ಬೆಂಗಳೂರು :
ಗೃಹಜ್ಯೋತಿ ಹಾಗೂ ಗೃಹಲಕ್ಷ್ಮಿ ಯೋಜನೆ ಕುರಿತ ಕಾಂಗ್ರೆಸ್ ಗ್ಯಾರಂಟಿ ಕೋಟಿ ಕಾರ್ಡ್ಗಳು ಮನೆ, ಮನೆ ತಲುಪಲು ಸಜ್ಜಾಗಿವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಅವರು, ಬೆಲೆ ಏರಿಕೆಯಿಂದ ಸಂಕಷ್ಟದಲ್ಲಿರುವ ಜನರಿಗೆ ನೆರವಾಗುವ ಉದ್ದೇಶದಿಂದ ಕಾಂಗ್ರೆಸ್ ಪಕ್ಷ ಎರಡು ಐತಿಹಾಸಿಕ ಗ್ಯಾರಂಟಿ ಯೋಜನೆ ಘೋಷಿಸಿದ್ದೇವೆ. ಗೃಹಜ್ಯೋತಿ ಯೋಜನೆ ಮೂಲಕ 200 ಯುನಿಟ್ ವಿದ್ಯುತ್ ಉಚಿತ, ಗೃಹಲಕ್ಷಿ ಯೋಜನೆ ಮೂಲಕ ಪ್ರತಿ ಮನೆ ಯಜಮಾನಿಗೆ 2000 ರೂ. ಪ್ರತಿ ತಿಂಗಳು ಕೊಡಲು ಪಕ್ಷ ತೀರ್ಮಾನಿಸಿದೆ ಎಂದರು.
ಈ ಯೋಜನೆಗಳ ಮೂಲಕ ವರ್ಷಕ್ಕೆ ಒಟ್ಟು 24 ಸಾವಿರದಂತೆ 5 ವರ್ಷಕ್ಕೆ 1.20 ಲಕ್ಷವನ್ನು ಜನರಿಗೆ ನೀಡಲಾಗುವುದು. ಈ ಕುರಿತು ನಾನು ಹಾಗೂ ಸಿದ್ದರಾಮಯ್ಯ ಸಹಿ ಹಾಕಿರೋ ಗ್ಯಾರಂಟಿ ಕಾರ್ಡ್ ಅನ್ನು ಪಕ್ಷದ ಎಲ್ಲಾ ಬ್ಲಾಕ್ ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಕೆಪಿಸಿಸಿ ಕಚೇರಿಯಲ್ಲಿ ಪಡೆದು, ನಿಮ್ಮ ಕ್ಷೇತ್ರದಲ್ಲಿ ಪ್ರತಿ ಬೂತ್‌ನ ಮನೆ ಮನೆಗೂ ನೀಡಬೇಕು.
ಈ ಗ್ಯಾರಂಟಿ ಕಾರ್ಡ್ ಅನ್ನು ಜನರಿಗೆ ನೀಡಿ ನಮ್ಮ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿ, ಯಾರಿಗೆಲ್ಲ ಈ ಯೋಜನೆ ಬಗ್ಗೆ ಆಸಕ್ತಿ ಇದೆ ಎಂದು ಅವರ ವಿವರ ಪಡೆಯಬೇಕು. ಈ ಸಮಯದಲ್ಲಿ ಮನೆ ಮನೆಗೆ ಹೋಗಿ ಕಾರ್ಡ್ ನೀಡುವ ನೋಂದಣಿದಾರರ ಹೆಸರು, ದೂರವಾಣಿ ಸಂಖ್ಯೆಯನ್ನು ಕೊಡಬೇಕು ಎಂದರು.
ಪ್ರತಿ ಬ್ಲಾಕ್ ಹಾಗೂ ವಿಧಾನಸಭಾ ಕ್ಷೇತ್ರಗಳಲ್ಲಿ ಯಾರು ಹೆಚ್ಚು ಮನೆಗಳಿಗೆ ಈ ಕಾರ್ಡ್ ವಿತರಣೆ ಮಾಡುತ್ತಾರೋ ಅವರಿಗೆ ಆಯಾ ಬ್ಲಾಕ್ ಕಾಂಗ್ರೆಸ್ ವತಿಯಿಂದ ಬಹುಮಾನ ನೀಡಬೇಕು. ಈ ಅವಕಾಶವನ್ನು ಬಳಸಿಕೊಂಡು ಜನರಿಗೆ ಕಾಂಗ್ರೆಸ್ ಕೊಡುಗೆಯನ್ನು ಜನರಿಗೆ ತಲುಪಿಸಬೇಕು. ಒಟ್ಟು 1 ಕೋಟಿ ಕಾರ್ಡ್ಗಳನ್ನು ಮನೆಗಳಿಗೆ ಕಳುಹಿಸಿಕೊಡಬೇಕು ಎಂದು ನಾನು ಎಲ್ಲಾ ಕಾರ್ಯಕರ್ತರು ಹಾಗೂ ನಾಯಕರಲ್ಲಿ ಈ ಮೂಲಕ ಮನವಿ ಮಾಡಿಕೊಳ್ಳುತ್ತೇನೆ ಎಂದು ಡಿ.ಕೆ. ಶಿವಕುಮಾರ್ ಹೇಳಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
