ಬೆಂಗಳೂರು:
ರಾಜ್ಯದಲ್ಲಿ ಡೆಂಗ್ಯೂ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ನಿಯಂತ್ರಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಬಿಜೆಪಿ ಕಿಡಿಕಾರಿದೆ.ಬಿಜೆಪಿ ಮುಖಂಡರೂ ಆದ ಕಲಬುರಗಿ ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಹರ್ಷಾನಂದ ಗುತ್ತೇದಾರ ಅವರು ಮಾತನಾಡಿ, ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹುದ್ದೆ ಜಗಳದಿಂದ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಸಂಪೂರ್ಣ ಸ್ಥಗಿತವಾಗಿವೆ. ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ಇದರ ನಡುವೆ ಡೆಂಗ್ಯೂ ಹಾಗೂ ಝಿಕಾ ಹೆಚ್ಚಾಗುತ್ತಿದೆ. ಸರ್ಕಾರ ಡೆಂಗ್ಯೂ ನಿಯಂತ್ರಣದ ಬಗ್ಗೆ ಕ್ರಮ ಕೈಗೊಳ್ಳುವಲ್ಲಿ ವಿಫಲವಾಗಿದೆ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.
ಆಸ್ಪತ್ರೆಗಳಲ್ಲಿ ಬಹಳಷ್ಟು ಜನರು ದಾಖಲಾಗುತ್ತಿದ್ದು, ಸರಿಯಾಗಿ ಔಷಧಿ ಸಿಗುತ್ತಿಲ್ಲ. ಔಷಧಿಯ ದರ ಹೆಚ್ಚಿಸಿದ್ದಾರೆ. ಡೆಂಗ್ಯೂ ಪರೀಕ್ಷೆಗೆ ಸರ್ಕಾರ ನಿಗದಿಪಡಿಸಿದ ಮೊತ್ತವನ್ನು ಯಾರೂ ಪಾಲಿಸುತ್ತಿಲ್ಲ ಎಂದು ಆರೋಪಿಸಿದರು. ಸಾಂಕ್ರಾಮಿಕ ರೋಗಗಳ ವಿರುದ್ಧ ಹೋರಾಡಲು ಮುಖ್ಯವಾಗಿ ಸ್ವಚ್ಛತೆ ಕಾಪಾಡಬೇಕು. ಜತೆಗೆ ಕೋವಿಡ್ ಮಾದರಿಯಲ್ಲಿ ಡೆಂಗ್ಯೂ ರೋಗಿಗಳಿಗೆ ಉಚಿತ ಚಿಕಿತ್ಸೆ ನೀಡಬೇಕೆಂದು ಎಂದು ಆಗ್ರಹಿಸಿದರು.
ಡೆಂಗ್ಯೂ ಜ್ವರದಿಂದ ಆಸ್ಪತ್ರೆಗೆ ದಾಖಲಾದ ರೋಗಿಗಳಿವೆ ಕೋವಿಡ್ ಮಾದರಿಯಲ್ಲಿ ಉಚಿತ ಚಿಕಿತ್ಸೆ ದೊರೆಯಬೇಕು. ಡೆಂಗ್ಯೂ ಜ್ವರ ನಿಯಂತ್ರಣ ಅಂದರೆ ಸೊಳ್ಳೆ ನಿಯಂತ್ರಣ. ಸೊಳ್ಳೆ ನಿಯಂತ್ರಣ ಆದರೆ ಮಾತ್ರ ಡೆಂಗ್ಯೂ ನಿಯಂತ್ರಣ ಆಗಲಿದೆ. ಮಳೆಗಾಲ ಪ್ರಾರಂಭದಲ್ಲಿ ಸೊಳ್ಳೆಯಿಂದ ಹರಡುವ ಕಾಯಿಲೆ ಬರುತ್ತದೆ. ಡೆಂಗ್ಯು ತಡೆಗಟ್ಟದಿದ್ದರೆ ಚಿಕನ್ ಗುನ್ಯ, ಝೀಕಾ ವೈರಸ್ ಬರಬಹುದು. ಇದಕ್ಕೆ ತುರ್ತು ಚಿಕಿತ್ಸೆ ಅಗತ್ಯವಿದೆ. ಮೆಡಿಕಲ್ ಎಮರ್ಜೆನ್ಸಿ ಘೋಷಣೆ ಮಾಡಬೇಕು ಎಂದು ಒತ್ತಾಯಿಸಿದರು. ಡೆಂಗ್ಯುಗೆ ನಿಖರವಾದ ಚಿಕಿತ್ಸೆ ಇಲ್ಲ. ಇದರ ಜೊತೆಗೆ ಇತರ ಕಾಯಿಲೆಗಳು ಬರುತ್ತವೆ.
ರೋಗ ಪತ್ತೆಗೆ ಹೆಚ್ಚು ದರ ತೆಗೆದುಕೊಳ್ಳುವ ಲ್ಯಾಬ್‍ಗಳ ಬಾಗಿಲು ಮುಚ್ಚಿಸಬೇಕು. ಸೊಳ್ಳೆ ನಿಯಂತ್ರಣ ಮಾಡಬೇಕು. ಆರೋಗ್ಯ ಇಲಾಖೆ, ನಗರಾಭಿವೃದ್ಧಿ ಇಲಾಖೆ, ಪಂಚಾಯತ್ ರಾಜ್ ಇಲಾಖೆ ಕೆಲಸ ಮಾಡಬೇಕು. ಇದನ್ನು ನಿಯಂತ್ರಣ ಮಾಡಲು ಟಾಸ್ಕ್ ರಚನೆ ಮಾಡಬೇಕು. ಬೇಸಿಗೆ ಕಾಲದಲ್ಲೇ ನಾವು ಮಳೆಗಾಲದ ಸಮಸ್ಯೆಗಳಿಗೆ ಪರಿಹಾರ ಮಾಡಬೇಕು. ಸಮರೋಪಾದಿಯಲ್ಲಿ ಕೆಲಸ ಮಾಡಬೇಕು ಎಂದು ತಿಳಿಸಿದರು.
ಜಪಾನ್, ಸಿಂಗಾಪುರ್, ಅಮೇರಿಕಾದಲ್ಲಿ ಡೆಂಗ್ಯೂ ಕಾಯಿಲೆಗೆ ಬೇಕಾದ ಮೆಡಿಸಿನ್ ಇದೆ. ಅವುಗಳನ್ನು ರಾಜ್ಯ ಸರ್ಕಾರ ತರಿಸಿಕೊಳ್ಳಬೇಕು. ಇಲ್ಲ ಅಲ್ಲಿ ನೀರು ನಿಲ್ಲುವುದನ್ನು ತಡೆಗಟ್ಟಬೇಕು. ಸೊಳ್ಳೆ ನಿಯಂತ್ರಣ ಮಾಡಲು ಸ್ಪ್ರೇ ಮಾಡುವವರು ಕಾಣುತ್ತಿಲ್ಲ. ಪುರಸಭೆ, ಗ್ರಾ.ಪಂ.ನವರು ಎಚ್ಚೆತ್ತುಕೊಳ್ಳಬೇಕು ಎಂದು ಅವರು ಎಚ್ಚರಿಕೆ ನೀಡಿದರು. ಅದರಲ್ಲೂ, ಡೆಂಗ್ಯು ಮಕ್ಕಳಲ್ಲಿ ಹೆಚ್ಚಾಗಿ ಕಂಡುಬರುತ್ತಿದೆ. ಶಾಲೆಗಳಿಗೆ ಮಾರ್ಗಸೂಚಿ ಹೊರಡಿಸಬೇಕು. ಮಕ್ಕಳಲ್ಲಿ ಆರೋಗ್ಯ ಹದಗೆಟ್ಟಿದ್ದರೆ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು
