ಚೆನ್ನೈ:
ತಮಿಳುನಾಡು ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ತಿರುನಲ್ವೇಲಿ ಶಾಸಕ ನೈನಾರ್ ನಾಗೇಂದ್ರನ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಅವರ ಅಧಿಕಾವಧಿ ಮುಗಿದ ಹಿನ್ನೆಲೆಯಲ್ಲಿ ಆ ಸ್ಥಾನಕ್ಕೆ ಬಿಜೆಪಿ ಹಿರಿಯ ಶಾಸಕ ನೈನಾರ್ ನಾಗೇಂದ್ರನ್ ಅವರನ್ನು ಆಯ್ಕೆ ಮಾಡಲಾಗಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಗೆ ನೈನಾರ್ ನಾಗೇಂದ್ರನ್ ಒಬ್ಬರೇ ನಾಮಪತ್ರ ಸಲ್ಲಿಸಿದ್ದು, ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಕೆ. ಅಣ್ಣಾಮಲೈ ಅವರು ತಮಿಳುನಾಡು ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ನೈನಾರ್ ನಾಗೇಂದ್ರನ್ ಅವರ ಹೆಸರನ್ನು ಪ್ರಸ್ತಾಪಿಸಿದರು. ಬಿಜೆಪಿಯ ಇತರ ನಾಯಕರು ಅದನ್ನು ಅನುಮೋದಿಸಿದರು.ನೈನಾರ್ ನಾಗೇಂದ್ರನ್ ಅವರು ತಮಿಳುನಾಡು ಬಿಜೆಪಿ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದು, ಅಧಿಕೃತ ಘೋಷಣೆಯೊಂದೆ ಬಾಕಿ ಇದೆ.
ಇತ್ತೀಚಿಗೆ ಅಣ್ಣಾಮಲೈ ಅವರು ತಾವು ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಯ ರೇಸ್ನಲ್ಲಿಲ್ಲ ಎಂದು ಸ್ಪಷ್ಟಪಡಿಸಿದ್ದರಿಂದ ಈ ಹುದ್ದೆಗೆ ವನತಿ ಶ್ರೀನಿವಾಸನ್ ಮತ್ತು ತಮಿಳಿಸೈ ಸೌಂದರರಾಜನ್ ಅವರ ಹೆಸರುಗಳು ಕೇಳಿಬಂದಿದ್ದವು. ಆದರೆ ಅಂತಿಮವಾಗಿ ನಾಗೇಂದ್ರನ್ ಅವರನ್ನು ಆಯ್ಕೆ ಮಾಡಲಾಗಿದೆ
