ಕೋಲ್ಕತ್ತಾ:
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ರಾಜ್ಯದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರ ಹಿಂದುಳಿದ ವರ್ಗಗಳ ಜನರ ಆಧಾರ್ ಕಾರ್ಡ್‌ಗಳನ್ನು ನಿಷ್ಕ್ರಿಯಗೊಳಿಸಲಾಗಿದೆ ಎಂದು ಆರೋಪಿಸಿದ್ದಾರೆ.
ಈ ಕ್ರಮವು ಸಹಜ ನ್ಯಾಯದ ಸಂಪೂರ್ಣ ಉಲ್ಲಂಘನೆಯಾಗಿದೆ ಎಂದು ಕೂಡ ಮಮತಾ ಬ್ಯಾನರ್ಜಿ ಪತ್ರದಲ್ಲಿ ಆರೋಪಿಸಿದ್ದಾರೆ. ಪಶ್ಚಿಮ ಬಂಗಾಳದ ವಿಶೇಷವಾಗಿ ಪರಿಶಿಷ್ಟ ಜಾತಿಗಳು, ಪರಿಶಿಷ್ಟ ಪಂಗಡಗಳು ಮತ್ತು ಒಬಿಸಿ ಸಮುದಾಯಗಳಿಗೆ ಸೇರಿದ ಜನರ ಆಧಾರ್ ಕಾರ್ಡ್‌ಗಳನ್ನು ನಿರ್ದಾಕ್ಷಿಣ್ಯವಾಗಿ ನಿಷ್ಕ್ರಿಯಗೊಳಿಸುವ ಗಂಭೀರ ಸ್ವರೂಪದ ಹಠಾತ್ ಬೆಳವಣಿಗೆಯನ್ನು ನಿಮ್ಮ ಗಮನಕ್ಕೆ ತರಲು ನಾನು ಬಯಸುತ್ತೇನೆ ಎಂದು ಮಮತಾ ಪತ್ರದಲ್ಲಿ ಬರೆದಿದ್ದಾರೆ. ಈ ಸಮುದಾಯದ ಸದಸ್ಯರಿಗೆ ಯಾವುದೇ ಪೂರ್ವ ಸೂಚನೆ ನೀಡದೆ ಆಧಾರ್ ಕಾರ್ಡ್‌ಗಳನ್ನು ನಿಷ್ಕ್ರಿಯಗೊಳಿಸಲಾಗಿದೆ ಎಂದು ಆರೋಪಿಸಿದ್ದಾರೆ.
ದೆಹಲಿಯಲ್ಲಿರುವ UIDAl ನ ಪ್ರಧಾನ ಕಛೇರಿಯು ಯಾವುದೇ ಕ್ಷೇತ್ರ ವಿಚಾರಣೆ ಅಥವಾ ವ್ಯಕ್ತಿಗಳ ಅಭಿಪ್ರಾಯ, ಅನಿಸಿಕೆ ಕೇಳದೆ, ರಾಜ್ಯ ಸರ್ಕಾರವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ನೇರವಾಗಿ ವ್ಯಕ್ತಿಗಳು ಮತ್ತು ಕುಟುಂಬ ಸದಸ್ಯರಿಗೆ ಅವರ ಆಧಾರ್ ಕಾರ್ಡ್‌ಗಳನ್ನು ನಿಷ್ಕ್ರಿಯಗೊಳಿಸುವುದರ ಕುರಿತು ನಿಮ್ಮ ಗಮನಕ್ಕೆ ತರುತ್ತಿದ್ದೇನೆ.
ರಾಜ್ಯದ ಪ್ರತಿಯೊಬ್ಬ ನಾಗರಿಕರು ಈ ವಿಷಯದ ಬಗ್ಗೆ ಭಯದ ಸ್ಥಿತಿಯಲ್ಲಿದ್ದಾರೆ. ಕಾರಣಗಳನ್ನು ನೀಡದೆ ಆಧಾರ್ ಕಾರ್ಡ್‌ಗಳನ್ನು ನಿಷ್ಕ್ರಿಯಗೊಳಿಸುವ ಇಂತಹ ಹಠಾತ್ ಕ್ರಮಕ್ಕೆ ಕಾರಣಗಳ ಬಗ್ಗೆ ನಾನು ನಿಮ್ಮಿಂದ ತಿಳಿಯಲು ಬಯಸುತ್ತೇನೆ ಎಂದು ಮಮತಾ ಬ್ಯಾನರ್ಜಿ ಪತ್ರದಲ್ಲಿ ಬರೆದಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ