ಜೈಪುರ:
ದುಬೈ-ಜೈಪುರ ಏರ್ ಇಂಡಿಯಾ ವಿಮಾನವು ಬಾಂಬ್ ಬೆದರಿಕೆಯಿಂದಾಗಿ ಶನಿವಾರ ಬೆಳಗ್ಗೆ ಜೈಪುರದ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿತು, ನಂತರ ಅದು ಹುಸಿ ಬಾಂಬ್ ಬೆದರಿಕೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬಾಂಬ್ ಬೆದರಿಕೆಯ ಬಗ್ಗೆ ಅಧಿಕಾರಿಗಳು ಎಚ್ಚರಿಕೆ ನೀಡಿದ ನಂತರ, ಜೈಪುರ ವಿಮಾನ ನಿಲ್ದಾಣದಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಲಾಯಿತು. 189 ಪ್ರಯಾಣಿಕರಿದ್ದ ವಿಮಾನವು ಬೆಳಗಿನ ಜಾವ 1.20ಕ್ಕೆ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಲ್ಯಾಂಡ್ ಆಯಿತು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ವಿಮಾನವನ್ನು ಕೂಲಂಕಷವಾಗಿ ಪರಿಶೀಲಿಸಲಾಗಿದ್ದು, ಯಾವುದೇ ಅನುಮಾನಾಸ್ಪದ ವಸ್ತು ಕಂಡುಬಂದಿಲ್ಲ ಎಂದು ಅವರು ಹೇಳಿದ್ದಾರೆ. ದೇಶೀಯ ಮತ್ತು ಅಂತರಾಷ್ಟ್ರೀಯ ಮಾರ್ಗಗಳಲ್ಲಿ ವಿವಿಧ ವಿಮಾನಯಾನ ಸಂಸ್ಥೆಗಳು ಸರಣಿ ಬಾಂಬ್ ಬೆದರಿಕೆ ಸಂದೇಶಗಳನ್ನು ಸ್ವೀಕರಿಸುತ್ತಿದ್ದು, ಪ್ರಯಾಣಿಕರ ತೀವ್ರ ಆತಂಕಕ್ಕೆ ಕಾರಣವಾಗಿದೆ. ಸಾಮಾಜಿಕ ಮಾಧ್ಯಮಗಳ ಮೂಲಕ ಹೆಚ್ಚಿನ ಬೆದರಿಕೆಗಳನ್ನು ಸ್ವೀಕರಿಸಲಾಗಿದೆ ಮತ್ತು ಅವೆಲ್ಲವೂ ಹುಸಿ ಬಾಂಬ್ ಬೆದರಿಕೆ ಎಂದು ತಿಳಿದುಬಂದಿದೆ.
ಈ ವಾರ 20 ಕ್ಕೂ ಹೆಚ್ಚು ವಿಮಾನಗಳು ಬಾಂಬ್ ಬೆದರಿಕೆ ಸಂದೇಶಗಳನ್ನು ಸ್ವೀಕರಿಸಿವೆ. ಇದು ಮಾರ್ಗ ಬದಲಾವಣೆಗಳಿಗೆ ಮತ್ತು ವಿಮಾನಗಳ ವಿಳಂಬಕ್ಕೆ ಕಾರಣವಾಯಿತು.