವಿಧಾನದ ಪರಿಚ್ಛೇದ 25ರ ಅಡಿ ರಕ್ಷಣೆ ಇದೆಯೇ?
2. ಸಮವಸ್ತ್ರ ನಿಗದಿಯಿಂದ ಅರ್ಜಿದಾರ ವಿದ್ಯಾರ್ಥಿನಿಯರ ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಖಾಸಗಿತನದ ಹಕ್ಕಿನ ಉಲ್ಲಂಘನೆಯಾಗಿದೆಯೇ?
3. ಸಮವಸ್ತ್ರ ಸಂಹಿತೆ ನಿಗದಿ ವಿಚಾರದಲ್ಲಿ ರಾಜ್ಯ ಸರ್ಕಾರ 2022ರ ಫೆ.5ರಂದು ಹೊರಡಿಸಿರುವ ಆದೇಶ ವಿವೇಚನಾರಹಿತ ಆಗಿದೆಯೇ?

ಉತ್ತರಗಳು
1. ಮುಸ್ಲಿಂ ಮಹಿಳೆಯರು ಹಿಜಾಬ್​ ಧರಿಸುವುದು ಇಸ್ಲಾಂನ ಅತ್ಯಗತ್ಯ ಧಾರ್ಮಿಕ ಆಚರಣೆಯಲ್ಲ.
2. ಸಮವಸ್ತ್ರ ಸೂಚಿಸಿರುವುದು ಒಂದು ಸಮಂಜಸವಾದ ನಿರ್ಬಂಧವಾಗಿದ್ದು, ವಿದ್ಯಾರ್ಥಿಗಳು ಅದನ್ನು ಆಕ್ಷೇಪಿಸುವಂತಿಲ್ಲ.
3. ಆದೇಶ ಮಾಡಲು ಸರ್ಕಾರಕ್ಕೆ ಅಧಿಕಾರವಿದೆ. ಆ ಆದೇಶವನ್ನು ಅಸಿಂಧುಗೊಳಿಸಬಹುದಾದ ಯಾವುದೇ ಅಂಶಗಳನ್ನು‌ ನ್ಯಾಯಾಲಯಕ್ಕೆ ಮನವರಿಕೆ ಮಾಡಿಕೊಡಲಾಗಿಲ್ಲ.

ಈ ಹಿನ್ನೆಲೆಯಲ್ಲಿ ಅರ್ಜಿಗಳನ್ನು ವಜಾಗೊಳಿಸಲಾಗುತ್ತಿದೆ ಎಂದು ಹೈಕೋರ್ಟ್ ತೀರ್ಪಿನಲ್ಲಿ ಹೇಳಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link