ಬೆಂಗಳೂರು:
ಕರ್ನಾಟಕ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಬಿ ವೀರಪ್ಪ ಅವರನ್ನು ಉಪಲೋಕಾಯುಕ್ತರನ್ನಾಗಿ ರಾಜ್ಯಪಾಲರು ಶುಕ್ರವಾರ ನೇಮಕ ಮಾಡಿ ಆದೇಶಿಸಿದ್ದಾರೆ. ಕರ್ನಾಟಕ ಲೋಕಾಯುಕ್ತ ಕಾಯಿದೆ 1984ರ ಸೆಕ್ಷನ್ 3(1)ರ ಅಡಿ ದೊರೆತಿರುವ ಅಧಿಕಾರ ಬಳಸಿ ನಿವೃತ್ತ ನ್ಯಾಯಮೂರ್ತಿ ವೀರಪ್ಪ ಅವರನ್ನು ಉಪಲೋಕಾಯುಕ್ತರನ್ನಾಗಿ ನೇಮಕ ಮಾಡಿರುವುದಾಗಿ ರಾಜ್ಯಪಾಲರು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.
ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್ ವಿ ಅಂಜಾರಿಯಾ, ವಿಧಾನಸಭೆ ಸ್ಪೀಕರ್, ಪರಿಷತ್ ಸಭಾಪತಿ ಮತ್ತು ವಿರೋಧ ಪಕ್ಷದ ನಾಯಕರ ಜೊತೆ ಸಮಾಲೋಚನೆ ನಡೆಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಮೂರ್ತಿ ವೀರಪ್ಪ ಅವರ ಹೆಸರನ್ನು ಶಿಫಾರಸ್ಸು ಮಾಡಿದ್ದಾರೆ ಎಂದು ಅಧಿಸೂಚನೆಯಲ್ಲಿ ವಿವರಿಸಲಾಗಿದೆ.
ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನವರಾದ ವೀರಪ್ಪ, 2023ರ ಮೇ ತಿಂಗಳಲ್ಲಿ ಹೈಕೋರ್ಟ್ ನ್ಯಾಯಮೂರ್ತಿ ಹುದ್ದೆಯಿಂದ ನಿವೃತ್ತರಾಗಿದ್ದರು.