ಕಲಬುರಗಿ:
ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಹಾಗೂ ದೌರ್ಜನ್ಯ ನಡೆಸಿರುವ ಆರೋಪಗಳ ಹಿನ್ನೆಲೆಯಲ್ಲಿ ಜಿಲ್ಲೆಯ ಜೇವರ್ಗಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಪ್ರಭುಗೌಡ ಮಾಡಗಿ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಆದೇಶಿಸಿದ್ದಾರೆ.
ಪ್ರಭುಗೌಡ ತಮ್ಮೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿ ಶಾಲೆಯ ಐವರು ವಿದ್ಯಾರ್ಥಿನಿಯರು ಲಿಖಿತ ದೂರು ಸಲ್ಲಿಸಿದ್ದರು. ಈ ಕುರಿತು ಜಂಟಿ ತಪಾಸಣಾ ವರದಿ ನೀಡುವಂತೆ ಜಿಲ್ಲಾಧಿಕಾರಿ ಫೌಜಿಯಾ ಬಿಸಿಎಂ ಇಲಾಖೆ ಜಿಲ್ಲಾ ಅಧಿಕಾರಿ ಪ್ರಭು ದೊರೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಜಾವೀದ್ ಕರಂಗಿ ಅವರಿಗೆ ಸೂಚಿಸಿದ್ದರು. ಅಧಿಕಾರಿಗಳು ಶಾಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ನಾಲ್ವರು ವಿದ್ಯಾರ್ಥಿನಿಯರು ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವ ಕುರಿತು ತಿಳಿಸಿದ್ದರು. ಈ ವರದಿ ಆಧರಿಸಿ ಪ್ರಭುಗೌಡ ಅವರನ್ನು ಅಮಾನತುಗೊಳಿಸಲಾಗಿದೆ.
ಜೇವರ್ಗಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಓದುತ್ತಿರುವ ಎಲ್ಲರೂ ವಿದ್ಯಾರ್ಥಿನಿಯರೇ ಆಗಿದ್ದು, ಪುರುಷ ದೈಹಿಕ ಶಿಕ್ಷಣ ಶಿಕ್ಷಕನನ್ನು ನಿಯೋಜಿಸಿರುವ ಬಗ್ಗೆ ಪೋಷಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ
