ಬೆಂಗಳೂರು:
ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ, ಮಾಜಿ ಕೇಂದ್ರ ಸಚಿವ ವಿ. ಶ್ರೀನಿವಾಸ ಪ್ರಸಾದ್ (76) ನಿಧನ ಹೊಂದಿದ್ದಾರೆ. ಮಧ್ಯರಾತ್ರಿ 1.20ರ ಸುಮಾರಿಗೆ ತೀವ್ರ ಹೃದಯಾಘಾತದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.
ಇತ್ತೀಚೆಗೆ ಬಹು ಅಂಗಾಂಗ ವೈಫಲ್ಯದಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸ ಪ್ರಸಾದ್ ಅವರು ಮೂರು ದಿನಗಳ ಹಿಂದೆ ಬೆಂಗಳೂರಿನ ಹಳೆ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ತುರ್ತು ನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ನಿನ್ನೆ ಮಧ್ಯರಾತ್ರಿ ಇದ್ದಕ್ಕಿದ್ದಂತೆ ಹೃದಯಾಘಾತವಾಗಿ ನಿಧನ ಹೊಂದಿದ್ದಾರೆ.
ಅವರು ಪತ್ನಿ ಭಾಗ್ಯಲಕ್ಷ್ಮಿ ಪ್ರಸಾದ್, ಪುತ್ರಿಯರಾದ ಪ್ರತಿಮಾ ಪ್ರಸಾದ್, ಪೂರ್ಣಿಮಾ ಪ್ರಸಾದ್, ಪೂನಂ ಪ್ರಸಾದ್ ಹಾಗೂ ಅಪಾರ ಬಂಧು-ಮಿತ್ರರು, ಅಭಿಮಾನಿಗಳನ್ನು ಅಗಲಿದ್ದಾರೆ.
ಶ್ರೀನಿವಾಸ್ ಪ್ರಸಾದ್ ಅವರು ಇತ್ತೀಚೆಗೆ ರಾಜಕೀಯ ನಿವೃತ್ತಿ ಘೋಷಿಸಿದ್ದರು. ಮೈಸೂರು, ಚಾಮರಾಜನಗರ ಭಾಗದ ಪ್ರಭಾವಿ ದಲಿತ ಮುಖಂಡರಾಗಿದ್ದರು. ಸ್ವಾಭಿಮಾನಿ ರಾಜಕಾರಣಿ ಎಂದೇ ಹೆಸರಾಗಿದ್ದರು. ಮೂಲತಃ ಮೈಸೂರಿನ ಅಶೋಕಪುರಂನವರಾದ ಶ್ರೀನಿವಾಸಪ್ರಸಾದ್ ಚಾಮರಾಜನಗರ ಮೀಸಲು ಲೋಕಸಭಾ ಕ್ಷೇತ್ರದಿಂದ ಆರು ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು.
ದಲಿತ ದಮನಿತರ ಪರವಾದ ದಿಟ್ಟ ದನಿ ಮಾಜಿ ಸಚಿವ ಮತ್ತು ಹಿರಿಯ ಮುತ್ಸದ್ದಿ ನಾಯಕ ಶ್ರೀನಿವಾಸಪ್ರಸಾದ್ ಅವರ ಸಾವು ನನ್ನನ್ನು ಆಘಾತಕ್ಕೀಡುಮಾಡಿದೆ. ಅನ್ಯಾಯ-ಅಸಮಾನತೆಯ ವಿರುದ್ಧದ ಹೋರಾಟವನ್ನೇ ಬದುಕಾಗಿಸಿಕೊಂಡಿದ್ದ ಅವರ ಅಗಲಿಕೆ ರಾಜ್ಯದ ಸಾಮಾಜಿಕ ನ್ಯಾಯದ ಪರವಾದ ರಾಜಕೀಯ ಹೋರಾಟಕ್ಕೆ ದೊಡ್ಡ ಹಿನ್ನಡೆಯಾಗಿದೆ.
ದೀರ್ಘಕಾಲ ಕಾಂಗ್ರೆಸ್ ಪಕ್ಷದ ಪ್ರಮುಖ… pic.twitter.com/E0M7JWez3h— Siddaramaiah (@siddaramaiah) April 29, 2024
ಹಿರಿಯ ನಾಯಕರು, ಸಂಸದರಾದ ಶ್ರೀ ಶ್ರೀನಿವಾಸ್ ಪ್ರಸಾದ್ ಅವರು ನಿಧನರಾದ ಸಂಗತಿ ತಿಳಿದು ಮನಸ್ಸಿಗೆ ಅಪಾರ ನೋವಾಯಿತು. ಆಪ್ತರೂ ಆಗಿದ್ದ ಪ್ರಸಾದ್ ಅವರೊಂದಿಗೆ ಕೆಲಸ ಮಾಡಿದ ದಿನಗಳು ಇನ್ನೂ ನೆನಪಿನಲ್ಲಿವೆ. ಮೃತರ ಆತ್ಮಕ್ಕೆ ಶಾಂತಿ ಕೋರುತ್ತೇನೆ. ಕುಟುಂಬ ವರ್ಗದವರು, ಅಭಿಮಾನಿಗಳಿಗೆ ಅಗಲಿಕೆಯ ನೋವು ಸಹಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು… pic.twitter.com/pFFtedqqMs
— DK Shivakumar (@DKShivakumar) April 29, 2024
ಶ್ರೀನಿವಾಸ್ ಪ್ರಸಾದ್ ಅವರ ಮೃತದೇಹವನ್ನು ಮೈಸೂರಿಗೆ ರವಾನಿಸಲಾಗುತ್ತಿದ್ದು, ಸಾರ್ವಜನಿಕ ದರ್ಶನಕ್ಕೆ ಇಡಲಾಗುತ್ತಿದೆ. ಅವರ ನಿಧನಕ್ಕೆ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಸೇರಿದಂತೆ ರಾಜಕಾರಣಿಗಳು, ಗಣ್ಯರು ಕಂಬನಿ ಮಿಡಿದಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ