ಬೆಂಗಳೂರು:
ರೈತ ರುದ್ರಪ್ಪ ಆತ್ಮಹತ್ಯೆಗೆ ಸಂಬಂಧಿಸಿದಂತೆ ಸುಳ್ಳು ಸುದ್ದಿ ಹಬ್ಬಿಸಿದ ಆರೋಪದ ಮೇಲೆ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಹಾವೇರಿ ಸೆನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎಫ್‌ಐಆರ್‌ಗೆ ಹೈಕೋರ್ಟ್ ಗುರುವಾರ ತಡೆ ನೀಡಿದೆ.
ಹಾವೇರಿ ಸೆನ್ (ಸೈಬರ್, ಆರ್ಥಿಕ ಹಾಗೂ ಮಾದಕ ದ್ರವ್ಯ ನಿಯಂತ್ರಣ) ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್ ರದ್ದುಪಡಿಸಬೇಕು ಎಂದು ಕೋರಿ ಬಿಜೆಪಿಯ ತೇಜಸ್ವಿ ಸೂರ್ಯ ಸಲ್ಲಿಸಿದ್ದ ಅರ್ಜಿಯ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿದ್ದು, ಎಫ್‌ಐಆರ್‌ಗೆ ತಡೆ ನೀಡಿದೆ.
ತೇಜಸ್ವಿ ಸೂರ್ಯ ಪರ ವಾದ ಮಂಡಿಸಿದ ವಕೀಲರು, ತೇಜಸ್ವಿ ಸೂರ್ಯ ಅವರು ರೈತ ರುದ್ರಪ್ಪರವರ ಕುಟುಂಬಸ್ಥರ ಹೇಳಿಕೆಗಳನ್ನು ಆಧರಿಸಿ ಟ್ವೀಟ್ ಮಾಡಿದ್ದಾರೆ. ಆದರೆ, ಜಿಲ್ಲಾ ಪೊಲೀಸರಿಂದ ಸ್ಪಷ್ಟನೆ ಸಿಗುತ್ತಿದ್ದಂತೆಯೇ ಟ್ವೀಟ್ ಡಿಲೀಟ್ ಮಾಡಲಾಗಿದೆ. ಆದ ಕಾರಣ ಅವರ ವಿರುದ್ಧ ಕಾನೂನು ಪ್ರಕ್ರಿಯೆ ಜಾರಿಗೊಳಿಸದಿರಲು ಸೂಚನೆ ನೀಡಬೇಕೆಂದು ನ್ಯಾಯಾಲಯವನ್ನು ಮನವಿ ಮಾಡಿದ್ದರು. ಬಳಿಕ ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶರು ಪ್ರಕರಣಕ್ಕೆ ತಡೆಯಾಜ್ಞೆ ನೀಡಿ, ವಿಚಾರಣೆಯನ್ನು ಡಿಸೆಂಬರ್ 4ಕ್ಕೆ ಮುಂದೂಡಿದರು.
ಪಹಣಿಯಲ್ಲಿ ವಕ್ಫ್ ಎಂದು ನಮೂದಾದ ಹಿನ್ನೆಲೆ ರೈತ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತೇಜಸ್ವಿ ಸೂರ್ಯ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದರು. ಬಳಿಕ ಸಾಲಬಾಧೆಗೆ ನೊಂದು ರೈತ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪೊಲೀಸ್ ಇಲಾಖೆ ಹಾಗೂ ಹಾವೇರಿ ಜಿಲ್ಲಾಡಳಿತ ಸ್ಪಷ್ಟನೆ ನೀಡಿತ್ತು.
ಈ ಕಾರಣಕ್ಕೆ ತೇಜಸ್ವಿ ಸೂರ್ಯ ಅವರು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ ಎಂದು ಹಾವೇರಿ ಸೆನ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು.