ಬೆಳಗಾವಿ:
ಲೋಕಸಭೆಯಲ್ಲಿ ‘ಭದ್ರತಾ ಲೋಪ’ ನಡೆದು ಆಗಂತುಕರು ಸದನದೊಳಗೆ ನುಗ್ಗಿ ಅವಾಂತರ ಸೃಷ್ಟಿಸಿದ ಬೆನ್ನಲ್ಲೇ ಬೆಳಗಾವಿಯ ಸುವರ್ಣಸೌಧದಲ್ಲಿ ಭದ್ರತೆ ಹೆಚ್ಚಿಸಿ, ಎಲ್ಲೆಡೆ ಕಟ್ಟೆಚ್ಚರ ವಹಿಸಲಾಗಿದೆ.
ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಅವರು ಸುವರ್ಣ ವಿಧಾನಸೌಧದ ಭದ್ರತಾ ವ್ಯವಸ್ಥೆಗಳನ್ನು ಪರಿಶೀಲಿಸಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ತಮ್ಮ ಚೇಂಬರ್ನಲ್ಲಿ ಉನ್ನತ ಮಟ್ಟದ ಸಭೆ ನಡೆಸಿದರು.
ಸಭೆಯಲ್ಲಿ ಭದ್ರತಾ ಸಿಬ್ಬಂದಿಗಳಿಗೆ ಎಲ್ಲೆಡೆ ಕಟ್ಟೆಚ್ಚರ ವಹಿಸುವಂತೆ ನಿರ್ದೇಶನಗಳನ್ನು ನೀಡಿದರು, ಶಾಸಕರು ಮತ್ತು ಮಂತ್ರಿಗಳೊಂದಿಗೆ ಸಂಬಂಧ ಹೊಂದಿರುವ ವ್ಯಕ್ತಿಗಳ ಮೇಲೆ ಮೇಲ್ವಿಚಾರಣೆಯ ಮಹತ್ವವನ್ನು ಒತ್ತಿ ಹೇಳಿದರು. ಅಲ್ಲದೆ, ಅಧಿಕೃತ ಸಿಬ್ಬಂದಿಗೆ ಮಾತ್ರ ಅವಕಾಶ ನೀಡುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.ಏತನ್ಮಧ್ಯೆ, ಭದ್ರತಾ ಸಿಬ್ಬಂದಿಗಳು ಸುರ್ವಣಸೌಧ ಪ್ರವೇಶಿಸುವ ಪ್ರತೀ ವ್ಯಕ್ತಿಯನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಮಾನ್ಯ ಪಾಸ್ಗಳನ್ನು ಹೊಂದಿರುವವರಿಗೆ ಮಾತ್ರ ಪ್ರವೇಶವನ್ನು ಅನುಮತಿಸಲಾಗುತ್ತಿದೆ.
ಇಬ್ಬರು ಆಗಂತುಕರು ಸಂಸತ್ತಿನ ಸಂದರ್ಶಕರ ಗ್ಯಾಲರಿಯಿಂದ ಲೋಕಸಭೆಯ ಸದಸ್ಯರ ಪೀಠಕ್ಕೆ ಜಿಗಿದು ಹಳದಿ ಬಣ್ಣದ ಆಶ್ರುವಾಯು ಸಿಡಿಸುತ್ತಾ ಓಡಾಡಿದ ಘಟನೆ ಬುಧವಾರ ಲೋಕಸಭೆಯಲ್ಲಿ ನಡೆದಿತ್ತು.ಪರಿಣಾಮ ಸದನವನ್ನುಮಧ್ಯಾಹ್ನ 2 ಗಂಟೆಯವರೆಗೆ ಮುಂದೂಡಲಾಯಿತು.ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳುವಂತೆ ಇಬ್ಬರು ಸಾರ್ವಜನಿಕ ಗ್ಯಾಲರಿಯಿಂದ ಜಿಗಿದಿದ್ದಾರೆ.
ಶೂನ್ಯ ವೇಳೆಯಲ್ಲಿ ಒಬ್ಬರು ಅಶ್ರುವಾಯು ಎರಚುತ್ತಾ ಸಾರ್ವಜನಿಕ ಗ್ಯಾಲರಿಯಿಂದ ಜಿಗಿದರೆ ಮತ್ತೊಬ್ಬ ಲೋಕಸಭೆಯ ಬೆಂಚುಗಳ ಮೇಲೆ ಹಾರುತ್ತಿರುವುದು ಕಂಡುಬಂದಿದೆ ಎಂದು ಚೌಧರಿ ಹೇಳಿದರು.