ಕೋಟಾ:
ಒಡಿಶಾದ 18 ವರ್ಷದ ನೀಟ್ ಆಕಾಂಕ್ಷಿಯೊಬ್ಬರು ಇಲ್ಲಿನ ಹಾಸ್ಟೆಲ್ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.ಗುರುವಾರ ರಾತ್ರಿ ವಿಜ್ಞಾನ ನಗರ ಪ್ರದೇಶದ ಅಂಬೇಡ್ಕರ್ ಕಾಲೋನಿಯಲ್ಲಿ ಈ ಘಟನೆ ನಡೆದಿದ್ದು, ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಪತ್ತೆಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪೊಲೀಸರ ಪ್ರಕಾರ, ಒಡಿಶಾದ ಮಯೂರ್‌ಭಂಜ್ ಜಿಲ್ಲೆಯವರಾದ ಅಭಿಜೀತ್ ಗಿರಿ ಎಂಬುವವರು 2024ರ ಏಪ್ರಿಲ್‌ನಿಂದ ಕೋಚಿಂಗ್ ಇನ್‌ಸ್ಟಿಟ್ಯೂಟ್‌ನಲ್ಲಿ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಗೆ (NEET) ತಯಾರಿ ನಡೆಸುತ್ತಿದ್ದರು.ರಾತ್ರಿ 8 ಗಂಟೆ ಸುಮಾರಿಗೆ ಮೆಸ್ ಕೆಲಸಗಾರ ಅಭಿಜೀತ್ ಅವರ ಕೋಣೆಗೆ ಆಹಾರ ನೀಡಲು ತೆರಳಿದಾಗ ಘಟನೆ ಬೆಳಕಿಗೆ ಬಂದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಎಷ್ಟು ಕೂಗಿದರೂ ಒಳಗಿನಿಂದ ಯಾವುದೇ ಪ್ರತಿಕ್ರಿಯೆ ಬಾರದ ಹಿನ್ನೆಲೆಯಲ್ಲಿ, ಮೆಸ್ ಕೆಲಸಗಾರ ಮತ್ತು ಹಾಸ್ಟೆಲ್‌ನಲ್ಲಿನ ಇತರರು ಬಾಗಿಲು ಒಡೆದು ನೋಡಿದಾಗ ಆತ ಸೀಲಿಂಗ್ ಫ್ಯಾನಿಗೆ ನೇಣು ಬಿಗಿದುಕೊಂಡಿರುವುದು ಪತ್ತೆಯಾಗಿದೆ ಎಂದು ಸಹಾಯಕ ಸಬ್‌ಇನ್ಸ್‌ಪೆಕ್ಟರ್ (ಎಎಸ್‌ಐ) ಲಾಲ್ ಸಿಂಗ್ ತನ್ವಾರ್ ಹೇಳಿದ್ದಾರೆ. ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಘಟನೆ ಬಗ್ಗೆ ಕುಟುಂಬಸ್ಥರಿಗೆ ಮಾಹಿತಿ ನೀಡಲಾಗಿದೆ. ಆತ್ಮಹತ್ಯೆಯ ಹಿಂದಿನ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಎಎಸ್ಐ ತಿಳಿಸಿದ್ದಾರೆ.
ವಿದ್ಯಾರ್ಥಿ ನಿಲಯಗಳಲ್ಲಿ ಆತ್ಮಹತ್ಯೆಗಳನ್ನು ತಡೆಗಟ್ಟಲು ಸೀಲಿಂಗ್ ಫ್ಯಾನಿಗೆ ಆತ್ಮಹತ್ಯೆ ತಡೆಗಟ್ಟುವ ಸಾಧನವನ್ನು ಅಳವಡಿಸುವುದನ್ನು ಜಿಲ್ಲಾಡಳಿತ ಕಡ್ಡಾಯಗೊಳಿಸಿದೆ. ಆದರೆ, ಈ ಹಾಸ್ಟೆಲ್ ಕೊಠಡಿಯಲ್ಲಿ ಅದನ್ನು ಅಳವಡಿಸಿಲ್ಲ ಎಂದು ಅಧಿಕಾರಿ ಹೇಳಿದರು.
ಪ್ರಾಥಮಿಕ ತನಿಖೆಯಲ್ಲಿ ಅಭಿಜೀತ್ ಅಧ್ಯಯನದಲ್ಲಿ ಉತ್ತಮವಾಗಿದ್ದರು ಮತ್ತು ಕೋಚಿಂಗ್ ತರಗತಿಗಳಿಗೆ ನಿಯಮಿತವಾಗಿ ಹಾಜರಾಗುತ್ತಿದ್ದರು ಎಂದು ಅವರು ಹೇಳಿದರು.ಈ ವರ್ಷ ಕೋಟಾದಲ್ಲಿ ಕೋಚಿಂಗ್ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಮೂರನೇ ಪ್ರಕರಣ ಇದಾಗಿದೆ. ಕೋಟಾದಲ್ಲಿ ಕಳೆದ ವರ್ಷ 17 ಆತ್ಮಹತ್ಯೆ ಪ್ರಕರಣಗಳು ವರದಿಯಾಗಿದ್ದವು.