ತುಮಕೂರು:
ಜಲ ಜೀವನ್ ಮಿಷನ್ (ಜೆಜೆಎಂ) ಯೋಜನೆಯ ಕಾಮಗಾರಿಯಲ್ಲಿ ಗುಣಮಟ್ಟ ಕಾಯ್ದುಕೊಳ್ಳದ ಗುತ್ತಿಗೆದಾರರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ಎಚ್ಚರಿಸಿದ್ದಾರೆ.ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ನಡೆದ ಜೆಜೆಎಂ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.
ಗ್ರಾಮೀಣ ಭಾಗದ ಜನರ ಮನೆ ಬಾಗಿಲಿಗೆ ಕುಡಿಯುವ ನೀರು ಪೂರೈಸಲು ಯೋಜನೆ ರೂಪಿಸಲಾಗಿದೆ. ಇದರಲ್ಲಿ ಅಕ್ರಮ ನಡೆಯದಂತೆ ನಿಗಾ ವಹಿಸಬೇಕು. ಒಂದು ವರ್ಷದ ಒಳಗೆ ಕಾಮಗಾರಿಯಲ್ಲಿ ಯಾವುದೇ ಲೋಪದೋಷ ಕಂಡು ಬಂದರೆ ಅದನ್ನು ಸರಿಪಡಿಸುವುದು ಗುತ್ತಿಗೆದಾರರ ಜವಾಬ್ದಾರಿ. ಅಗತ್ಯ ಇರುವ ಕಡೆ ಮಾತ್ರ ಜೆಜೆಎಂ ಅನುಷ್ಠಾನಕ್ಕೆ ತರಬೇಕು ಎಂದು ಸೂಚಿಸಿದರು.
ಗ್ರಾಮೀಣ ನೀರು ಸರಬರಾಜು ಮತ್ತು ನೈರ್ಮಲ್ಯ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಕುಮಾರಸ್ವಾಮಿ, ಕೃಷಿ ಇಲಾಖೆ ಜಂಟಿ ನಿರ್ದೇಶಕ ರಮೇಶ್, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಸಂಜೀವಪ್ಪ, ಉಪ ಅರಣ್ಯ ಸಂರಕ್ಷಣಾಧಿಕಾರಿ (ಸಾಮಾಜಿಕ) ದೇವರಾಜು ಇತರರು ಹಾಜರಿದ್ದರು.