ಗಂಟೆಯಲ್ಲಿ ವಾಡಿಕೆಗಿಂತ ಹೆಚ್ಚು ಮಳೆ :
ಬೆಂಗಳೂರು: ರಾಜ್ಯದಲ್ಲಿ ಮುಂಗಾರಿನ ಆರ್ಭಟ ತೀವ್ರಗೊಂಡಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯದ 25 ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಜೊತೆಗೆ ರಾಜ್ಯದ ಕರಾವಳಿ ಮತ್ತು ಪಶ್ಚಿಮ ಘಟ್ಟದ ತಪ್ಪಲಿನ ಜಿಲ್ಲೆಗಳಲ್ಲಿ ವರುಣನ ಆರ್ಭಟ ಮುಂದುವರಿಯಲಿದೆ. ಉಳಿದಂತೆ ಒಳನಾಡಿನ ಜಿಲ್ಲೆಗಳಲ್ಲೂ ಮುಂಗಾರು ಚುರುಕಾಗಿರುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮುನ್ನೆಚ್ಚರಿಕೆ :
ಕರಾವಳಿಯ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಮಲೆನಾಡಿನ ಶಿವಮೊಗ್ಗ, ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಬಾರೀ ಮಳೆಯಾಗಲಿದ್ದು ಆರೆಂಜ್ ಅಲರ್ಟ್ ನೀಡಲಾಗಿದೆ. ಮಲೆನಾಡಿನ ಹಾಸನ ಮತ್ತು ಉತ್ತರ ಒಳನಾಡಿನ ಹಾವೇರಿ, ಗದಗ, ಬಾಗಲಕೋಟೆ ಮತ್ತು ಬೆಳಗಾವಿ ಜಿಲ್ಲೆಗೆ ಭಾರಿ ಮಳೆಯ ಯೆಲ್ಲೊ? ಅಲರ್ಚ್ ನೀಡಲಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಮುಂದುವರಿಯಲಿದ್ದು ಮಲೆನಾಡಿನ ಎಲ್ಲ ಜಿಲ್ಲೆಗಳು, ಉತ್ತರ ಒಳನಾಡಿನ ಹಾವೇರಿ, ಧಾರವಾಡ, ಬೆಳಗಾವಿ, ಗದಗ, ಬೀದರ್ ಮತ್ತು ಕಲಬುರಗಿ ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ಪ್ರಕಟಿಸಲಾಗಿದೆ.
ಮುಂಗಾರು ತೀವ್ರ:
ಕಳೆದ ಕೆಲ ದಿನಗಳಿಂದ ರಾಜ್ಯದ ಕರಾವಳಿ ಮತ್ತು ಮಲೆನಾಡಿನ ಜಿಲ್ಲೆಗಳನ್ನು ಕೇಂದ್ರಿಕರಿಸಿದ್ದ ಮುಂಗಾರು ಇದೀಗ ರಾಜ್ಯಾದ್ಯಂತ ವಿಸ್ತರಣೆಗೊಂಡಿದೆ. ರಾಜ್ಯದ ಶೇ.73 ಗ್ರಾಮ ಪಂಚಾಯಿತಿಗಳ ಮಳೆ ಮಾಪನ ಕೇಂದ್ರಗಳಲ್ಲಿ ಕಾಲು ಸೆಂ.ಮೀಗಿಂತ ಹೆಚ್ಚು ಮಳೆ ದಾಖಲಾಗಿದೆ. ರಾಜ್ಯದ 25 ಜಿಲ್ಲೆಯಲ್ಲಿ ವಾಡಿಕೆಗಿಂತ ಹೆಚ್ಚು ಮಳೆ ದಾಖಲಾಗಿದೆ. ದಕ್ಷಿಣ ಒಳನಾಡಿನ ಬೆಂಗಳೂರು ನಗರ ಮತ್ತು ಗ್ರಾಮಾಂತರ, ಕೋಲಾರ, ಮಂಡ್ಯ, ಚಾಮರಾಜನಗರ ಮತ್ತು ರಾಮನಗರ ಜಿಲ್ಲೆಯಲ್ಲಿ ಮಾತ್ರ ವಾಡಿಕೆಗಿಂತ ಕಡಿಮೆ ಮಳೆಯಾಗಿದೆ.
ಮಳೆ ಹಾನಿ ಪ್ರದೇಶಕ್ಕೆ ಸಚಿವ ಅಶೋಕ್ ಭೇಟಿ : ಕಂದಾಯ ಸಚಿವರಾದ ಆರ್.ಅಶೋಕ್ ಅವರು ಮಡಿಕೇರಿ-ಮಂಗಳೂರು ರಸ್ತೆಯ ವಿವಿಧೆಡೆ ಸಂಭವಿಸಿರುವ ಭೂಕುಸಿತ ಹಾಗೂ ಭೂಕಂಪನ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.
ಮಡಿಕೇರಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಕರ್ತೋಜಿ ಎಂಬಲ್ಲಿ ಉಂಟಾಗಿರುವ ಭೂಕುಸಿತ ಪ್ರದೇಶಕ್ಕೆ ಭೇಟಿ ನೀಡಿ ವೀಕ್ಷಿಸಿದ ಅವರು, ಸಂಪಾಜೆ, ಚೆಂಬು ಗ್ರಾಮಗಳಲ್ಲಿನ ಮನೆ ಹಾನಿ ಹಾಗೂ ಭೂ ಕುಸಿತ ವೀಕ್ಷಣೆ ಮಾಡಿ ಗ್ರಾಮಸ್ಥರೊಂದಿಗೆ ಚರ್ಚೆ ನಡೆಸಿದರು. ಭೂಕಂಪನ ಮಾಪನ ಅಳವಡಿಸಿರುವ ಶಾಲೆಗೂ ಭೇಟಿ ನೀಡಿ ಪರಿಶೀಲಿಸಿದರು, ಭೂಕಂಪನದ ಅಧ್ಯಯನ ನಡೆಸಲು ರಾಜ್ಯದಿಂದ ಆಗಮಿಸಿರುವ ವೈಜ್ಞಾನಿಕ ಸಮಿತಿಯೊಂದಿಗೂ ಚರ್ಚಿಸಿದರು. ಶಾಸಕ ಕೆ.ಜಿ.ಬೋಪಯ್ಯ, ರಾಜ್ಯ ಪಶ್ಚಿಮಘಟ್ಟ ಸಂರಕ್ಷಣಾ ಕಾರ್ಯಪಡೆ ಸಮಿತಿ ಅಧ್ಯಕ್ಷ ರವಿ ಕುಶಾಲಪ್ಪ, ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಮತ್ತಿತರರು ಇದ್ದರು.
ರಾಜ್ಯಾದ್ಯಂತ ಇದೇ ಪರಿಸ್ಥಿತಿ : 25 ಜಿಲ್ಲೆಗಳಲ್ಲಿ ಮೊಡ ಕವಿದ ವಾತಾವರಣ ಹಾಗೂ ಕೆಲವೊಂದು ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಿದ್ದು ಜನ ಜೀವನ ಅಸ್ತವ್ಯಸ್ತವಾಗಿದೆ, ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆಯಂತೆ ಇನ್ನೂ ನಾಲ್ಕೈದು ದಿನಗಳು ಮಳೆಯಾಗಲಿದೆ ಎಂಬ ಮಾಹಿತಿ ನೀಡಿದ್ದಾರೆ, ಈಗಾಗಲೇ ಅತಿ ಹೆಚ್ಚು ಮಳೆಯಾಗಿದ್ದು ತಗ್ಗು ಪ್ರದೇಶಗಳಿಗೆ ಮಳೆ ನೀರು ನುಗ್ಗಿ ಅವಾಂತರ ಸೃಷ್ಟಿಸಿದೆ. ಗುಡ್ಡ ಕುಸಿತ, ಹೋಟಲ್ ಮೇಲೆ ಮರ ಬಿದ್ದು 3ಜನರಿಗೆ ಗಾಯ, ನದಿ ಸರೋವರಗಳು, ಝರಿಗಳಲ್ಲಿ ಪ್ರವಾಹದ ಭೀತಿ ಹೆಚ್ಚಾಗಿದೆ, ಸಾರ್ವಜನಿಕರು ತಮ್ಮ ಆಸ್ತಿ ಪಾಸ್ತಿ ಹಾಗೂ ಜನ ಜಾನುವಾರಗಳ ರಕ್ಷಣೆಗೆ ಎಚ್ಚರಿಕೆ ವಹಿಸಿ ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಂಡು ಸರಕ್ಷಿತ ಸ್ಥಳಗಳಿಗೆ ತೆರಳಬೇಕು ಎಂದು ಸ್ಥಳೀಯ ಅಧಿಕಾರಿಗಳು ಸೂಚನೆ ನೀಡಿದ್ದಾರೆ.
ಪ್ರಮುಖ ಅಂಶಗಳು
ರಾಜ್ಯದ 25 ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆ
ಇನ್ನೂ ಎರಡು ಮೂರು ದಿನ ವರುಣನ ಆರ್ಭಟ ಮುಂದುವರಿಯಲಿದೆ