ಪೌರ ಕಾರ್ಮಿಕರ ಬೇಡಿಕೆ ಈಡೇರಿಸಲು ಸರ್ಕಾರ ಬದ್ದ : ಸಚಿವ ಎಂಟಿಬಿ ನಾಗರಾಜ್

ಅನಿರ್ದಿಷ್ಟಾವಧಿ ಮುಷ್ಕರವನ್ನು ಕೈ ಬಿಡಲು ಸಚಿವ ಎಂಟಿಬಿ ನಾಗರಾಜ್ ಮನವಿ

ಬೆಂಗಳೂರು: ಆರ್ಥಿಕ ಇಲಾಖೆ ಅನುಮೋದನೆ ನೀಡಿರುವ 5300 ಮಂದಿ ಪೌರ ಕಾರ್ಮಿಕರ ಹುದ್ದೆಯನ್ನು ಭರ್ತಿ ಮಾಡಲಾಗುವುದು ಹಾಗೂ ನೇರ ಪಾವತಿ ವೇತನ ಪಡೆಯುತ್ತಿರುವ ಪೌರ ಕಾರ್ಮಿಕರ ಸೇವೆಯನ್ನು ಮುಂದಿನ 3 ವರ್ಷಗಳಲ್ಲಿ ಹಂತ ಹಂತವಾಗಿ ಖಾಯಂಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಪೌರಾಡಳಿತ ಮತ್ತು ಸಣ್ಣ ಕೈಗಾರಿಕೆ ಸಚಿವ ಎಂಟಿಬಿ ನಾಗರಾಜ್ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ನಗರಾಭಿವೃದ್ಧಿ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆ ನಡೆಸಿ ಸಚಿವ ಎಂಟಿಬಿ ನಾಗರಾಜ್ ಮಾತನಾಡಿದರು, ಸರ್ಕಾರ ಪೌರ ಕಾರ್ಮಿಕರ ಪರ ಸಹಾನುಭೂತಿ ಹೊಂದಿದ್ದು, ಅವರ ಬೇಡಿಕೆಗಳನ್ನು ಈಡೇರಿಸಲು ಬದ್ದವಾಗಿದೆ. ಹಾಗಾಗಿ, ಪೌರ ಕಾರ್ಮಿಕ ಸಂಘಟನೆಗಳು ಜುಲೈ 1 ರಿಂದ ಕರೆ ನೀಡಿರುವ ಅನಿರ್ದಿಷ್ಟಾವಧಿ ಮುಷ್ಕರವನ್ನು ಕೈಬಿಡುವಂತೆ ಮನವಿ ಮಾಡಿದರು.

ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್ ರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನಿರ್ಣಯಿಸಿರುವಂತೆ ಪೌರಾಡಳಿತ ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ನೇರ ಪಾವತಿ ವೇತನ ಪಡೆಯುತ್ತಿರುವ ಪೌರ ಕಾರ್ಮಿಕ ಸೇವೆಯನ್ನು ಮುಂದಿನ 3 ವರ್ಷಗಳ ಅವಧಿಯಲ್ಲಿ ಹಂತ ಹಂತವಾಗಿ ಖಾಯಂಗೊಳಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಆರ್ಥಿಕ ಇಲಾಖೆಯು ಈಗಾಗಲೇ 5300 ಪೌರ ಕಾರ್ಮಿಕರ ನೇಮಕಾತಿಗೆ ಅನುಮೋದನೆ ನೀಡಿರುವ ಹಿನ್ನೆಲೆಯಲ್ಲಿ ನೇಮಕಾತಿ ಪ್ರಕ್ರಿಯೆ ಆರಂಭಿಸುವಂತೆ ಸಚಿವರು ಸೂಚಿಸಿದರು.

ಪೌರ ಕಾರ್ಮಿಕರು ಮತ್ತು ಸ್ವಚ್ಛತಾ ನೌಕರರ ಆರೋಗ್ಯವನ್ನು ಗಮನದಲ್ಲಿರಿಸಿಕೊಂಡು ಪ್ರಸ್ತುತ ಜಾರಿಯಲ್ಲಿರುವ ಆರೋಗ್ಯ ವಿಮೆ ಸೌಲಭ್ಯವನ್ನು ಎಲ್ಲಾ ಪೌರ ಕಾರ್ಮಿಕರು ಮತ್ತು ಸ್ವಚ್ಛತಾ ನೌಕರರಿಗೂ ಅನ್ವಯವಾಗುವಂತೆ ವಿಸ್ತರಿಸುವ ಬಗ್ಗೆ ಕೂಡಲೇ ಕ್ರಮಕೈಗೊಳ್ಳುವಂತೆ ಸಚಿವ ಎಂಟಿಬಿ ನಾಗರಾಜ್ ರವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

2018 ರಲ್ಲಿ ರಚಿಸಲಾಗಿರುವ ಪೌರ ಕಾರ್ಮಿಕರ ನೇಮಕಾತಿ ವಿಶೇಷ ನಿಯಮಾವಳಿಗಳನ್ನು ಪುನರ್ ಪರಿಶೀಲಿಸಲು ಅನುಕೂಲವಾಗುವಂತೆ ಈಗಾಗಲೇ ಕರ್ತವ್ಯದಲ್ಲಿರುವ ಪೌರಕಾರ್ಮಿಕರು ಮತ್ತು ಸ್ವಚ್ಛತಾ ಕಾರ್ಮಿಕರ ಸೇವಾ ವಿವರಗಳನ್ನು ಒಂದು ವಾರದ ಒಳಗಾಗಿ ಸಂಗ್ರಹಿಸಿ ಅಗತ್ಯ ಶಿಫಾರಸ್ಸುಗಳೊಂದಿಗೆ ಕಡತ ಮಂಡಿಸಲು ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಅಲ್ಲದೆ, ಪೌರ ಕಾರ್ಮಿಕರ ಇನ್ನುಳಿದ ಯಾವುದೇ ಸಮಸ್ಯೆಗಳಿದ್ದರೂ ಅವುಗಳನ್ನು ಬಗೆಹರಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಆದೇಶವನ್ನು ನೀಡಿದ್ದಾರೆ

ಈ ಸಭೆಯಲ್ಲಿ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ಡಾ. ಅಜಯ್ ನಾಗಭೂಷಣ್, ಪೌರಾಡಳಿತ ಇಲಾಖೆ ನಿರ್ದೇಶಕಿ ಶ್ರೀಮತಿ ಅರ್ಚನ, ಜಂಟಿ ನಿರ್ದೇಶಕ ಶಿವಸ್ವಾಮಿ ಪಾಲ್ಗೊಂಡಿದ್ದರು.

Recent Articles

spot_img

Related Stories

Share via
Copy link