ಬೆಂಗಳೂರು : ರಾಜ್ಯದಲ್ಲಿ ಮಂಕಿಪಾಕ್ಸ್ ಹರಡದಂತೆ ಅಗತ್ಯವಿರುವ ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದರು.
ಅವರು ಮಂಗಳವಾರ ಮಂಕಿಪಾಕ್ಸ್ ಕುರಿತಂತೆ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಸಿದರು.
ಸಭೆಯಲ್ಲಿ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ನೀಡಿದ ಸೂಚನೆಗಳು
- ದೇಶದಲ್ಲಿ ಆರು ಮಂಕಿಪಾಕ್ಸ್ ಪ್ರಕರಣಗಳು ವರದಿಯಾಗಿದ್ದು, ರಾಜ್ಯದ ವಿಮಾನನಿಲ್ದಾಣಗಳಲ್ಲಿ ಸೋಂಕಿತರ ಪರೀಕ್ಷೆಗೆ ಸೂಕ್ತ ಕ್ರಮ ವಹಿಸಬೇಕು.
- ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಮಾರ್ಗಸೂಚಿಯಂತೆ ಸೋಂಕು ಧೃಢಪಟ್ಟ ವ್ಯಕ್ತಿಗಳನ್ನು 21 ದಿನಗಳ ಕ್ವಾರಂಟೈನ್ ಮಾಡುವುದು ಸೇರಿದಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕೆಂದು ಮುಖ್ಯಮಂತ್ರಿಗಳು ಸೂಚಿಸಿದರು.
- ಸೋಂಕಿಗೆ ಸಂಬಂಧಿಸಿದಂತೆ ಚಿಕಿತ್ಸೆ ನೀಡಬಹುದಾದ ಖಾಸಗಿ ಸಂಸ್ಥೆಗಳನ್ನು ಗುರುತಿಸಬೇಕು
- ವೈದ್ಯಕೀಯ ಹಾಗೂ ಅರೆ ವೈದ್ಯಕೀಯ ಸಿಬ್ಬಂದಿಗೆ ಸೂಕ್ತ ತರಬೇತಿ ನೀಡುವಂತೆ ಸೂಚಿಸಿದರು.
- ಮಂಕಿಪಾಕ್ಸ್ ಸೋಂಕಿನ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ವ್ಯಾಪಕವಾಗಿ ಪ್ರಚಾರ ಕಾರ್ಯ ಕೈಗೊಳ್ಳುವುದು.
ರಾಜ್ಯದ ಮೂವರು ವ್ಯಕ್ತಿಗಳ ಪೈಕಿ ಇಬ್ಬರು ವ್ಯಕ್ತಿಗಳ ಪರೀಕ್ಷಾ ವರದಿ ನೆಗೆಟಿವ್ ಇದೆ. ಬೆಲ್ಜಿಯಂ ನಿಂದ ಪ್ರಯಾಣ ಮಾಡಿದ್ದ ಉತ್ತರ ಕನ್ನಡ ಜಿಲ್ಲೆಯ ವ್ಯಕ್ತಿಯ ಪರೀಕ್ಷಾ ವರದಿ ಇನ್ನೂ ಬರಬೇಕಿದೆ. ಬೆಂಗಳೂರಿನ ಇಡಿ ಆಸ್ಪತ್ರೆ ಹಾಗೂ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯನ್ನು ಕ್ವಾರಂಟೈನ್ ಗಾಗಿ ಗುರುತಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.
ಸಭೆಯಲ್ಲಿ ಆರೋಗ್ಯ ಸಚಿವ ಡಾ: ಕೆ.ಸುಧಾಕರ್, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಆರೋಗ್ಯ ಇಲಾಖೆ ಆಯುಕ್ತ ಡಿ.ರಂದೀಪ್, ರಾಷ್ಟ್ರೀಯ ಆರೋಗ್ಯ ಮಿಷನ್ ನಿರ್ದೇಶಕಿ ಡಾ:ಅರುಂಧತಿ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್, ಮುಖ್ಯ ಮಂತ್ರಿಗಳ ಕಾರ್ಯದರ್ಶಿ ಶ್ರೀಕರ್, ಆರೋಗ್ಯ ಟಾಸ್ಕ್ ಫೋರ್ಸ್ ಅಧ್ಯಕ್ಷ ಡಾ: ಸುದರ್ಶನ್ ಮೊದಲಾದವರು ಉಪಸ್ಥಿತರಿದ್ದರು.