ರಾಮನಗರ:
ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ತಡರಾತ್ರಿ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳು ಸ್ಥಳದಲ್ಲೇಸಾವನ್ನಪ್ಪಿರುವ ಘಟನೆ ರಾಮನಗರ ತಾಲೂಕಿನ ಕಪನಯ್ಯನದೊಡ್ಡಿ ಬಳಿ ನಡೆದಿದೆ.
ಮೈಸೂರಿನಿಂದ ಬೆಂಗಳೂರಿನ ಕಡೆಗೆ ಹೋಗುತ್ತಿದ್ದ ಫಾರ್ಚುನರ್ ಕಾರು ಓವರ್ ಟೇಕ್ ಮಾಡಲು ಹೋಗಿ ಲಾರಿಗೆ ಹಿಂಭಾಗದಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಡಿಕ್ಕಿ ರಭಸಕ್ಕೆ ಕಾರಿನಲ್ಲಿದ್ದ ವಿಶ್ವ (21) ಮತ್ತು ಸೂರ್ಯ (21) ಸ್ಥಳದಲ್ಲೇ ಸಾವನ್ನಪ್ಪಿದ್ದು, ಚಾಲಕ ಸುಹಾಸ್ ಗಂಭೀರವಾಗಿ ಗಾಯಗೊಂಡಿದ್ದಾರೆ.
ಆಂಧ್ರ ಮೂಲದ ವಿದ್ಯಾರ್ಥಿಗಳು ಬೆಂಗಳೂರಿನ ವಿದ್ಯಾರಣ್ಯಪುರದ ಖಾಸಗಿ ಕಾಲೇಜಿನಲ್ಲಿ ಎಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದರು ಎನ್ನಲಾಗಿದೆ. ಕಾರ್ಯನಿಮಿತ್ತ ಮೈಸೂರಿಗೆ ಹೋಗಿ ಬೆಂಗಳೂರಿಗೆ ವಾಪಸ್ಸಾಗುವ ಸಂದರ್ಭ ದುರ್ಘಟನೆ ಸಂಭವಿಸಿದೆ. ಸ್ಥಳಕ್ಕೆ ರಾಮನಗರ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನ ರಾಮನಗರ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.