ನವದೆಹಲಿ:
ಭಾರೀ ಮಳೆಯ ಮಧ್ಯೆ ಶುಕ್ರವಾರ ಬೆಳ್ಳಂಬೆಳಗ್ಗೆ ದೆಹಲಿ ವಿಮಾನ ನಿಲ್ದಾಣದ ಟರ್ಮಿನಲ್ -1 ರ ಮೇಲ್ಛಾವಣಿಯ ಒಂದು ಭಾಗ ಕೆಳಗೆ ಸಂಚರಿಸುತ್ತಿದ್ದ ಟ್ಯಾಕ್ಸಿಗಳು ಹಾಗೂ ಕಾರುಗಳ ಮೇಲೆ ಇದ್ದಕ್ಕಿದ್ದಂತೆ ಕುಸಿದುಬಿದ್ದ ಪರಿಣಾಮ ಆರು ಮಂದಿ ಗಾಯಗೊಂಡಿದ್ದಾರೆ ಎಂದು ದೆಹಲಿ ಅಗ್ನಿಶಾಮಕ ಸೇವೆಗಳ (DFS) ಅಧಿಕಾರಿಗಳು ತಿಳಿಸಿದ್ದಾರೆ.
ಹಾನಿಗೊಳಗಾದ ವಾಹನಗಳಲ್ಲಿ ಯಾರಾದರೂ ಸಿಲುಕಿದ್ದಾರೆಯೇ ಎಂದು ಖಚಿತಪಡಿಸಿಕೊಳ್ಳಲು ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅವರು ಹೇಳಿದರು.
ಮೇಲ್ಛಾವಣಿ ಕುಸಿತದ ಘಟನೆಯ ನಂತರ ಟರ್ಮಿನಲ್ -1ರಲ್ಲಿ ವಿಮಾನ ನಿರ್ಗಮನವನ್ನು ಸ್ಥಗಿತಗೊಳಿಸಲಾಗಿದೆ ಎಂದು ವಿಮಾನ ನಿಲ್ದಾಣದ ವಕ್ತಾರರು ತಿಳಿಸಿದ್ದಾರೆ.ಈ ಬಗ್ಗೆ ಎಕ್ಸ್ ಖಾತೆಯಲ್ಲಿ ನಾಗರಿಕ ವಿಮಾನಯಾನ ಸಚಿವ ಕೆ ರಾಮಮೋಹನ್ ನಾಯ್ಡು, ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಅವಲೋಕಿಸಲಾಗುತ್ತಿದೆ.ಗಾಯಗೊಂಡವರನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಹೇಳಿದ್ದಾರೆ.
ದೆಹಲಿ ವಿಮಾನ ನಿಲ್ದಾಣದ ಟರ್ಮಿನಲ್ 1ರಲ್ಲಿ ಮೇಲ್ಛಾವಣಿ ಕುಸಿತದ ಘಟನೆಯನ್ನು ವೈಯಕ್ತಿಕವಾಗಿ ಮೇಲ್ವಿಚಾರಣೆ ಮಾಡಲಾಗುತ್ತಿದೆ. ರಕ್ಷಣಾ ಕಾರ್ಯ ಸಾಗುತ್ತಿದೆ. ಟರ್ಮಿನಲ್ 1ರಲ್ಲಿ ಸಂಚರಿಸುವ ಪ್ರಯಾಣಿಕರಿಗೆ ಸಹಾಯ ಮಾಡಲು ವಿಮಾನಯಾನ ಸಂಸ್ಥೆಗಳಿಗೆ ಸಲಹೆ ನೀಡಲಾಗಿದೆ. ಗಾಯಗೊಂಡವರನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ರಕ್ಷಣಾ ಕಾರ್ಯಾಚರಣೆಗಳು ಇನ್ನೂ ಮುಂದುವರೆದಿದೆ ಎಂದು ಹೇಳಿದ್ದಾರೆ.
