ಬೆಂಗಳೂರು:
ರಾಷ್ಟ್ರೀಯ ಆರೋಗ್ಯ ಅಭಿಯಾನದ ಉದ್ದೇಶ ಸಮರ್ಪಕವಾಗಿ ಜಾರಿಯಾಗದೆ ತಜ್ಞ ವೈದ್ಯರ ಕೊರತೆ ಮತ್ತು ಎಂಆರ್ ಐ ಹಾಗೂ ಡಯಾಲಿಸಿಸ್ ಯಂತ್ರಗಳನ್ನು ತಾಲ್ಲೂಕಾ ಆಸ್ಪತ್ತೆಗಳಲ್ಲಿ ಸಮರ್ಪಕವಾಗಿ ಅಳವಡಿಸದಿರುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಅಧಿಕಾರಿಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು.
ರಾಷ್ಟ್ರೀಯ ಆರೋಗ್ಯ ಅಭಿಯಾನ, ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್, ಆರೋಗ್ಯ ಸೇವೆಯ ಲಭ್ಯತೆ ಕುರಿತಂತೆ ಪ್ರತ್ಯೇಕವಾಗಿ ಪ್ರಗತಿ ಪರಿಶೀಲನೆ ನಡೆಸಿದ ಮುಖ್ಯಮಂತ್ರಿ, ಕೊರತೆ ಗುರುತಿಸಿ ಮುಂದಿನ ಸಭೆ ವೇಳೆಗೆ ಲೋಪಗಳನ್ನು ಸರಿಪಡಿಸಿರಬೇಕು ಎಂದು ಸ್ಪಷ್ಟ ಸೂಚನೆ ನೀಡಿದರು.
ರಾಷ್ಟ್ರೀಯ ಆರೋಗ್ಯ ಮಿಷನ್ ನ ಅನುದಾನ ಸಕಾಲದಲ್ಲಿ ವೆಚ್ಚವಾಗದಿರುವುದನ್ನು ಗುರುತಿಸಿದ ಮುಖ್ಯಮಂತ್ರಿ, ರಾಷ್ಟ್ರೀಯ ಆರೋಗ್ಯ ಮಿಷನ್ ನಡಿ ಆರೋಗ್ಯ ವ್ಯವಸ್ಥೆ ಬಲಪಡಿಸಲು ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳಬೇಕು. ಈ ಯೋಜನೆಯಡಿ ಶೇ. 52 ರಷ್ಟು ತಜ್ಞ ವೈದ್ಯರ ಕೊರತೆ ಇದೆ, ಶೇ. 31 ರಷ್ಟು ಎಂಬಿಬಿಎಸ್ ವೈದ್ಯರ ಕೊರತೆ ಹಾಗೂ ಶೇ. 18 ರಷ್ಟು ನರ್ಸ್ ಸಿಬ್ಬಂದಿ ಕೊರತೆ ಇರುವುದನ್ನು ಗಮನಿಸಿದ ಮುಖ್ಯಮಂತ್ರಿಗಳು, ಇವರಿಗೆ ವೇತನ ಹೆಚ್ಚಳ ಮಾಡುವ ಬಗ್ಗೆ ಪರಿಶೀಲಿಸಿ, ಈ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.