ನವದೆಹಲಿ:
ವಿಧಾನಪರಿಷತ್ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಟಿಕೆಟ್ ವಂಚಿತ ನಾಗರಾಜ್ ಛಬ್ಬಿ ಇಂದು ಬಿಜೆಪಿಗೆ ಸೇರ್ಪಡೆಯಾದರು. ನವದೆಹಲಿಯಲ್ಲಿ ಅವರಿಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಬಿಜೆಪಿ ಪಕ್ಷದ ಬಾವುಟ ನೀಡುವ ಮೂಲಕ ಪಕ್ಷಕ್ಕೆ ಬರಮಾಡಿಕೊಂಡರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಮತ್ತಿತರರು ಉಪಸ್ಥಿತರಿದ್ದರು.
ಕಲಘಟಗಿ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ನಾಗರಾಜ್ ಛಬ್ಬಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಆಪ್ತರಾಗಿದ್ದರು. ಆದರೆ, ಕಾಂಗ್ರೆಸ್ ಪಕ್ಷ ಸಿದ್ದು ಆಪ್ತರಾದ ಸಂತೋಷ್ ಲಾಡ್ ಅವರಿಗೆ ಟಿಕೆಟ್ ನೀಡಿದೆ. ಇದರಿಂದಾಗಿ ಸಿಡಿದೆದ್ದ ನಾಗರಾಜ್ ಛಬ್ಬಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.