ಬೆಂಗಳೂರು
ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ರಾಜ್ಯಕ್ಕೆ ಆಗಮಿಸಲು ಸಜ್ಜಾಗಿರುವ ನಡುವಲ್ಲೇ ಆಮ್ ಆದ್ಮಿ ಪಕ್ಷದ ಉಪಾಧ್ಯಕ್ಷ ಭಾಸ್ಕರ್ ರಾವ್ ಅವರು ಶಾಕ್ ನೀಡಿದ್ದು, ಪಕ್ಷ ತೊರೆದು ಬುಧವಾರ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.
ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಸಮ್ಮುಖದಲ್ಲಿ ಭಾಸ್ಕರ್ ರಾವ್ ಅವರು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.
ಕಳೆದ ವರ್ಷ ಏಪ್ರಿಲ್ ತಿಂಗಳಿನಲ್ಲಿ ಪೊಲೀಸ್ ಅಧಿಕಾರಿ ಹುದ್ದೆಗೆ ರಾಜೀನಾಮೆ ನೀಡಿ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದ ಭಾಸ್ಕರ್ ರಾವ್ ಅವರನ್ನು ಇತ್ತೀಚೆಗೆ ಪಕ್ಷದ ಪ್ರಣಾಳಿಕೆ ಸಮಿತಿ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿತ್ತು. ರಾಜ್ಯದಲ್ಲಿ ಪಕ್ಷವು ನೆಲೆ ಕಂಡುಕೊಳ್ಳಲು ವೇದಿಕೆ ರೂಪಿಸಿಕೊಳ್ಳುತ್ತಿದೆ. ಈ ವೇಳೆಯಲ್ಲಿ ರಾವ್ ಪಕ್ಷದಲ್ಲಿ ಪ್ರಮುಖರಾಗಿ ಗುರುತಿಸಿಕೊಂಡಿದ್ದರು. ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಮಾರ್ಚ್ 4ಕ್ಕೆ ದಾವಣಗೆರೆಯಲ್ಲಿ ನಡೆಯುವ ಸಮಾವೇಶಕ್ಕೆ ಆಗಮಿಸುತ್ತಿದ್ದಾರೆ.
ನಂತರ ಸುದ್ದಿಗಾರರ ಜೊತೆ ಮಾತನಾಡಿದ ಭಾಸ್ಕರ್ ಮಾತನಾಡಿ, ಆಮ್ ಆದ್ಮಿ ಪಾರ್ಟಿಯಲ್ಲಿ ರಾಜಕೀಯ ಪ್ರಬುದ್ಧತೆ ಇಲ್ಲ. ಹೀಗಾಗಿ ಆಮ್ ಆದ್ಮಿ ಪಕ್ಷ ತೊರೆಯಬೇಕಾಯಿತು. ಆಪ್ ಸೇರಿ ತಾವು ರಾಜಕೀಯವಾಗಿ ದುಡಿಕಿನ ತೀರ್ಮಾನ ತೆಗೆದುಕೊಂಡಿಲ್ಲ. ತಮ್ಮನ್ನು ಪಕ್ಷ ಸರಿಯಾಗಿ ಬಳಿಸಿಕೊಂಡಿಲ್ಲ. ಹೀಗಿರುವಾಗ ರಾಜಕೀಯವಾಗಿ ಸೂಕ್ತ ನಿರ್ಧಾರ ತೆಗೆದುಕೊಳ್ಳಬೇಕಾಯಿತು ಎಂದರು. ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ್ ಬಗ್ಗೆ ತಾವು ವೈಯಕ್ತಿಕ ಟೀಕೆ ಮಾಡಿಲ್ಲ ಎಂದು ಸಮರ್ಥಿಸಿಕೊಂಡರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ