ನವದೆಹಲಿ:
ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ.
ಸಿಬಿಐ ತನಿಖೆಗೆ ಹೈಕೋರ್ಟ್ ತಡೆಯಾಜ್ಞೆ ತೆರವು ಕೋರಿ ಸಿಬಿಐ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಸುಪ್ರೀಂಕೋರ್ಟ್ ಇಂದು ವಿಚಾರಣೆ ನಡೆಸಿದ್ದು, ಮಧ್ಯಂತರ ಆದೇಶ ನೀಡಲು ನಿರಾಕರಿಸಿದೆ. ಅಲ್ಲದೆ, ತಡೆಯಾಜ್ಞೆ ತೆರವಿಗೆ ಹೈಕೋರ್ಟ್ ನಲ್ಲೇ ಅರ್ಜಿ ಸಲ್ಲಿಸಬಹುದು ಎಂದು ಹೇಳಿದ್ದು, ಮುಂದಿನ ವಿಚಾರಣೆಯನ್ನು ಜುಲೈ ತಿಂಗಳಿಗೆ ಮುಂದೂಡಿದೆ. ಈ ಮೂಲಕ ಡಿಕೆ.ಶಿವಕುಮಾರ್ ಅವರಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.
ಡಿಕೆ ಶಿವಕುಮಾರ್ ವಿರುದ್ಧ ಪ್ರಕರಣದ ಸಿಬಿಐ ತನಿಖೆಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿತ್ತು. ಈ ತಡೆಯಾಜ್ಞೆ ತೆರವು ಮಾಡುವಂತೆ ಸಿಬಿಐ ಸುಪ್ರೀಂಕೋರ್ಟ್ ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಿತ್ತು.