ನವದೆಹಲಿ:
ಹೆಲಿಕಾಪ್ಟರ್ ಅಪಘಾತದಲ್ಲಿ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ಸಾವಿಗೀಡಾಗಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ, ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿಯವರು, ಇಸ್ಲಾಮಿಕ್ ರಿಪಬ್ಲಿಕ್ ಆಫ್ ಇರಾನ್‌ನ ಅಧ್ಯಕ್ಷ ಡಾ. ಸೈಯದ್ ಇಬ್ರಾಹಿಂ ರೈಸಿ ಅವರ ನಿಧನದಿಂದ ತೀವ್ರ ದುಃಖ ಮತ್ತು ಆಘಾತವಾಗಿದೆ. ಭಾರತ-ಇರಾನ್ ದ್ವಿಪಕ್ಷೀಯ ಸಂಬಂಧವನ್ನು ಬಲಪಡಿಸುವಲ್ಲಿ ಅವರ ಕೊಡುಗೆ ಯಾವಾಗಲೂ ಸ್ಮರಣೀಯವಾಗಿದೆ. ಇಬ್ರಾಹಿಂ ರೈಸಿ ಅವರ ಕುಟುಂಬ ಮತ್ತು ಇರಾನ್ ಜನತೆಗೆ ಸಂತಾಪಗಳನ್ನು ಸೂಚಿಸುತ್ತೇನೆ. ಈ ದುಃಖದ ಸಮಯದಲ್ಲಿ ಭಾರತ ಇರಾನ್ ಜೊತೆ ನಿಲ್ಲಲಿದೆ ಎಂದು ಹೇಳಿದ್ದಾರೆ.
ಏತನ್ಮಧ್ಯೆ ಶಾಂತಿ ಕಾಪಾಡಬೇಕು ಹಾಗೂ ವದಂತಿ ಹರಡಿಸಬಾರದು ಎಂದು ಇರಾನ್ ಪರಮೋಚ್ಚ ನಾಯಕ ಅಲಿ ಖಮೇನಿ ಮನವಿ ಮಾಡಿದ್ದಾರೆ