ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತು ಕಾಂಗ್ರೆಸ್ನ ಉನ್ನತ ನಾಯಕರು ಗುರುವಾರ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರೊಂದಿಗೆ ಚರ್ಚೆ ನಡೆಸಿದ್ದಾರೆ.ಕರ್ನಾಟಕ ಉಸ್ತುವಾರಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲಾ, ಪಕ್ಷದ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಮತ್ತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಉಭಯ ನಾಯಕರು ಭೇಟಿ ಮಾಡಿದ್ದರು.
ಕರ್ನಾಟಕ ಸಂಪುಟಕ್ಕೆ ಸುಮಾರು 20 ಸಚಿವರನ್ನು ಸೇರ್ಪಡೆ ಮಾಡಿಕೊಳ್ಳುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿದ್ದು, ಅದು ಅಂತಿಮಗೊಳ್ಳುವ ಮೊದಲು ಮತ್ತೊಂದು ಸುತ್ತಿನ ಚರ್ಚೆ ನಡೆಸಲಾಗುವುದು ಎಂದು ಹೇಳಿವೆ.ಮೇ 20 ರಂದು ಎಂಟು ಕ್ಯಾಬಿನೆಟ್ ಸಚಿವರೊಂದಿಗೆ ಸಿದ್ದರಾಮಯ್ಯ ಮತ್ತು ಶಿವಕುಮಾರ್ ಕ್ರಮವಾಗಿ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು.
ಮೊದಲ ಹಂತದಲ್ಲಿಯೇ ಸುಮಾರು 28 ಶಾಸಕರನ್ನು ಸಂಪುಟಕ್ಕೆ ಸೇರಿಸಿಕೊಳ್ಳುವ ಹಿಂದಿನ ಯೋಜನೆಗೆ ವಿರುದ್ಧವಾಗಿ ಎಂಟು ಸಚಿವರ ಮೊದಲ ಪಟ್ಟಿಗೆ ಕಾಂಗ್ರೆಸ್ ಹೈಕಮಾಂಡ್ ಅನುಮೋದನೆ ನೀಡಿತ್ತು. ಬಳಿಕ ಅವರು ಪ್ರಮಾಣ ವಚನ ಸ್ವೀಕರಿಸಿದ್ದರು.ಕರ್ನಾಟಕದಲ್ಲಿ ಗರಿಷ್ಠ 34 ಮಂದಿ ಸಚಿವರಾಗಬಹುದಾಗಿದ್ದು, ಎಲ್ಲ ಆಕಾಂಕ್ಷಿಗಳಿಗೆ ಅವಕಾಶ ಕಲ್ಪಿಸುವುದು ಕಾಂಗ್ರೆಸ್‌ಗೆ ಕಷ್ಟವಾಗಲಿದೆ.