ಬೆಂಗಳೂರು:
ದಕ್ಷಿಣ ಕನ್ನಡದಲ್ಲಿಂದು ಭಾರಿ ಮಳೆಯಾಗುತ್ತಿರುವ ಹಿನ್ನೆಲೆ ಜಿಲ್ಲೆಯಾದ್ಯಂತ ಶಾಲೆಗಳಿಗೆ ಗುರುವಾರ ರಜೆ ಘೋಷಣೆ ಮಾಡಲಾಗಿದೆ.
ಅಂಗನವಾಡಿಯಿಂದ ಪ್ರೌಢ ಶಾಲೆವರೆಗೂ ರಜೆ ನೀಡಿ ಜಿಲ್ಲಾಧಿಕಾರಿ ಮುಗಿಲನ್ ಅವರು ಆದೇಶ ಹೊರಡಿಸಿದ್ದಾರೆ. ಅಲ್ಲದೇ, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ನಿನ್ನೆ ರಾತ್ರಿ ಇಡೀ ಮಳೆ ಸುರಿದಿದೆ. ಇದರಿಂದ ಜಿಲ್ಲೆಯಾದ್ಯಂತ ಭಾರೀ ಜನಜೀವನ ಅಸ್ತವ್ಯಸ್ತವಾಗಿದೆ. ಇನ್ನು ಇಂದು ಮತ್ತು ನಾಳೆ ಕೂಡ ಜಿಲ್ಲೆಯಲ್ಲಿ ಮತ್ತೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿಗಳು, ಶಾಲೆಗಳಿಗೆ ರಜೆ ಘೋಷಣೆ ಮಾಡಿದ್ದಾರೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು, ಮೈಸೂರು ಮತ್ತು ಹಾವೇರಿ ಜಿಲ್ಲೆಯಲ್ಲಿ ಗಂಟೆಗೆ 50 kmph ವೇಗದ ಗಾಳಿ, ಗುಡುಗು ಸಹಿತ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಸಿಡಿಲು- ಗುಡುಗು ವೇಳೆ ಎಲೆಕ್ಟ್ರಿಕ್ ಉಪಕರಣಗಳನ್ನು ಆಫ್ ಮಾಡುವಂತೆ ಹಾಗೂ ಮಳೆ ಬರುವಾಗ ಶಿಥಿಲ ಕಟ್ಟಡ, ಮರದ ಕೆಳಗಡೆ ನಿಲ್ಲದಂತೆ ಹವಾಮಾನ ಇಲಾಖೆ ಸೂಚನೆ ನೀಡಿದೆ.