ಬೆಂಗಳೂರು:
ರಾಜ್ಯದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಭಾರೀ ಮಳೆಗೆ ಬೆಟ್ಟ, ಗುಡ್ಡ ಜರಿದು, ರಸ್ತೆ ಸಂಪರ್ಕ ಕಡಿತಗೊಂಡು ಜನಜೀವನ ಸಹ ಅಸ್ತವ್ಯಸ್ತವಾಗಿದೆ. ರಾಜ್ಯದಲ್ಲಿ ಇನ್ನೂ ನಾಲ್ಕು ದಿನಗಳ ಕಾಲ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿಗೆ ಜುಲೈ 27 ರವರೆಗೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮೈಸೂರು, ಮಂಡ್ಯ, ಕೊಡಗು, ಹಾಸನ ಹಾಗೂ ಚಾಮರಾಜನಗರದಲ್ಲೂ ಭಾರೀ ಮಳೆಯಾಗಲಿದೆ ಎಂದು ಸೂಚನೆ ನೀಡಲಾಗಿದೆ.
ಭಾರೀ ಮಳೆಯಿಂದ ತತ್ತರಿಸಿ ಹೋಗಿರುವ ಉತ್ತರ ಕನ್ನಡ ಜಿಲ್ಲೆಯಲ್ಲಿ ಮತ್ತೆ ಭಾರೀ ಮಳೆ ಸುರಿಯುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 115.6 ಮಿ.ಮೀ ನಿಂದ 204.4 ಮಿಮೀ ಮಳೆಯ ಸಾಧ್ಯತೆ ಇರುವುದರಿಂದ ಗುರುವಾರ ಆರೆಂಜ್ ಅಲರ್ಟ್ ನೀಡಲಾಗಿದೆ. ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಭಾರೀ ಮಳೆಯ ಮುನ್ನೆಚ್ಚರಿಕೆ ಇರುವುದರಿಂದ ಆರೆಂಜ್ ಅಲರ್ಟ್ ನೀಡಲಾಗಿದೆ. ಈ ಭಾಗದಲ್ಲಿ 115.5 ಮಿಮೀಟರ್ ವರೆಗೂ ಮಳೆಯಾಗುವ ಸಾಧ್ಯತೆ ಇದೆ. ಭಾರೀ ಗಾಳಿ ಮಳೆಯ ಸಾಧ್ಯತೆ ಇರಲಿದೆ ಎನ್ನಲಾಗಿದೆ.
ಇನ್ನು ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಹಗುರವಾದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕಳೆದ ಹಲವು ದಿನಗಳಿಂದ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದೆ. ನಿನ್ನೆ ಬೆಂಗಳೂರಿನ ಹಲವೆಡೆ ಸಾಧಾರಾಣ ಮಳೆಯಾಗಿತ್ತು. ಇವತ್ತೂ ಸಹ ಮೋಡ ಕವಿದ ವಾತಾವರಣ ಮುಂದುವರೆದಿದೆ. ಬೆಂಗಳೂರಿನಲ್ಲಿ ಜುಲೈ 24 ರಿಂದ 27ರ ವರೆಗೆ ಹಗುರವಾಗಿ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಮುನ್ಸೂಚನೆ ನೀಡಲಾಗಿದೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ವಾರಗಳಿಂದ ಮಳೆಯ ಆರ್ಭಟ ಮುಂದುವರಿದೆ. ಜಿಲ್ಲೆಯ 7 ತಾಲೂಕಿನಲ್ಲಿ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ಕಾರವಾರ, ಅಂಕೋಲಾ, ಕುಮಟಾ, ಭಟ್ಕಳ, ದಾಂಡೇಲಿ, ಹೊನ್ನಾವರ, ಜೋಯಿಡಾ ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಆದೇಶ ನೀಡಿದ್ದಾರೆ.
ಧಾರವಾಡ ಜಿಲ್ಲೆಯಾದ್ಯಂತ ನಿರಂತರ ಮಳೆ ಮತ್ತು ತಂಪು ಗಾಳಿ ಬೀಸುತ್ತಿರುವದರಿಂದ ನಾಳೆ ಜುಲೈ 25 ಮತ್ತು 26ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ, ಪೂರ್ವ ಪ್ರಾಥಮಿಕ, ಪ್ರಾಥಮಿಕ, ಪ್ರೌಢ ಶಾಲೆ ಮತ್ತು ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ, ಜಿಲ್ಲಾಧಿಕಾರಿ ದಿವ್ಯ ಪ್ರಭು ಆದೇಶಿಸಿದ್ದಾರೆ. ಜಿಲ್ಲೆಯ ಬಹುತೇಕ ಕಡೆಯಲ್ಲಿ ನಿರಂತರವಾಗಿ ಮಳೆ ಆಗುತ್ತಿದೆ. ಮತ್ತು ತಂಪುಗಾಳಿ ಬಿಸುತ್ತಿದೆ. ಮಕ್ಕಳ ಆರೋಗ್ಯ ಮತ್ತು ಸುರಕ್ಷತೆ ದೃಷ್ಟಿಯಿಂದ ಜಿಲ್ಲೆಯ ಎಲ್ಲ ಅಂಗನವಾಡಿಗಳು, ಪೂರ್ವ ಪ್ರಾಥಮಿಕ ಶಾಲೆ, ಖಾಸಗಿ, ಅನುದಾನಿತ, ಸರಕಾರಿ ಪ್ರಾಥಮಿಕ ಶಾಲೆ, ಪ್ರೌಢ ಶಾಲೆ ಮತ್ತು ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಈ ರಜಾ ದಿನಗಳನ್ನು ಮುಂದಿನ ಸಾರ್ವಜನಿಕ ರಜಾ ದಿನಗಳಂದು ಹೆಚ್ಚುವರಿ ವರ್ಗಗಳನ್ನು ನಡೆಸುವ ಮೂಲಕ ಹೊಂದಾಣೆಕೆ ಮಾಡಿಕೊಳ್ಳಲು ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರಿಗೆ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಿಗೆ ಜಿಲ್ಲಾಧಿಕಾರಿ ದಿವ್ಯ ಪ್ರಭು ಸೂಚಿಸಿದ್ದಾರೆ.
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಹುಲಗಬಾಳಿ ಮಾಂಗವಸ್ತಿ ಗ್ರಾಮಗಳು ಕೃಷ್ಣಾ ನದಿ ಸುತ್ತುವರೆದು ನಡುಗಡ್ಡೆಯಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ನಡುಗಡ್ಡೆಯಲ್ಲಿ ಹಲವು ಕುಟುಂಬಗಳು ಸಿಲುಕಿಕೊಂಡಿವೆ. ಆರಂಭದಲ್ಲಿ ಸುಮಾರು ಐವತ್ತು ಮನೆಗಳು ಮುಳುಗುವ ಸಾಧ್ಯತೆಯಿದೆ ಎನ್ನಲಾಗ್ತಿದೆ. ಆದರೆ ಗ್ರಾಮಸ್ಥರು ಆ ಸ್ಥಳದಿಂದ ಶಿಫ್ಟ್ ಆಗಲು ಹಿಂದೇಟು ಹಾಕುತ್ತಿದ್ದಾರೆ. ಗ್ರಾಮಸ್ಥರು ಮನವಿಗೆ ಸ್ಪಂದಿಸದ ಹಿನ್ನಲೆ ಅಥಣಿ ತಹಶೀಲ್ದಾರ್ ವಾಣಿ ವಾಪಾಸ್ ಬಂದಿದ್ದಾರೆ. ಪ್ರವಾಹ ಬಂದಾಗ ಬರುತ್ತಾರೆ, ಆಶ್ವಾಸನೆ ನೀಡಿ ಹೋಗುತ್ತಾರೆ ಎಂದು ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ.
ಜುಲೈ 25 ಮತ್ತು 26ರಂದು ಬೆಳಗಾವಿ, ಖಾನಾಪುರ, ನಿಪ್ಪಾಣಿ, ಚಿಕ್ಕೋಡಿ, ಬೈಲಹೊಂಗಲ, ಕಿತ್ತೂರು ತಾಲೂಕುಗಳಲ್ಲಿನ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶಿಸಿದ್ದಾರೆ.